ವಾಂಗ್ಚುಚ್‌ ಹೋರಾಟ ಬೆಂಬಲಿಸಿ ಅನಿರ್ದಿಷ್ಟಾವಧಿ ಧರಣಿ

KannadaprabhaNewsNetwork |  
Published : Jul 20, 2026, 04:30 AM IST
Protest

ಸಾರಾಂಶ

ನೀಟ್ ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಹಾಗೂ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಹೋರಾಟವನ್ನು ಬೆಂಬಲಿಸಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಭಾನುವಾರದಿಂದ ‘ಸೋನಮ್ ಬೆಂಬಲಿಸಿ ಕರ್ನಾಟಕ ಹೋರಾಟ ಸಮಿತಿ’ಯಿಂದ ಅನಿರ್ದಿಷ್ಟಾವಧಿ ಧರಣಿ ಆರಂಭವಾಗಿದೆ.

  ಬೆಂಗಳೂರು :  ನೀಟ್ ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಹಾಗೂ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಹೋರಾಟವನ್ನು ಬೆಂಬಲಿಸಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಭಾನುವಾರದಿಂದ ‘ಸೋನಮ್ ಬೆಂಬಲಿಸಿ ಕರ್ನಾಟಕ ಹೋರಾಟ ಸಮಿತಿ’ಯಿಂದ ಅನಿರ್ದಿಷ್ಟಾವಧಿ ಧರಣಿ ಆರಂಭವಾಗಿದೆ.

ಪ್ರತಿಭಟನೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು, ಯುವಜನರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಾಮಾಜಿಕ ಹೋರಾಟಗಾರರು ಹಾಗೂ ಸಾರ್ವಜನಿಕರು ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ನಿರ್ಲಕ್ಷಿಸುತ್ತಿದೆ

ಈ ವೇಳೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರವಿ ಕೃಷ್ಣಾರೆಡ್ಡಿ ಮಾತನಾಡಿ, ಸೋನಮ್ ವಾಂಗ್ಚುಕ್ ಅವರ ಹೋರಾಟವನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸುತ್ತಿದೆ. ಸುಮಾರು 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಯುವಜನತೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಅರಿವು ಬೆಳೆಸಿಕೊಳ್ಳಬೇಕು. ಈ ಹೋರಾಟವನ್ನು ಕೇವಲ ವಾರಾಂತ್ಯದ ಕಾರ್ಯಕ್ರಮ, ಮನರಂಜನೆ ಅಥವಾ ಪಿಕ್ನಿಕ್‌ನಂತೆ ಪರಿಗಣಿಸದೆ, ನ್ಯಾಯ ದೊರೆಯುವವರೆಗೆ ನಿರಂತರವಾಗಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಪರೀಕ್ಷಾ ಅಕ್ರಮಗಳನ್ನು ತಡೆಯಲು ವಿಫಲವಾದ ಕೇಂದ್ರ ಸರ್ಕಾರ

ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಚಂದ್ರು ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಾ ಪರೀಕ್ಷಾ ಅಕ್ರಮಗಳನ್ನು ತಡೆಯಲು ವಿಫಲವಾದ ಕೇಂದ್ರ ಸರ್ಕಾರ ನಾಚಿಕೆಪಡಬೇಕು. ಶಿಕ್ಷಣ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಹಾಳು ಮಾಡಿರುವ ಕೇಂದ್ರ ಸರ್ಕಾರದ ನೈತಿಕ ಹೊಣೆಗಾರಿಕೆಯ ಭಾಗವಾಗಿ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ನಟ ಕಿಶೋರ್ ಮಾತನಾಡಿ, ಸೋನಮ್ ವಾಂಗ್ಚುಕ್ ನಡೆಸುತ್ತಿರುವ ಹೋರಾಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸದಿರುವುದು ದುರದೃಷ್ಟಕರವಾಗಿದೆ. ದೇಶದ ನಾಯಕತ್ವವು ಈ ಹೋರಾಟದ ಬಗ್ಗೆ ಸ್ಪಂದಿಸಿ ವಿದ್ಯಾರ್ಥಿಗಳ ಆತಂಕಗಳಿಗೆ ಉತ್ತರ ನೀಡಬೇಕಾಗಿತ್ತು. ಆದರೆ ಈ ಹೋರಾಟದ ಬಗ್ಗೆ ಮೌನ ವಹಿಸಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ದೇಶದ ಯುವಜನತೆ ಇಂತಹ ಅನ್ಯಾಯಗಳ ವಿರುದ್ಧ ಈಗ ಎಚ್ಚೆತ್ತುಕೊಂಡಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ಹೊಣೆಗಾರಿಕೆ ಸ್ಥಾಪನೆಯಾಗುವವರೆಗೆ ಹೋರಾಟವನ್ನು ಮುಂದುವರಿಸಬೇಕಾಗಿದೆ ಎಂದು ಮನವಿ ಮಾಡಿದರು.

ಕನ್ನಡಪರ ಹೋರಾಟಗಾರ ಜಾಣಗೆರೆ ವೆಂಕಟರಾಮಯ್ಯ, ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ, ಹಿರಿಯ ವಕೀಲ ಕೆ.ಎನ್.ಜಗದೀಶ್ ಕುಮಾರ್ ಸೇರಿದಂತೆ ಹಲವು ಗಣ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ರಾಜ್ಯದ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ‘ಸೋನಮ್ ಬೆಂಬಲಿಸಿ ಕರ್ನಾಟಕ ಹೋರಾಟ ಸಮಿತಿ’ ಮನವಿ ಮಾಡಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಜನರ ಗುಳೆ ತಪ್ಪಿಸಲು ಜಿರಾಮ್‌ಜಿ ಅಡಿ ನೌಕರಿ ಕೊಡಿ
ಗೃಹಲಕ್ಷ್ಮಿ ಫಲಾನುಭವಿಗಳ ಪುನರ್‌ ಪರಿಶೀಲನೆಗೆ ಸಂಪುಟ ನಿರ್ಧಾರ