ಕನ್ನಡಪ್ರಭ ವಾರ್ತೆ ಮಂಡ್ಯ
ಈ ವೇಳೆ ಮಾತನಾಡಿದ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶುಭದಾಯಿನಿ, ಕಾಂಗ್ರೆಸ್ ಪಕ್ಷ ಮಹಿಳಾ ಸಬಲೀಕರಣ ಮತ್ತು ಆರ್ಥಿಕ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಿದೆ. ಸ್ವಾತಂತ್ರ್ಯ ನಂತರ ದೇಶದಲ್ಲಿ ಪಕ್ಷವು ಉದ್ಯೋಗ, ಉದ್ಯಮ, ಆರ್ಥಿಕ ಭದ್ರತೆ, ಶೈಕ್ಷಣಿಕ ನೆರವು, ಸಾಲ ಸೌಲಭ್ಯ ಹೀಗೆ ಹಲವು ಜನಪರ ಯೋಜನೆಗಳನ್ನು ಜಾರಿ ಮಾಡಿ ಮಹಿಳಾ ಪ್ರಗತಿಗೆ ಮುಂದಾಗಿದೆ ಎಂದರು.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಂಚ ಗ್ಯಾರಂಟಿಗಳನ್ನು ಮಹಿಳೆಯರಿಗೆ ಸಮರ್ಪಿಸಿ ಮಹಿಳಾಭ್ಯುದಯ ಸರ್ಕಾರವಾಗಿದೆ. ನೂತನ ಪದಾಧಿಕಾರಿಗಳು ಇಂದಿನಿಂದಲೇ ಪ್ರತಿ ಬೂತ್ ಮಟ್ಟದಲ್ಲಿ ಮಹಿಳಾ ಕಾರ್ಯಕರ್ತರನ್ನು ಸಂಘಟಿಸಿ ಸರ್ಕಾರದ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಅರ್ಹ ಮಹಿಳೆಗೆ ತಲುಪುವಂತೆ ಮಾಡಬೇಕು ಎಂದು ಹೇಳಿದರು.ಸವಾಲುಗಳನ್ನು ಎದುರಿಸುವ ರಾಜಕೀಯ ಪ್ರಜ್ಞೆ ಹೆಚ್ಚಿಸಿ ಮುಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಮತ್ತು ಸಂಸತ್/ವಿಧಾನಸಭೆ ಚುನಾವಣೆಗಳಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸೋಣ ಎಂದು ಕರೆನೀಡಿದರು.
ಇದೇ ವೇಳೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ನೂತನ ಉಪಾಧ್ಯಕ್ಷರಾಗಿ ಶಾರದಾ ರಮೇಶ್, ಸಂಘಟನಾ ಕಾರ್ಯದರ್ಶಿಯಾಗಿ ವೀಣಾ ಶಂಕರ್ ಸೇರಿ ಹಲವರಿಗೆ ಆದೇಶ ಪತ್ರಗಳನ್ನು ನೀಡಿ ಪಕ್ಷ ಸಂಘಟನೆಯ ಜವಾಬ್ದಾರಿ ನೀಡಲಾಯಿತು.