ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಕವಿತಾ ಎಸ್. ಮನ್ನಿಕೇರಿ
ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ಹಕ್ಕು, ಸ್ವಾತಂತ್ರ‍್ಯ, ನ್ಯಾಯ ಹಾಗೂ ಘನತೆಯಿಂದ ಬದುಕುವ ಅವಕಾಶ ಕಲ್ಪಿಸಿದೆ. ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೌಲ್ಯ ಮತ್ತು ಆಶಯ ಪ್ರತಿಯೊಬ್ಬರೂ ಅರಿತುಕೊಂಡು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.ಭಾರತೀಯ ಸಂವಿಧಾನ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದೆ. ಜಾತಿ, ಧರ್ಮ, ಭಾಷೆ ಹಾಗೂ ಪ್ರಾದೇಶಿಕ ಭೇದಭಾವವಿಲ್ಲದೆ ಎಲ್ಲರಿಗೂ ಸಮಾನ ಅವಕಾಶ ಮತ್ತು ಹಕ್ಕುಗಳನ್ನು ಒದಗಿಸುವ ಮಹತ್ವದ ಜವಾಬ್ದಾರಿ ಸಂವಿಧಾನ ನಿರ್ವಹಿಸುತ್ತಿದೆ. ಸಂವಿಧಾನ ನೀಡಿರುವ ಹಕ್ಕುಗಳ ಜತೆಗೆ ಪ್ರತಿಯೊಬ್ಬ ನಾಗರಿಕರೂ ತಮ್ಮ ಕರ್ತವ್ಯಗಳನ್ನು ಅರಿತು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಸಮಾಜದಲ್ಲಿ ಸಮಾನತೆ, ಸಹೋದರತೆ, ಸಾಮಾಜಿಕ ನ್ಯಾಯ ಹಾಗೂ ಪರಸ್ಪರ ಗೌರವದ ಮನೋಭಾವ ಬೆಳೆಸಿಕೊಳ್ಳಬೇಕು. ಸಂವಿಧಾನದ ಆಶಯ ಮುಂದಿನ ಪೀಳಿಗೆಗೂ ತಲುಪಿಸುವ ಕಾರ್ಯವಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆ ಉಪ ಸಂರಕ್ಷಣಾಧಿಕಾರಿ ಅನುಪಮ, ಜಿಪಂ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ.ಎ. ಕಾಳೆ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್, ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ, ನಗರಸಭೆ ಪೌರಾಯುಕ್ತ ಎರಗುಡಿ ಶಿವಕುಮಾರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆಲಂ ಪಾಷಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಮಾಜಗಳ ಸಂಘಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.