ಸರ್ವರ ಸಹಕಾರದೊಂದಿಗೆ ಸ್ವಾತಂತ್ರ್ಯ ದಿನಾಚರಣೆ: ಎಡೀಸಿ ಜವರೇಗೌಡ

KannadaprabhaNewsNetwork |  
Published : Aug 06, 2025, 01:15 AM IST
5ಸಿಎಚ್‌ಎನ್‌67ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ ದಿನಾಚರಣೆ ಸಂಬಂಧ ವಿವಿಧ ಸಂಘಟನೆಗಳ ಮುಖಂಡರು, ಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರು ಪೂರ್ವಭಾವಿ ಸಭೆಯನ್ನು ನಡೆಸಿದರು. | Kannada Prabha

ಸಾರಾಂಶ

ಮುಖಂಡರು ನೀಡಿರುವ ಸಲಹೆ, ಅಭಿಪ್ರಾಯಗಳ ಅನುಸಾರ ಅಧಿಕಾರಿಗಳಿಗೆ ಸಿದ್ಧತೆ ಕೈಗೊಳ್ಳಲು ಸೂಚನೆ ನೀಡಲಾಗುತ್ತದೆ. ಸ್ವಾತಂತ್ರ್ಯ ದಿನದಂದು ಎಲ್ಲ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗುವಂತೆ ನಿರ್ದೇಶನ ನೀಡಲಾಗಿದೆ. ಹಾಜರಾತಿಯನ್ನು ತೆಗೆದುಕೊಳ್ಳಲಾಗುತ್ತದೆ.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಜಿಲ್ಲಾಡಳಿತದ ವತಿಯಿಂದ ಸರ್ವರ ಸಹಕಾರದೊಂದಿಗೆ ಆ. 15ರಂದು ನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಗುವುದೆಂದು ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರು ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ ದಿನಾಚರಣೆ ಸಂಬಂಧ ವಿವಿಧ ಸಂಘಟನೆಗಳ ಮುಖಂಡರು, ಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ದಿನವನ್ನು ಅಚ್ಚುಕಟ್ಟಾಗಿ ಆಚರಿಸಲು ಈಗಾಗಲೇ ಅಧಿಕಾರಿಗಳ ಸಭೆ ನಡೆಸಲಾಗಿದೆ. ರಾಷ್ಟ್ರೀಯ ಹಬ್ಬವಾದ ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ, ಸಲಹೆ ಅಗತ್ಯವಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತದ ಜೊತೆ ಎಲ್ಲರೂ ಕೈಜೋಡಿಸಬೇಕು. ಕಾರ್ಯಕ್ರಮ ಆಯೋಜನೆ ಸಂಬಂಧ ಸಲಹೆ, ಅಭಿಪ್ರಾಯಗಳನ್ನು ನೀಡಬೇಕೆಂದು ಮನವಿ ಮಾಡಿದರು.

ಇದೇ ವೇಳೆ ಮಾತನಾಡಿದ ವಿವಿಧ ಸಂಘಟನೆಗಳ ಮುಖಂಡರು, ಸ್ವಾತಂತ್ರ್ಯ ದಿನಾಚರಣೆಯನ್ನು ಯಾವುದೇ ಲೋಪವಿಲ್ಲದೇ ಕೈಗೊಳ್ಳಬೇಕು. ಸರ್ಕಾರಿ ಶಾಲಾ ಮಕ್ಕಳಿಗೆ ಪಥ ಸಂಚಲನ, ಸ್ವಾತಂತ್ರ್ಯ ಹೋರಾಟ ಬಿಂಬಿಸುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು. ಪಥಸಂಚಲನ ತಾಲೀಮು, ಸ್ವಾತಂತ್ರ್ಯೋತ್ಸವ ದಿನದಂದು ಕಾರ್ಯಕ್ರಮ ನಡೆಯುವ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಶುದ್ದ ಕುಡಿಯುವ ನೀರು, ವೈದ್ಯರನ್ನು ಒಳಗೊಂಡ ತಂಡ, ಆ್ಯಂಬುಲೆನ್ಸ್ ನಿಯೋಜನೆ ಮಾಡಬೇಕು ಎಂದು ಸಲಹೆ ನೀಡಿದರು.

ಬ್ಯಾಂಕುಗಳು, ಎಲ್ಲ ಗ್ರಾಮ ಪಂಚಾಯಿತಿಗಳು, ಶಾಲಾ ಕಾಲೇಜುಗಳು, ಕಚೇರಿಗಳಲ್ಲಿ ಸ್ವಾತಂತ್ರ್ಯ ದಿನ ಆಚರಿಸಬೇಕು. ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವಿಟ್ಟು ಗೌರವಿಸಬೇಕು. ಧ್ವಜ ಸಂಹಿತೆ ಪ್ರಕಾರ ರಾಷ್ಟ್ರಧ್ವಜಾರೋಹಣ ನೆರವೇರಿಸಬೇಕು. ಪ್ಲಾಸ್ಟಿಕ್ ಧ್ವಜಗಳು ಮಾರಾಟವಾಗಬಾರದು. ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆ, ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜಿಲ್ಲೆಯ ಸಾಧಕರನ್ನು ಸ್ವಾತಂತ್ರೋತ್ಸವದಂದು ಗೌರವಿಸಬೇಕು ಎಂಬುದೂ ಸೇರಿ ಹಲವು ಸಲಹೆಗಳನ್ನು ಮುಖಂಡರು ನೀಡಿದರು.

ಎಲ್ಲರ ಅಭಿಪ್ರಾಯ, ಸಲಹೆಗಳನ್ನು ಆಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಮಾತನಾಡಿ, ಶಿಷ್ಟಾಚಾರ ಅನುಸಾರ ಎಲ್ಲ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಈಗಾಗಲೇ ಸ್ವಾತಂತ್ರ್ಯ ದಿನಾಚರಣೆ ಸಂಬಂಧ ಸ್ವಾಗತ ಸಮಿತಿ, ವೇದಿಕೆ ಸಮಿತಿ, ಪರೇಡ್ ಸಮಿತಿ, ಆಹ್ವಾನ ಪತ್ರಿಕೆ ಮುದ್ರಣ ಸಮಿತಿ, ಧ್ವಜ ಸಿದ್ಧತಾ ಸಮಿತಿ, ಸಾಂಸ್ಕೃತಿಕ ಸಮಿತಿ ಸೇರಿ ಇನ್ನಿತರೆ ಸಮಿತಿಗಳನ್ನು ರಚಿಸಿ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಸಮಿತಿಯ ಅಧ್ಯಕ್ಷರು, ಸದಸ್ಯರು ಸೂಕ್ತ ಕ್ರಮವಹಿಸಲಿದ್ದಾರೆ ಎಂದು ತಿಳಿಸಿದರು.

ಮುಖಂಡರು ನೀಡಿರುವ ಸಲಹೆ, ಅಭಿಪ್ರಾಯಗಳ ಅನುಸಾರ ಅಧಿಕಾರಿಗಳಿಗೆ ಸಿದ್ಧತೆ ಕೈಗೊಳ್ಳಲು ಸೂಚನೆ ನೀಡಲಾಗುತ್ತದೆ. ಸ್ವಾತಂತ್ರ್ಯ ದಿನದಂದು ಎಲ್ಲ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗುವಂತೆ ನಿರ್ದೇಶನ ನೀಡಲಾಗಿದೆ. ಹಾಜರಾತಿಯನ್ನು ತೆಗೆದುಕೊಳ್ಳಲಾಗುತ್ತದೆ. ಯಾವುದೇ ನ್ಯೂನ್ಯತೆಗಳಿಲ್ಲದೆ ಸ್ವಾತಂತ್ರ್ಯ ದಿನ ಆಚರಣೆಗೆ ಕಾರ್ಯೋನ್ಮುಖರಾಗಲು ಕ್ರಮ ತೆಗೆದುಕೊಳ್ಳಲಾಗುವುದು. ರಾಷ್ಟ್ರೀಯ ಹಬ್ಬದ ಆಚರಣೆಗೆ ಸರ್ವರೂ ಸಹಕಾರ ನೀಡಬೇಕು ಎಂದು ಅವರು ಕೋರಿದರು.

ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರಾಮಚಂದ್ರರಾಜೇ ಅರಸ್, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ರಾಜು, ಪ್ರಾದೇಶಿಕ ಸಾರಿಗೆ ಅಧಿಕಾರಿ ಗಾಯತ್ರಿ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಕಿರಣ್, ವಿವಿಧ ಸಂಘಟನೆಗಳ ಮುಖಂಡರಾದ ವೆಂಕಟರಮಣ ಪಾಪು, ಚಾ.ರಂ. ಶ್ರೀನಿವಾಸಗೌಡ, ಮಹದೇವಶೆಟ್ಟಿ, ನಿಜಧ್ವನಿ ಗೋವಿಂದರಾಜು, ಚಾ.ಹ. ಶಿವರಾಜು, ಚಾ.ಗು. ನಾಗರಾಜು, ಪಣ್ಯದಹುಂಡಿ ರಾಜು, ಜಿ. ಬಂಗಾರು, ಸಿ.ಎಂ. ನರಸಿಂಹ ಮೂರ್ತಿ, ಬ್ಯಾಡಮುಡ್ಲು ಬಸವಣ್ಣ, ಶಿವು, ಆಲೂರುಮಲ್ಲು, ಸಿ.ಎಂ. ಶಿವಣ್ಣ, ಎಲ್. ಸುರೇಶ್, ಪರ್ವತ್‌ರಾಜ್, ಆಲೂರು ರವಿಕುಮಾರ್, ಮಹೇಶ್‌ಗೌಡ, ಇನ್ನಿತರ ಮುಖಂಡರು, ಪ್ರತಿನಿಧಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

PREV

Recommended Stories

ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಗೃಹಲಕ್ಷ್ಮೀಯರ ಬಾಕಿ ಹಣ ಬಿಡುಗಡೆಗೆ ಲಕ್ಷ್ಮೀ ತಥಾಸ್ತು : ಸುಳ್ಳಲ್ಲೇ 7 ಗಂಟೆ ರೈಲು ಓಡಿಸಿದ್ರು