ಕಾರವಾರ: ಜಿಪಂನಿಂದ ರೂಪಿಸುವ ವಾರ್ಷಿಕ ಕ್ರಿಯಾ ಯೋಜನೆಯ ಸಂದರ್ಭದಲ್ಲಿ ಅಧಿಕಾರಿಗಳು ಸಾರ್ವಜನಿಕರಿಂದ ಸಲ್ಲಿಕೆಯಾಗುವ ಬೇಡಿಕೆಗಳ ಕುರಿತ ಕಾಮಗಾರಿಗಳನ್ನು ಅಳವಡಿಸಿ, ಅವುಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಆಡಳಿತ ವ್ಯವಸ್ಥೆಯನ್ನು ಸಾರ್ವಜನಿಕ ಸ್ನೇಹಿಯನ್ನಾಗಿ ಮಾಡಬೇಕು ಎಂದು ಜಿಪಂ ಆಡಳಿತಾಧಿಕಾರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷಮಾ ಗೋಡಬೋಲೆ ನಿರ್ದೇಶನ ನೀಡಿದರು.
ಜಿಲ್ಲೆಯ ಎಲ್ಲ ಅಧಿಕಾರಿಗಳು ನಿಗದಿತವಾಗಿ ತಮ್ಮ ವ್ಯಾಪ್ತಿಯ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಬೇಕು ಅಲ್ಲಿನ ತಮ್ಮ ಕಾರ್ಯಕ್ಷೇತ್ರದಲ್ಲಿ ಪ್ರಗತಿಯನ್ನು ಪರಿಶೀಲಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸಿ ಅಗತ್ಯ ನೆರವು ಒದಗಿಸಬೇಕು. ವಾರ್ಷಿಕ ಕ್ರಿಯಾ ಯೋಜನೆ ರೂಪಿಸುವಾಗ ಸಾರ್ವಜನಿಕರಿಂದ ಸ್ವೀಕೃತವಾಗಿರುವ ಬೇಡಿಕೆಗಳನ್ನು ಇದರಲ್ಲಿ ಅಳವಡಿಸಿ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಉತ್ತಮ ಆಡಳಿತ ಸೇವೆ ಒದಗಿಸಬೇಕು ಎಂದರು.
ಪ್ರಸ್ತುತ ಜಿಲ್ಲೆಯಲ್ಲಿನ 59 ಅಪೌಷ್ಟಿಕ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಿ ಪೌಷ್ಠಿಕರನ್ನಾಗಿ ಮಾಡುವಂತೆ ಹಾಗೂ ಈ ಮಕ್ಕಳ ಚಿಕಿತ್ಸೆಗಾಗಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಚಿಕಿತ್ಸೆಗಾಗಿ ಪ್ರತ್ಯೇಕ ಹಾಸಿಗೆಯನ್ನು ಮೀಸಲಿಡುವಂತೆ ತಿಳಿಸಿದ ಅವರು, ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿರುವ ಪೌಷ್ಟಿಕ ಆಹಾರ ಘಟಕದ ತಜ್ಞರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಿ ಎಂದರು.ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿ, ಹಾಸ್ಟೆಲ್‌ಗಳು, ವೈದ್ಯಕೀಯ ಕೇಂದ್ರಗಳಲ್ಲಿರುವ ಅನುಪಯುಕ್ತ ಸಾಮಗ್ರಿಗಳು/ಪೀಠೋಪಕರಣಗಳನ್ನು ನಿಯಮಾವಳಿಯಂತೆ ವಿಲೇವಾರಿ ಮಾಡಿ, ಕಚೇರಿಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದಕ್ಕೆ ಆದ್ಯತೆ ನೀಡಿ, ಕಚೇರಿಯಲ್ಲಿನ ಕಡತಗಳನ್ನು ಸೂಕ್ತ ರೀತಿಯಲ್ಲಿ ವಿಂಗಡಿಸಿ ಸುಲಭವಾಗಿ ದೊರೆಯುವಂತೆ ಸಂರಕ್ಷಿಸಿಡುವಂತೆ ತಿಳಿಸಿದರು.
ಮೆಟ್ರಿಕ್ ನಂತರದ ಹಾಸ್ಟೆಲ್‌ಗಳಲ್ಲಿ ಮತ್ತು ಕ್ರೀಡಾ ಹಾಸ್ಟೆಲ್‌ಗಳಲ್ಲಿನ ವಿದ್ಯಾರ್ಥಿಗಳಿಗೆ ಭೋದನಾ ಕಲಿಕೆಗೆ ಅಗತ್ಯವಿರುವ ಪುಸ್ತಕಗಳನ್ನು ಮತ್ತು ಸ್ಪರ್ದಾತ್ಮಕ ಪರೀಕ್ಷೆಗೆ ನೆರವಾಗುವ ಪುಸ್ತಕಗಳನ್ನು ಒದಗಿಸುವಂತೆ ಹಾಗೂ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿನ ಎಲ್ಲ ಇಲಾಖಾಧಿಕಾರಿಗಳು ತಮ್ಮ ಪ್ರವಾಸ ಸಂದರ್ಭದಲ್ಲಿ ಇತರೇ ಇಲಾಖೆಗಳಲ್ಲಿನ ಪ್ರದೇಶದಲ್ಲಿ ಸಮಸ್ಯೆಗಳು ಕಂಡುಬಂದಲ್ಲಿ ಅದನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸುವ ಮೂಲಕ, ಪರಸ್ಪರ ಸಮನ್ವಯದಿಂದ ಜಿಲ್ಲೆಯ ಅಭಿವೃದ್ಧಿಗೆ ಕಾರ್ಯನಿರ್ವಹಿಸುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ಜಿಪಂ ಸಿಇಒ ಈಶ್ವರ ಕಾಂದೂ, ತರಬೇತಿ ನಿರತ ಐಎಎಸ್ ಅಧಿಕಾರಿ ಝುಪಿಶಾನ್ ಹಕ್, ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.