ಗೌರವ ಧನ ಹೆಚ್ಚಳವೇ ಮತ್ತೊಂದು ಗ್ಯಾರಂಟಿ: ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

KannadaprabhaNewsNetwork |  
Published : Nov 20, 2025, 02:00 AM IST
19ಕೆಆರ್ ಎಂಎನ್ 3.ಜೆಪಿಜಿನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯನ್ನು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಘಾಟಿಸಿದರು. | Kannada Prabha

ಸಾರಾಂಶ

ರಾಮನಗರ: ಕಳೆದ ಬಾರಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನವನ್ನು 1000 ರೂಪಾಯಿ ಹೆಚ್ಚಿಸಲಾಗಿದೆ. ಶೀಘ್ರವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮತ್ತೊಂದು ಸಾವಿರ ಹೆಚ್ಚಿಸುವಂತೆ ಮನವಿ ಮಾಡಲಾಗುವುದು. ಇದೇ ನಮ್ಮ ಸರ್ಕಾರದ ಮತ್ತೊಂದು ಗ್ಯಾರಂಟಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದರು.

ರಾಮನಗರ: ಕಳೆದ ಬಾರಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನವನ್ನು 1000 ರೂಪಾಯಿ ಹೆಚ್ಚಿಸಲಾಗಿದೆ. ಶೀಘ್ರವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮತ್ತೊಂದು ಸಾವಿರ ಹೆಚ್ಚಿಸುವಂತೆ ಮನವಿ ಮಾಡಲಾಗುವುದು. ಇದೇ ನಮ್ಮ ಸರ್ಕಾರದ ಮತ್ತೊಂದು ಗ್ಯಾರಂಟಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 2.80 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿದ್ದಾರೆ. ಈ ಪೈಕಿ ಕನಿಷ್ಠ 2.50 ಲಕ್ಷ ಫಲಾನುಭವಿಗಳನ್ನು ಗೃಹಲಕ್ಷ್ಮಿ‌ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಷೇರುದಾರರನ್ನಾಗಿ ಮಾಡಬೇಕು‌. ಗೃಹಲಕ್ಷ್ಮಿ ಯೋಜನೆಯ ಯಶಸ್ಸಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರೆ ಕಾರಣ. ಅದೇ ರೀತಿ ಗೃಹಲಕ್ಷ್ಮಿ ಬ್ಯಾಂಕ್ ಕೂಡ ಮನೆ ಮನೆ ತಲುಪುವಂತಾಗಬೇಕು ಎಂದರು.

2028ಕ್ಕೆ ನಮ್ದೆ ಸರ್ಕಾರ:

ಪಂಚ ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಾರಥ್ಯದ ನಮ್ಮ ಸರ್ಕಾರ ಗ್ಯಾರಂಟಿ ಸರ್ಕಾರ ಆಗಿದ್ದು, 2028ಕ್ಕೂ ನಮ್ಮದೆ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

ನಮ್ಮ ಪಕ್ಷದ ಯೋಜನೆಗಳನ್ನು ಬಿಜೆಪಿ ಬೇರೆ ರಾಜ್ಯಗಳಲ್ಲಿ ನಕಲು ಮಾಡುತ್ತಿದೆ. ಮಹಾರಾಷ್ಟ್ರದಲ್ಲಿ ನಮ್ಮ ಗೃಹಲಕ್ಷ್ಮಿ ಯೋಜನೆ ಮಾದರಿಯಲ್ಲಿ ಲಾಡ್ಲಿಬೆಹನ್ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಚುನಾವಣೆ ವೇಳೆ ತಿಂಗಳಿಗೆ 2,500 ರುಪಾಯಿಯಂತೆ ಮೂರು ತಿಂಗಳ ಹಣ ಹಾಕಲಾಗಿತ್ತು. ಆದರೆ, ಚುನಾವಣೆಯಲ್ಲಿ ಗೆದ್ದ ಬಳಿಕ ಯೋಜನೆಯನ್ನೆ ಪರಿಷ್ಕರಿಸಲಾಗಿದೆ. 2,500 ರೂಪಾಯಿಯಿಂದ 1500 ರೂಪಾಯಿಗೆ ಇಳಿಸಲಾಗಿದೆ. 3.50 ಕೋಟಿ ಫಲಾನುಭವಿಗಳ ಸಂಖ್ಯೆಯನ್ನು 1.50 ಕೋಟಿಗೆ ಇಳಿಸಲಾಗಿದೆ ಎಂದು ಹೇಳಿದರು.

ಹೊಸ ಇತಿಹಾಸ ಸೃಷ್ಟಿಸಲಿದೆ ನ.28ರ ಕಾರ್ಯಕ್ರಮ:

ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು‌ 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮುಖ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುವುದು. ಇದೊಂದು ಹೊಸ ಇತಿಹಾಸ ಸೃಷ್ಟಿಸುವ ಕಾರ್ಯಕ್ರಮವಾಗಲಿದೆ ಎಂದು ತಿಳಿಸಿದರು.

ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕಾರ್ಯಕ್ರಮಗಳು ಅತ್ಯಂತ ಅರ್ಥಪೂರ್ಣವಾಗಿ ಅಂದು ನಡೆಯಲಿದ್ದು, ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಕರೆ ನೀಡಿದರು.

ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಕಾಂಗ್ರೆಸ್, ‌ದೇಶ‌ಕಟ್ಟಿದ್ದು ಕಾಂಗ್ರೆಸ್ ಪಕ್ಷ. ಕಾಂಗ್ರೆಸ್ ಅಂದರೆ ಗ್ಯಾರಂಟಿ ಸರ್ಕಾರ ಅಂತ ಅರ್ಥ. ಅಧಿಕಾರಕ್ಕೆ ಬಂದಾಗಲೆಲ್ಲಾ ಮಹಿಳೆಯರ ಪರ ಯೋಜನೆಗಳನ್ನು ಜಾರಿಗೊಳಿಸುತ್ತಿದೆ‌ ಎಂದು ಹೆಬ್ಬಾಳ್ಕರ್ ಹೇಳಿದರು.‌

ಇಂದಿರಾಗಾಂಧಿ ಅವರಿಂದ ಕ್ರಾಂತಿಕಾರಕ ಬದಲಾವಣೆ:

ಇಡೀ ದೇಶವೇ ಬಡತನದಿಂದ ಬಳಲುತ್ತಿದ್ದ ವೇಳೆ ಬಡ ಮಕ್ಕಳಿಗೂ ಪೌಷ್ಠಿಕ ಆಹಾರ ಸಿಗಬೇಕು.‌ ಪೌಷ್ಠಿಕ ಆಹಾರದ ಜೊತೆಗೆ ಶಿಕ್ಷಣ ಕೂಡ ಸಿಗಬೇಕು ಎನ್ನುವ ದೃಷ್ಟಿಯಿಂದ 1975ರಲ್ಲಿ ಮೈಸೂರು ಜಿಲ್ಲೆಯಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಅಂಗನವಾಡಿ ಆರಂಭಿಸಿದರು. ಇದೀಗ ಅಂಗನವಾಡಿ ಆರಂಭವಾಗಿ 50 ವರ್ಷ ಪೂರೈಸಿದೆ. ಹಾಗಾಗಿ ಅಂದಿನ ಕಾರ್ಯಕ್ರಮದಲ್ಲಿ ಅಕ್ಕಪಡೆ, ಎಲ್‌ಕೆಜಿ,‌ ಯುಕೆಜಿಗೆ ಚಾಲನೆ ಹಾಗೂ ಗೃಹಲಕ್ಷ್ಮಿ ಯೋಜನೆಯ ಮುಂದುವರಿದ ಭಾಗವಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುವುದು.‌ ಅರ್ಥಪೂರ್ಣ ಕಾರ್ಯಕ್ರಮವನ್ನು ಎಲ್ಲರೂ ಸೇರಿ ಆಚರಿಸೋಣ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಶಾಸಕ ಇಕ್ಬಾಲ್ ಹುಸೇನ್, ವಿಧಾನ ಪರಿಷತ್ ಸದಸ್ಯ ಎಸ್. ರವಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ರಾಜು, ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಗಂಗಾಧರ್, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ಎನ್.ನಟರಾಜು ಗಾಣಕಲ್, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚೇತನ್ ಕುಮಾರ್, ತಾಲೂಕುಗಳ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಜೆ.ಆರ್.ದಿನೇಶ್ ಉಪಸ್ಥಿತರಿದ್ದರು.

19ಕೆಆರ್ ಎಂಎನ್ 3.ಜೆಪಿಜಿ

ರಾಮನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯನ್ನುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

10 ಪ್ಯಾರಾದಲ್ಲಿ ಕೇಂದ್ರ ವಿರುದ್ಧ ಟೀಕಾ ಪ್ರಹಾರ
ಬೇಡಿಕೆಗೆ ತಕ್ಕಷ್ಟು ಬರುತ್ತಿಲ್ಲ ಮೈಸೂರು ರೇಷ್ಮೆ ಸೀರೆ