ದೊಡ್ಡಬಳ್ಳಾಪುರ: ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಕೆಲಸ ಮಾಡುತ್ತಿದ್ದು, ಒತ್ತಡ ಇರುತ್ತದೆ. ಇದರ ಜೊತೆಗೆ ಆರೋಗ್ಯದ ಬಗೆಗೂ ಹೆಚ್ಚು ಕಾಳಜಿ ವಹಿಸಬೇಕು ಎಂದು ಮನಃಶಾಸ್ತ್ರಜ್ಞೆ ಡಾ.ಪದ್ಮಾಕ್ಷಿ ಲೋಕೇಶ್ ಹೇಳಿದರು.
4ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ನಿರ್ಮಲಾ ಮಾತನಾಡಿ, ಸಮಾಜದಲ್ಲಿ ಸಮಾನತೆ ಅತಿ ಮುಖ್ಯ. ಸಮಾಜಮುಖಿಯಾಗಿ ಎಲ್ಲರು ಕೆಲಸ ಮಾಡಬೇಕು. ಮಹಿಳೆಗೆ ಎಲ್ಲಕ್ಕಿಂತ ಮಿಗಿಲಾಗಿ ಆತ್ಮಗೌರವವಿರಬೇಕು. ಸಮಾಜದಲ್ಲಿ ಮಹಿಳೆಯರನ್ನು ಸಮಾನವಾಗಿ ಕಾಣಬೇಕು. ಮಹಿಳೆಯರನ್ನು ಗೌರವದಿಂದ ನಡೆಸಿಕೊಳ್ಳಬೇಕು ಎಂದು ಹೇಳಿದರು.
ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಚ್.ಎ.ಶಿಲ್ಪಾ ಮಾತನಾಡಿ, ಒಬ್ಬ ವ್ಯಕ್ತಿಯ ಜೀವನದಲ್ಲಿ ಮಹಿಳೆಯ ಪಾತ್ರ ತುಂಬಾ ದೊಡ್ಡದಾಗಿರುತ್ತದೆ. ಆಕೆ ತಾಯಿಯಾಗಿ, ಸೋದರಿಯಾಗಿ, ಪತ್ನಿಯಾಗಿ ಬಾಳಿಗೆ ಬೆಳಕಾಗುತ್ತಾಳೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಮತ್ತು ನ್ಯಾಯಾಂಗದಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಾಗಬೇಕು ಎಂದರು.ಅಪರ ಸಿವಿಲ್ ಮತ್ತು ಜೆಎಂಎಫ್ ನ್ಯಾಯಾಧೀಶರಾದ ಕೆ.ಪ್ರೀತಿ ಮಾತನಾಡಿ, ಮಹಿಳೆ ನಾಲ್ಕು ಗೋಡೆಗೆ ಮಾತ್ರ ಸೀಮಿತವಾಗಿರದೆ ಆರ್ಥಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಇತರೆ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮದೇ ಛಾಪನ್ನು ಮೂಡಿಸುತ್ತಿದ್ದಾರೆ ಎಂದು ತಿಳಿಸಿದರು.
27ಕೆಡಿಬಿಪಿ4- ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದಿಂದ ನಗರದ ಕೋರ್ಟ್ ಆವರಣದಲ್ಲಿ ವಿಶ್ವ ಮಹಿಳಾ ದಿನಾಚರಣೆ ನಡೆಯಿತು.