ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿರ್ದಿಷ್ಟಾವಧಿ ಧರಣಿ

KannadaprabhaNewsNetwork | Published : Oct 1, 2024 1:37 AM

ಸಾರಾಂಶ

ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ಹೊರಡಿಸಬೇಕು.

ಬಳ್ಳಾರಿ: ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ.

ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ಹೊರಡಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುವ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕಚೇರಿಯಿಲ್ಲ. ದೇವಸ್ಥಾನ ಮತ್ತಿತರ ಕಡೆ ಕುಳಿತು ಕಾರ್ಯ ನಿರ್ವಹಿಸುವಂತಾಗಿದೆ. ಸುಸಜ್ಜಿತ ಕಚೇರಿ ಸೌಲಭ್ಯ ಕಲ್ಪಿಸಿ, ಅಗತ್ಯ ಪೀಠೋಪಕರಣಗಳನ್ನು ಒದಗಿಸಬೇಕು. ತ್ವರಿತ ಕಾರ್ಯನಿರ್ವಹಣೆಗೆ ಲ್ಯಾಪ್‌ಟ್ಯಾಪ್, ಗುಣಮಟ್ಟದ ಮೊಬೈಲ್, ಫ್ರಿಂಟರ್, ಸ್ಕ್ಯಾನರ್ ನೀಡಬೇಕು. ಮೊಬೈಲ್ ತಂತ್ರಾಂಶಗಳ ಕೆಲಸದ ವಿಚಾರವಾಗಿ ಈವರೆಗೆ ಆಗಿರುವ ಎಲ್ಲ ಅಮಾನತುಗಳನ್ನು ಹಿಂದಕ್ಕೆ ಪಡೆಯಬೇಕು. ಅಂತರ್ ಜಿಲ್ಲಾ ಪತಿ-ಪತ್ನಿ ಪ್ರಕರಣಗಳ ವರ್ಗಾವಣೆಗೆ ಚಾಲನೆ ನೀಡಬೇಕು. ಕೆಲಸದ ಅವಧಿಯ ಮುನ್ನ ಹಾಗೂ ಕೆಲಸ ಮುಕ್ತಾಯದ ಬಳಿಕ ನಡೆಸಲಾಗುವ ಎಲ್ಲ ಬಗೆಯ ವರ್ಚುವಲ್ ಸಭೆಗಳನ್ನು ಕಡ್ಡಾಯವಾಗಿ ನಿಷೇಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳ ಕುರಿತು ಕಂದಾಯ ಸಚಿವರಿಗೆ ಹತ್ತಾರು ಬಾರಿ ಮನವಿ ಮಾಡಿಕೊಳ್ಳಲಾಗಿದೆ. ಆದರೆ, ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ. ರಾಜ್ಯವ್ಯಾಪಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಗಿದೆ ಎಂದು ತಿಳಿಸಿದರು.

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ರಾಮಪ್ಪ, ತಾಲೂಕು ಅಧ್ಯಕ್ಷ ಸುರೇಶ್, ರಾಜೇಶ್, ಮಾರುತಿ, ಮಂಜುನಾಥ್, ಹನುಮಂತಪ್ಪ, ಕಂದಾಯಅಧಿಕಾರಿಗಳಾದ ವೀರೇಶ್ ಬಿ., ಉಪ ತಹಸೀಲ್ದಾರ್ ಪಾಂಡುರಂಗದಾಸ್, ಸಿಕಂದರ್, ಬಸಲಿಂಗಪ್ಪ, ಸಹಾಯಕ ಆಯುಕ್ತರ ಕಚೇರಿಯ ಬಸವರಾಜ್, ಈಶ್ವರಪ್ಪ ಸೇರಿದಂತೆ ನೂರಾರು ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಂದಾಯ ಇಲಾಖೆ ಅಧಿಕಾರಿಗಳು ಪ್ರತಿಭಟನೆಯಲ್ಲಿ ಬೆಂಬಲಿಸಿ ಪಾಲ್ಗೊಂಡಿದ್ದರು.

ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಬಳ್ಳಾರಿ ಡಿಸಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಯಿತು.

Share this article