ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ಮಹಾರಾಷ್ಟ್ರ ರಾಜ್ಯದ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ, ರಾಜಾಪುರ ಬ್ಯಾರೇಜ್‌ನಿಂದ ಶನಿವಾರ ಮತ್ತೆ 14,000 ಕ್ಯುಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಇದರೊಂದಿಗೆ ಕೃಷ್ಣಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಹಿಪ್ಪರಗಿ ಜಲಾಶಯಕ್ಕೆ ಸೋಮವಾರದ ವೇಳೆಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುವ ನಿರೀಕ್ಷೆ ವ್ಯಕ್ತವಾಗಿದೆ.
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ
ಮಹಾರಾಷ್ಟ್ರ ರಾಜ್ಯದ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ, ರಾಜಾಪುರ ಬ್ಯಾರೇಜ್‌ನಿಂದ ಶನಿವಾರ ಮತ್ತೆ 14,000 ಕ್ಯುಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಇದರೊಂದಿಗೆ ಕೃಷ್ಣಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಹಿಪ್ಪರಗಿ ಜಲಾಶಯಕ್ಕೆ ಸೋಮವಾರದ ವೇಳೆಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುವ ನಿರೀಕ್ಷೆ ವ್ಯಕ್ತವಾಗಿದೆ.
ಸದ್ಯ ಹಿಪ್ಪರಗಿ ಬ್ಯಾರೇಜ್‌ನ 22 ಗೇಟ್‌ಗಳ ಪೈಕಿ 6 ಗೇಟ್‌ಗಳ ಮೂಲಕ ಒಳಹರಿವಿನಷ್ಟೇ ನೀರನ್ನು ಹೊರಬಿಡಲಾಗುತ್ತಿದೆ. ಮುಂಭಾಗದ ನದಿಪಾತ್ರದಲ್ಲಿ ನೀರಿನ ಕೊರತೆ ಇರುವ ಹಿನ್ನೆಲೆಯಲ್ಲಿ ರೈತರು, ಜನರು ಹಾಗೂ ಜಾನುವಾರುಗಳಿಗೆ ಅನುಕೂಲವಾಗುವ ಉದ್ದೇಶದಿಂದ ಬ್ಯಾರೇಜ್‌ದಲ್ಲಿ ನೀರನ್ನು ಸಂಪೂರ್ಣವಾಗಿ ಶೇಖರಿಸದೆ, ತಾತ್ಕಾಲಿಕವಾಗಿ ನಿಯಂತ್ರಿತ ಪ್ರಮಾಣದಲ್ಲಿ ಹರಿಬಿಡಲಾಗುತ್ತಿದೆ.
ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಜಲಾನಯನ ಪ್ರದೇಶಗಳಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿಗೆ ಒಳಹರಿವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೇ ಕಾರಣದಿಂದ ಮುಂದಿನ ದಿನಗಳಲ್ಲಿ ಹಿಪ್ಪರಗಿ ಬ್ಯಾರೇಜ್‌ನ ಒಳಹರಿವು ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದ್ದು, ನೀರಾವರಿ ಹಾಗೂ ಕುಡಿಯುವ ನೀರಿನ ದೃಷ್ಟಿಯಿಂದ ಇದು ಆಶಾದಾಯಕ ಬೆಳವಣಿಗೆಯಾಗಿದೆ.
ಕಳೆದ ಕೆಲವು ವಾರಗಳಿಂದ ನೀರಿನ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿದ್ದ ರೈತರು ಹಾಗೂ ಸಾರ್ವಜನಿಕರಲ್ಲಿ ಈ ಬೆಳವಣಿಗೆ ಹೊಸ ಭರವಸೆ ಮೂಡಿಸಿದೆ. ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ನೀರು ಲಭ್ಯವಾಗುವ ನಿರೀಕ್ಷೆ ಹೆಚ್ಚಾಗಿದ್ದು, ಜಾನುವಾರುಗಳಿಗೂ ನೀರಿನ ಸಮಸ್ಯೆ ನಿವಾರಣೆಯಾಗುವ ಸಾಧ್ಯತೆ ಇದೆ.
ಒಟ್ಟಾರೆ, ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ಹರಿದು ಬರುತ್ತಿರುವ ನೀರು ಹಿಪ್ಪರಗಿ ಭಾಗದ ಜನತೆಗೆ ಸಂತಸದ ಸುದ್ದಿ ತಂದಿದ್ದು, ನೀರಿನ ಬವಣೆಯಿಂದ ಬೇಸತ್ತಿದ್ದ ರೈತರು ಹಾಗೂ ಸಾರ್ವಜನಿಕರಲ್ಲಿ ಹೊಸ ಆಶಾಕಿರಣ ಮೂಡಿಸಿದೆ. ಆಡಳಿತವು ಬ್ಯಾರೇಜ್ ಒಳಹರಿವು ಮತ್ತು ಹೊರಹರಿವಿನ ಮೇಲೆ ನಿರಂತರ ನಿಗಾ ವಹಿಸಿದ್ದು, ಪರಿಸ್ಥಿತಿಗೆ ಅನುಗುಣವಾಗಿ ಗೇಟ್‌ಗಳ ನಿರ್ವಹಣೆ ಕೈಗೊಳ್ಳುತ್ತಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.