ಸಂಸದ ಸ್ಥಾನದಿಂದ ಜವಾಬ್ದಾರಿ ಹೆಚ್ಚಾಗಿದೆ: ಸುನೀಲ್ ಬೋಸ್

KannadaprabhaNewsNetwork | Published : Jul 18, 2024 1:30 AM

ಸಾರಾಂಶ

ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಇತಿಹಾಸದಲ್ಲಿಯೇ ಅತಿ ಹೆಚ್ಚು ಮತಗಳ ಅಂತರದಿಂದ ನನ್ನನ್ನು ಸಂಸತ್ತಿಗೆ ಆಯ್ಕೆ ಮಾಡಿರುವುದು ಸಂತಸ ತಂದಿದೆ, ಜೊತೆಗೆ ಜವಾಬ್ದಾರಿಯು ಹೆಚ್ಚಾಗಿದೆ ಎಂದು ಸಂಸದ ಸುನೀಲ್ ಬೋಸ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹನೂರು

ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಇತಿಹಾಸದಲ್ಲಿಯೇ ಅತಿ ಹೆಚ್ಚು ಮತಗಳ ಅಂತರದಿಂದ ನನ್ನನ್ನು ಸಂಸತ್ತಿಗೆ ಆಯ್ಕೆ ಮಾಡಿರುವುದು ಸಂತಸ ತಂದಿದೆ, ಜೊತೆಗೆ ಜವಾಬ್ದಾರಿಯು ಹೆಚ್ಚಾಗಿದೆ ಎಂದು ಸಂಸದ ಸುನೀಲ್ ಬೋಸ್ ತಿಳಿಸಿದರು.

ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನ ಸಂಪರ್ಕ ಸಭೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಮತದಾರರು ನನಗೆ 1.80 ಲಕ್ಷ ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ಇತಿಹಾಸ ಸೃಷ್ಟಿ ಮಾಡಿ ಐತಿಹಾಸಿಕ ಗೆಲುವು ತಂದುಕೊಟ್ಟಿದ್ದಾರೆ. ಇದಲ್ಲದೆ ಹನೂರು ಕ್ಷೇತ್ರದಲ್ಲಿ 37 ಸಾವಿರ ಮತಗಳ ಅಂತರ ನೀಡುವ ಮೂಲಕ ನನ್ನ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದಿಂದ ಅರಣ್ಯಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಅನುದಾನ ಬರಲಿದ್ದು ಹನೂರು ವಿಧಾನಸಭಾ ಕ್ಷೇತ್ರದ ಕಾಡಂಚಿನ ಜನರ ಸಮಸ್ಯೆಗೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇನೆ. ಅರಣ್ಯ ಇಲಾಖೆ ಅಧಿಕಾರಿಗಳು ರೈತರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ಹಲವಾರು ದೂರುಗಳು ಬಂದಿದೆ. ಮುಂದಿನ ದಿನಗಳಲ್ಲಿ ಮಾಜಿ ಶಾಸಕ ಆರ್ ನರೇಂದ್ರ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಆರ್. ನರೇಂದ್ರ ಅವರು ಸತತವಾಗಿ ಮೂರು ಬಾರಿ ಆಯ್ಕೆಯಾಗಿ ಉತ್ತಮ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರು. ಆದರೆ ನಮ್ಮ ಪಕ್ಷದ ಕೆಲವು ಮುಖಂಡರ ಕುತಂತ್ರದಿಂದ ಸೋಲುವಂತಾಯಿತು. ರಾಜ್ಯದಲ್ಲಿ ನಮ್ಮದೇ ಸರ್ಕಾರ ಇರುವುದರಿಂದ ಮುಂದಿನ ದಿನಗಳಲ್ಲಿ ಅವರಿಗೆ ಹೆಚ್ಚಿನ ಅಧಿಕಾರ ಸಿಗಲಿದೆ ಎಂದರು.

ನನಗೆ ಟಿಕೆಟ್ ಸಿಗುವ ಮುನ್ನ, ನಾಮಪತ್ರ ಸಲ್ಲಿಸಿದ ನಂತರ ಹಾಗೂ ಸಂಸದನಾಗಿ ಆಯ್ಕೆಯಾದ ನಂತರವೂ ವಿರೋಧ ಪಕ್ಷದವರು ನಿರಂತರವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಅವರಿಂದಲೇ ನನಗೆ ಹೆಚ್ಚಿನ ಪ್ರಚಾರ ಸಿಗುತ್ತಿದೆ, ಈಗ ತಾನೆ ಸ್ಕೂಲಿಗೆ ಅಡ್ಮಿಶನ್ ಆಗಿದ್ದೇನೆ. ಮುಂದಿನ ದಿನಗಳಲ್ಲಿ ಸಮಸ್ಯೆಗಳ ಬಗ್ಗೆ ಪಟ್ಟಿ ಮಾಡಿ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ವಿರೋಧ ಪಕ್ಷದವರ ವಿರುದ್ಧ ವಾಗ್ದಾಳಿ ನಡೆಸಿದರು. ಮಾಜಿ ಶಾಸಕ ಆರ್. ನರೇಂದ್ರ ಮಾತನಾಡಿ, ಕಳೆದ 40 ವರ್ಷಗಳಿಂದ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ವ್ಯತ್ಯಾಸವಾದರೂ ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಮತ ನೀಡಿದ್ದಾರೆ. ಇದು ಕಾಂಗ್ರೆಸ್ಸಿನ ಭದ್ರಕೋಟೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ. ಆದರೆ ಹನೂರು ಕ್ಷೇತ್ರದಲ್ಲಿ ಬೇರೆ ಪಕ್ಷದ ಶಾಸಕರು ಇರುವುದರಿಂದ ಹೆಚ್ಚಿನ ಅನುದಾನ ದೊರೆಯುತ್ತಿಲ್ಲ. ಈ ನಿಟ್ಟಿನಲ್ಲಿ ಸಂಸದರ ನಿಧಿಯಿಂದ ಪ್ರತಿ ವರ್ಷ ಹನೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮಾಡುವ ಮೂಲಕ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದರು.

ರಸ್ತೆ ಅಭಿವೃದ್ಧಿಗೆ ಕ್ರಮ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಪ್ರಚಾರಕ್ಕೆ ಬಂದಂತ ವೇಳೆ ಹನೂರು ವಿಧಾನಸಭಾ ಕ್ಷೇತ್ರದ ರಸ್ತೆಗಳು ದುರಸ್ತಿಗೊಂಡಿರುವ ಹಿನ್ನೆಲೆ ಮಾಜಿ ಶಾಸಕ ಆರ್.ನರೇಂದ್ರ ಅವರ ಮಾರ್ಗದರ್ಶನದಲ್ಲಿ ಮಲೆ ಮಹದೇಶ್ವರ ಬೆಟ್ಟ ರಸ್ತೆ, ರಾಮಾಪುರ ರಸ್ತೆ, ಬಂಡಳ್ಳಿ ರಸ್ತೆ ಅಭಿವೃದ್ಧಿಪಡಿಸಲು ಈಗಾಗಲೇ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಅನುದಾನ ನೀಡುವಂತೆ ಮನವಿ ಮಾಡಿದ್ದೇವೆ. ಅವರು ಸಹ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಇದು ನಮ್ಮ ಶ್ರಮದಿಂದ ಅನುದಾನ ಬಿಡುಗಡೆಯಾಗುತ್ತಿದೆ. ಇದರಲ್ಲಿ ಹಾಲಿ ಶಾಸಕರ ಕೊಡುಗೆ ಏನು ಇಲ್ಲ ಹಾಗಾಗಿ ನಿಮಗೆ ಮಾಹಿತಿ ನೀಡುತ್ತಿದ್ದೇನೆ. ತಾವು ಸಹ ನಮ್ಮ ಪಕ್ಷದ ಕಾರ್ಯಕರ್ತರುಗಳಿಗೆ ಮನವರಿಕೆ ಮಾಡಿಕೊಡಬೇಕು ಎಂದರು.

ಮನವಿ ಪತ್ರಗಳನ್ನು ಪಡೆದ ಸಂಸದ: ಇನ್ನು ಸಂಸದರಾಗಿ ಆಯ್ಕೆಯಾದ ನಂತರ ಹನೂರು ಪಟ್ಟಣಕ್ಕೆ ಆಗಮಿಸಿದ ನೂತನ ಸಂಸದ ಸುನಿಲ್ ಬೋಸ್ ಅವರು ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಸಮಸ್ಯೆಗಳ ಅಹವಾಲು ಸ್ವೀಕರಿಸಿದರು. ಕೆಲವೊಂದು ಸಮಸ್ಯೆಗಳಿಗೆ ಸ್ಥಳದಲ್ಲಿಯೆ ದೂರವಾಣಿ ಮುಖಾಂತರ ಬಗೆಹರಿಸಿದರೆ, ಕೆಲವು ಮನವಿಗಳು ಸರ್ಕಾರ ಮಟ್ಟದಲ್ಲಿ ಆಗಬೇಕಾಗಿರುವುದರಿಂದ ಈ ಬಗ್ಗೆ ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

ಸಿಸಿ ರಸ್ತೆ, ಚರಂಡಿ ಕಾಮಗಾರಿ ಶಾಸಕರ ಕೆಲಸ: ಇಂದು ಹಲವಾರು ಗ್ರಾಮದ ಮುಖಂಡರು ನೀಡಿರುವ ಮನವಿಯಲ್ಲಿ ಸಿಸಿ ರಸ್ತೆ, ಚರಂಡಿ, ಡಾಂಬರು ರಸ್ತೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ. ಇವುಗಳು ಶಾಸಕರು ಮಾಡಬೇಕಾಗಿರುವ ಕೆಲಸ. ಆದರೂ ರಾಜ್ಯದಲ್ಲಿ ನಮ್ಮದೇ ಸರ್ಕಾರ ಹಾಗೂ ನಮ್ಮ ತಂದೆ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿರುವುದರಿಂದ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಪಡಿಸುತ್ತೇನೆ ಎಂದು ತಿಳಿಸಿದರು. ವಿವಿಧ ಗ್ರಾಮಗಳ ಮುಖಂಡರು ನೂತನ ಸಂಸದ ಹಾಗೂ ಮಾಜಿ ಶಾಸಕರನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಚಾಮುಲ್ ನಿರ್ದೇಶಕ ನಂಜುಂಡಸ್ವಾಮಿ, ಪಪಂ ಉಪಾಧ್ಯಕ್ಷ ಗಿರೀಶ್, ಸಂಪತ್, ಸುದೇಶ್, ಗ್ರಾಪಂ ಅಧ್ಯಕ್ಷ ಇಗ್ನೇಶಿ ಮುತ್ತು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮುಕುಂದವರ್ಮ, ಈಶ್ವರ್, ಕಾಂಗ್ರೆಸ್ ಹಿರಿಯ ಮುಖಂಡ ಲಕ್ಷ್ಮೀನಾರಾಯಣ್ ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು.

Share this article