ಕನ್ನಡಪ್ರಭ ವಾರ್ತೆ ಆಲೂರು
ಭಾರತವು ವಿಶ್ವದಲ್ಲಿಯೇ ಶ್ರೇಷ್ಠ ಪ್ರಜಾಪ್ರಭುತ್ವ ಹೊಂದಿರುವ ದೇಶವಾಗಿದ್ದು, ಸಂವಿಧಾನ ರಚಿಸುವಲ್ಲಿ ಡಾ. ಅಂಬೇಡ್ಕರ್‌ರ ಕೊಡುಗೆ ಅಪಾರವಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಇಡೀ ಪ್ರಪಂಚದಲ್ಲೇ ಭಾರತದ ಸಂವಿಧಾನ ಅತ್ಯಂತ ಶ್ರೇಷ್ಟ ಸಂವಿಧಾನವಾಗಿದೆ, ಸಂವಿಧಾನದ ಈ ಆಶಯವನ್ನು ಸಾಕಾರಗೊಳಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ತಿಳಿಸಿದರು. ತಾಲೂಕಿನ ಜನ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು, ಆಲೂರು ಕೂಡಿಗೆಯಿಂದ ಬೈರಾಪುರದವರೆಗೂ ರಸ್ತೆ ಅಗಲೀಕರಣ ಮಾಡಿ ಆಲೂರು ಪಟ್ಟಣದ ಅಭಿವೃದ್ಧಿಗೆ ವಿಶೇಷ ಒತ್ತು, ಕಾಡಂಚಿನಲ್ಲಿರುವ ಗ್ರಾಮಗಳ ಸಮಸ್ಯೆಗಳ ನಿವಾರಣೆ, ತಾಲೂಕು ಕ್ರೀಡಾಂಗಣದ ಶ್ರೇಯೋಭಿವೃದ್ಧಿಗೆ ಒತ್ತು ನೀಡುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.
ಧ್ವಜಾರೋಹಣ ನೆರವೇರಿಸಿ ಧ್ವಜ ಸಂದೇಶ ಸಾರಿದ ತಾಲೂಕು ಪ್ರಭಾರ ತಹಸೀಲ್ದಾರ್ ಪೂರ್ಣಿಮಾ, ಅಖಂಡ ಭಾರತದ ಆಡಳಿತಕ್ಕೆ ಅಗತ್ಯವಾದ ಸೂಕ್ತ ಸಂವಿಧಾನವನ್ನು ದೇಶಕ್ಕೆ ಅರ್ಪಿಸಿದ ದಿನದ ಸವಿನೆನಪಿಗಾಗಿ ಪ್ರತಿ ವರ್ಷ ಜನವರಿ 26ರಂದು ಗಣರಾಜ್ಯೋತ್ಸವ ದಿನಾಚರಣೆ ಮಾಡಲಾಗುತ್ತದೆ, ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯೊದಗಿಸಿದೆ. ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲ. ನಮ್ಮ ಸಂವಿಧಾನವು ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನಾಗಿದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಗಣ್ಯರನ್ನು ಗೌರವಿಸಲಾಯಿತು. ಆಲೂರು ಪಟ್ಟಣದ ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಪೊಲೀಸ್ ಇಲಾಖೆ ಸಿಬ್ಬಂದಿಯಿಂದ ಪಥಸಂಚಲನ ನಡೆಯಿತು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದು ಜನರ ಗಮನ ಸೆಳೆದವು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ತಾಹೇರ ಬೇಗಂ, ತಾಲೂಕು ಜೆಡಿಎಸ್ ಅಧ್ಯಕ್ಷ ಮಂಜೇಗೌಡ, ಬಿಜೆಪಿ ಅಧ್ಯಕ್ಷೆ ಉಮಾ ರವಿಪ್ರಕಾಶ್, ಕಾಂಗ್ರೆಸ್ ಅಧ್ಯಕ್ಷ ಶಿವಮೂರ್ತಿ, ರಾಧಮ್ಮ ಜನಸ್ಪಂದನ ಸಂಸ್ಥೆಯ ಅಧ್ಯಕ್ಷ ಹೇಮಂತ್ ಕುಮಾರ್, ಕಸಾಪ ಅಧ್ಯಕ್ಷ ಗೋಪಾಲಕೃಷ್ಣ, ಶಿಕ್ಷಣಾಧಿಕಾರಿ ಕೃಷ್ಣೇಗೌಡ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎ ಟಿ ಮಲ್ಲೇಶ್, ಪೊಲೀಸ್ ಇನ್ಸ್‌ಪೆಕ್ಟರ್ ಗಂಗಾಧರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವರದರಾಜು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬಸವರಾಜು ಮುಂತಾದವರು ಹಾಜರಿದ್ದರು.