ಕನ್ನಡಪ್ರಭ ವಾರ್ತೆ ರಾಮನಗರ
ಪೌರಕಾರ್ಮಿಕರು ಕಸ ಸಂಗ್ರಹ, ವಿಲೇವಾರಿ, ಸ್ವಚ್ಛತೆ, ನೀರು ಪೂರೈಕೆ, ಒಳಚರಂಡಿ ನಿರ್ವಹಣೆ ಕೆಲಸಗಳನ್ನು ಸ್ಥಗಿತಗೊಳಿಸಿ ನಗರಸಭೆ ಆವರಣದಲ್ಲಿ ಅನಿರ್ದಿಷ್ಟಾವಧಿ ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.
ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಪೌರ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿ ಒತ್ತಾಯಿಸುತ್ತಲೇ ಬಂದಿದ್ದೇವೆ. ಆದರೆ, ಇದುವರೆಗೆ ಪೌರಾಡಳಿತ ಸಚಿವರು, ಇಲಾಖೆ ಕಾರ್ಯದರ್ಶಿ, ಪೌರಾಡಳಿತ ನಿರ್ದೇಶಕರು ಸೇರಿದಂತೆ ಯಾರಿಂದಲೂ ಸ್ಪಂದನೆ ಸಿಕ್ಕಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.ಕಳೆದ ಏಪ್ರಿಲ್ 6ರಂದು ರಾಜ್ಯ ಪರಿಷತ್ತಿನ ಕಾರ್ಯಕಾರಣಿ ಸಭೆ ನಡೆಸಿ ಬೇಡಿಕೆಗಳನ್ನು ಈಡೇರಿಸಲು 45 ದಿನಗಳ ಗಡುವು ನೀಡಲಾಗಿತ್ತು. ಅಲ್ಲಿವರೆಗೆ ಸಾಂಕೇತಿಕವಾಗಿ ಪ್ರತಿಭಟನೆ ಆರಂಭಿಸಿ ಗಡುವು ಮುಗಿದ ಬಳಿಕ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ತೀರ್ಮಾನಿಸಲಾಗಿತ್ತು. ಅದರಂತೆ ರಾಜ್ಯಾದ್ಯಂತ ನೌಕರರು ಕೈಗೆ ಕಪ್ಪು ಪಟ್ಟಿ ಧರಿಸಿ ಕೆಲಸ ಮಾಡುವ ಜೊತೆಗೆ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಪಂಜಿನ ಮೆರವಣಿಗೆ ನಡೆಸಿ ಸರ್ಕಾರದ ಗಮನ ಸೆಳೆಯಲಾಗಿತ್ತು.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರ ಗುತ್ತಿಗೆಯಡಿ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜುದಾರರ, ವಾಹನ ಚಾಲಕರು, ಲೋಡರ್ ಗಳು, ಕ್ಲೀನರ್ ಗಳು, ಸ್ವಚ್ಛತಾ ಮೇಲ್ವಿಚಾರಕರು, ಉದ್ಯಾನ ನಿರ್ವಹಣೆಗಾರರು ಸೇರಿದಂತೆ ವಿವಿಧ ವೃಂದದ ಹೊರ ಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ಧರಣಿಯಲ್ಲಿ ಪೌರಸೇವಾ ನೌಕರರ ಸಂಘದ ಪದಾಧಿಕಾರಿಗಳಾದ ವೆಂಕಟೇಶ್, ದೇವೇಂದ್ರ ಮತ್ತಿತರರು ಭಾಗವಹಿಸಿದ್ದರು.