ಎಚ್.ಡಿ. ರಂಗಸ್ವಾಮಿಕನ್ನಡಪ್ರಭ ವಾರ್ತೆ ನಂಜನಗೂಡುಭಾರತದ ಮೇಲೆ ಪುರಾತನ ಕಾಲದಿಂದಲೂ ಹಲವು ದಾಳಿಗಳಾಗಿದ್ದರೂ ನಮ್ಮ ನೆಲದ ಆಚಾರ ವಿಚಾರ ಮತ್ತು ಸಂಸ್ಕೃತಿಯನ್ನು ನಾಶ ಮಾಡಲು ಸಾಧ್ಯವಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಸೋಮವಾರ ರಾಜ್ಯಮಟ್ಟದ ಭಜನಾ ಮೇಳ, ದೇಸಿ ಆಟಗಳ ಉದ್ಘಾಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಆಧುನಿಕತೆಯ ಭರಾಟೆಯಲ್ಲಿ ಪಾಶ್ಚಿಮಾತ್ಯ ರಾಷ್ಟ್ರಗಳು ಪುರಾತನ ಸಂಸ್ಕೃತಿಯಿಂದ ದೂರಾಗುತ್ತಿದ್ದರೆ ಇದಕ್ಕೆ ವ್ಯತಿರಿಕ್ತವಾಗಿ ಭಾರತದಲ್ಲಿ ನಮ್ಮ ಸಂಸ್ಕೃತಿ ಹಾಗೂ ಪರಂಪರೆಯನ್ನು ನಮ್ಮ ಬದುಕಿನ ಭಾಗವಾಗಿ ಇಂದಿಗೂ ಮುಂದುವರೆಸಿಕೊಂಡು ಹೋಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ವಿಶ್ವದೆಲ್ಲೆಡೆ ವಿವಿಧ ಕ್ಷೇತ್ರಗಳಲ್ಲಿ ಭಾರತೀಯರು ಉನ್ನತ ಸ್ಥಾನಗಳನ್ನು ಅಲಂಕರಿಸುವ ಜೊತೆಗೆ ಮಹತ್ವದ ಸಾಧನೆಯನ್ನು ತೋರಿದ್ದಾರೆ ಎಂದರು.ಮಾಜಿ ಸಚಿವೆ ರಾಣಿ ಸತೀಶ್ ಮಾತನಾಡಿ, ಭಾರತೀಯ ಪರಂಪರೆಯಲ್ಲಿ ಮಠಗಳು ಸಮಾಜವನ್ನು ಒಟ್ಟುಗೂಡಿಸುವ ಕೆಲಸದಲ್ಲಿ ನಿರತವಾಗಿದ್ದು, ಸಮಾಜದಲ್ಲಿ ಶಾಂತಿ ಸೌಹಾರ್ದತೆ ಹಾಗೂ ಭಾವೈಕ್ಯತೆಯನ್ನು ಬೆಳೆಸುವಲ್ಲಿ ಸುತ್ತೂರು ಮಠಧ ಪಾತ್ರ ಹಿರಿದಾಗಿದೆ ಎಂದು ತಿಳಿಸಿದರು.