ಶಾಲೆಗೆ ಸೇರಿಸಿ, ಮಕ್ಕಳನ್ನು ಮುಖ್ಯವಾಹಿನಿಗೆ ತನ್ನಿ: ನ್ಯಾ.ಎಂ.ಎಸ್.ಸಂತೋಷ್

KannadaprabhaNewsNetwork |  
Published : Jun 13, 2024, 12:50 AM IST
ಪೋಟೊ: 12ಎಸ್ಎಂಜಿಕೆಪಿ01ಶಿವಮೊಗ್ಗದ ಶಿವಪ್ಪ ಸರ್ಕಲ್‌ನಲ್ಲಿ ಏರ್ಪಡಿಸಿದ್ದ ಸ್ತಬ್ದಚಿತ್ರ ವಾಹನ ಹಾಗೂ ಕರಪತ್ರ ಮೂಲಕ ಕಾನೂನು ಅರಿವು ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಚಾಲನೆ ನೀಡಿದರು. | Kannada Prabha

ಸಾರಾಂಶ

ಶಿವಮೊಗ್ಗದ ಶಿವಪ್ಪ ಸರ್ಕಲ್‌ನಲ್ಲಿ ಏರ್ಪಡಿಸಿದ್ದ ಸ್ತಬ್ದಚಿತ್ರ ವಾಹನ ಹಾಗೂ ಕರಪತ್ರ ಮೂಲಕ ಕಾನೂನು ಅರಿವು ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಬರುವಂತೆ ಮಾಡಬೇಕು. ಹೆಚ್ಚಿನ ಬಾಲ ಕಾರ್ಮಿಕ ತಪಾಸಣೆಯನ್ನು ಕೈಗೊಂಡು ಮಕ್ಕಳನ್ನು ಮುಖ್ಯವಾಹಿನಿಗೆ ತರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್. ಸಂತೋಷ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕರ ಯೋಜನಾ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ವಕೀಲರ ಸಂಘ, ಶಿವಮೊಗ್ಗ ಹಾಲು ಒಕ್ಕೂಟದ ಸಹಯೋಗದಲ್ಲಿ ಜೂ.12ರಂದು ದುರ್ಗಿಗುಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ‘ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ-2024’ ಅನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ರ ಕುರಿತು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಹಾಗೂ ಕಾಯ್ದೆ ಯನ್ನು ಇನ್ನೂ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಬಾಲ ಕಾರ್ಮಿಕ ತಪಾಸಣೆಯನ್ನು ಹೆಚ್ಚೆಚ್ಚು ಕೈಗೊಂಡು ಮಕ್ಕಳು ದುಡಿಯುತ್ತಿರುವುದು ಕಂಡು ಬಂದಲ್ಲಿ, ಸೂಕ್ತ ಕ್ರಮ ಕೈಗೊಂಡು ಮಕ್ಕಳು ಶಾಲೆಗೆ ಬರುವಂತೆ ಮಾಡಬೇಕು ಎಂದು ತಿಳಿಸಿದರು.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜಿ.ಎಂ.ರೇಖಾ ಮಾತನಾಡಿ, ನಿಮ್ಮ ಸುತ್ತ ಮುತ್ತಲಿನ ಪ್ರದೇಶಗಳಾದ ಗ್ಯಾರೇಜ್‍ಗಳು, ಕಟ್ಟಡ ಕೆಲಸ, ಭಿಕ್ಷಾಟನೆ ಮತ್ತು ಬೇರೆ ಯಾವುದೇ ಕ್ಷೇತ್ರದಲ್ಲಿ ಮಕ್ಕಳನ್ನು ಕೆಲಸಕ್ಕೆ ಸೇರಿಸಿಕೂಂಡರೆ ಅಥವಾ ಮಕ್ಕಳು ಕೆಲಸ ಮಾಡುತ್ತಿದ್ದರೆ ಅಂತಹ ಮಕ್ಕಳನ್ನು ರಕ್ಷಣೆ ಮಾಡಲು ಮುಂದಾಗಬೇಕು. ಮಕ್ಕಳ ಸಹಾಯವಾಣಿ 1098 ಕರೆ ಮಾಡಿ ಮಾಹಿತಿ ನೀಡುವಂತೆ ಮನವಿ ಮಾಡಿದರು.

ಶಿಶು ಅಭಿವೃದ್ಧಿ ಯೋಜನ ಅಧಿಕಾರಿ ಗಂಗಾಬಾಯಿ ಮಾತನಾಡಿ, ಬಾಲ್ಯ ವಿವಾಹ ತಡೆಗಟ್ಟಲು ಎಲ್ಲರೂ ಸಹಕರಿಸಬೇಕು. ಈ ನಿಟ್ಟಿನಲ್ಲಿ ಮಕ್ಕಳು ಮನೆಯಲ್ಲಿ ಮಾಹಿತಿಯನ್ನು ನೀಡಿ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ರಘುನಾಥ, ಕಾರ್ಮಿಕ ಅಧಿಕಾರಿ ವೇಣುಗೋಪಾಲ್, ದುರ್ಗಿಗುಡಿ ಶಾಲೆ ಮುಖ್ಯೋಪಾಧ್ಯಾಯ ಮೋಹನ್, ದೈಹಿಕ ಶಿಕ್ಷಕ ನಿರಂಜನಮೂರ್ತಿ, ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಜಾಗೃತಿ ಜಾಥಾಕ್ಕೆ ಚಾಲನೆ: ಬೆಳಗ್ಗೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ನಗರದ ಶಿವಪ್ಪ ಸರ್ಕಲ್‍ನಿಂದ ದುರ್ಗಿಗುಡಿ ಸರ್ಕಾರಿ ಪ್ರೌಢಶಾಲೆವರೆಗೆ ಏರ್ಪಡಿಸಿದ್ದ ಸ್ತಬ್ದಚಿತ್ರ ವಾಹನ ಹಾಗೂ ಕರಪತ್ರ ಮೂಲಕ ಕಾನೂನು ಅರಿವು ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಮತ್ತು ಜಿಲ್ಲಾ ಪಂಚಾಯತ್ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಧರ್ಮ ಉಳಿಸಿಕೊಂಡು ಸಂಸ್ಕೃತಿ ಬೆಳೆಸುವುದು ಅವಶ್ಯ: ಎ.ಸಿ. ವಾಲಿ ಗುರೂಜಿ
ಅಡಕೆ, ಮಾವು ನಿರ್ವಹಣೆ ಕುರಿತು ತರಬೇತಿ ಕಾರ್ಯಾಗಾರ