ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್, ಅಕ್ಕಿ ಬೇಳೆ, ತರಕಾರಿ, ಮುದ್ರಣ ಶುಲ್ಕ, ಬಾಂಡ್ ಬೆಲೆ ಸೇರಿದಂತೆ ಅಗತ್ಯ ವಸ್ತಗಳ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಗುರುವಾರ ತಾಲೂಕು ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಬಿಜೆಪಿ ಕಚೇರಿಯಿಂದ ಹೊರಟ ಪ್ರತಿಭಟನಾಕಾರರು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ರಾಜ್ಯ ಕಾಂಗ್ರೆಸ್ ಆಡಳಿತ ವೈಖರಿ ವಿರುದ್ಧ ಘೋಷಣೆ ಕೂಗಿದರು. ಚೆನ್ನಮ್ಮ ವೃತ್ತದಲ್ಲಿ ಸೇರಿ ಸಭೆ ನಡೆಸಿದರು. ಗ್ರೇಡ್-೨ ತಹಸೀಲ್ದಾರ ಮುರುಳೀಧರ ಅವರಿಗೆ ಮನವಿ ಸಲ್ಲಿಸಿದರು. ಬಳಿಕ ಸಿಎಂ ಸಿದ್ದರಾಮಯ್ಯನವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾಜಿ ಸಚಿವ ಹಾಲಪ್ಪ ಆಚಾರ ಮಾತನಾಡಿ, ಸುಳ್ಳು ಗ್ಯಾರಂಟಿ ಯೋಜನೆಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಎಲ್ಲ ಅಗತ್ಯ ವಸ್ತಗಳ ಬೆಲೆ ಏರಿಸಿದ್ದು, ಜನಸಾಮಾನ್ಯರು ಜೀವನ ನಡೆಸುವುದೇ ದುಸ್ತರವಾಗಿದೆ. ಬಡವರ ಹಿತ ಕಾಪಾಡಬೇಕಾದ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಸಿ ಬಡವರ ಹೊಟ್ಟೆಯ ಮೇಲೆ ಬರೆ ಎಳೆಯುತ್ತಿದೆ. ಬಡವರ ರಕ್ತ ಹೀರುವ ಈ ಪಿಕ್ ಪ್ಯಾಕೇಟ್ ಸರ್ಕಾರ ಅಧಿಕಾರದಲ್ಲಿ ಬಹಳ ದಿನ ಉಳಿಯುವುದಿಲ್ಲ ಎಂದು ಕಿಡಿಕಾರಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ನವೀನಕುಮಾರ ಗುಳಗಣ್ಣನವರ್ ಹಾಗೂ ಜಿಲ್ಲಾ ಜೆಡಿಎಸ್ ವಕ್ತಾರ ಮಲ್ಲನಗೌಡ ಕೋನನಗೌಡ್ರ ಮಾತನಾಡಿ, ಕಾಂಗ್ರೆಸ್‌ನವರು ಪ್ರತಿಭಟನೆ ಮಾಡಿದರೆ ಎಲ್ಲದಕ್ಕೂ ಸಹಕಾರ ನೀಡುತ್ತಿರುವ ಪೊಲೀಸ್ ಇಲಾಖೆಯವರು ಬಿಜೆಪಿಯ ಪ್ರತಿಭಟನೆ ತಡೆಯುವ ಕೆಲಸಕ್ಕೆ ಮುಂದಾರಾಗುತ್ತಿರುವುದನ್ನು ಗಮನಿಸಿದರೆ ಪೊಲೀಸರು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಪ್ರಜಾ ಪ್ರಭುತ್ವದಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡುವ ಹಕ್ಕಿದೆ. ಇದನ್ನು ಪೋಲಿಸ್ ಇಲಾಖೆಯವರು ಅರಿತುಕೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.