ಹೂವಿನಹಡಗಲಿ: ಭಾರತ ವಿಶ್ವದಲ್ಲೇ ಬಲಿಷ್ಠ ಪ್ರಜಾಪ್ರಭುತ್ವ ಅತಿ ದೊಡ್ಡ ರಾಷ್ಟ್ರವಾಗಿದೆ ಎಂದು ಶಾಸಕ ಎಲ್. ಕೃಷ್ಣನಾಯ್ಕ ಹೇಳಿದರು.
ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಮತ್ತು ತಾಲೂಕ ಆಡಳಿತ ಹಾಗೂ ತಾಪಂ ಸಹಯೋಗದಲ್ಲಿ ಹಮ್ಮಿಕೊಂಡಿದ್ದ, ಸಂವಿಧಾನ ದಿನಾಚರಣೆ ಅಂಗವಾಗಿ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.ಎಲ್ಲ ವರ್ಗದ ಜನ ಸಾಮಾನ್ಯರ ಬದುಕು ಹಸನಾಗಲು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಸಂವಿಧಾನ ರಚಿಸಿದ್ದಾರೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಎಲ್ಲರಿಗೂ ಮತದಾನ ಹಕ್ಕು ನೀಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಮತದಾನದ ಮಹತ್ವದ ಬಗ್ಗೆ ಯುವಪೀಳಿಗೆಯಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಶಾಲಾ-ಕಾಲೇಜುಗಳಲ್ಲಿ ಮತದಾರರ ಸಾಕ್ಷರತಾ ಸಂಘದ ವತಿಯಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.
ತಹಸೀಲ್ದಾರ್ ಜಿ. ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಆನಂದ್ ಡೊಳ್ಳಿನ, ಬಿಇಒ ಮಹೇಶ್ ಪೂಜಾರ, ಪುರಸಭೆ ಮುಖ್ಯಾಧಿಕಾರಿ ಇಮಾಮ್ ಸಾಬ್, ಸಮಾಜ ಕಲ್ಯಾಣ ಇಲಾಖೆಯಅಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಪರಿವೀಕ್ಷಕ ರಫಿ ಅಹಮದ್ ಖವಾಸ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ. ಹನುಮಂತಪ್ಪ, ಜಿಪಿಜಿ ಕಾಲೇಜು ಪ್ರಾಂಶುಪಾಲ ಕೋರಿ ಹಾಲೇಶ್, ಶಂಕರ್ ಬೆಟಗೇರಿ, ಕನ್ನಡ ಜಾಗೃತಿ ಸಮಿತಿ ಸದಸ್ಯ ಸುರೇಶ ಅಂಗಡಿ, ಶಿಕ್ಷಣ ಸಂಯೋಜಕರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಭಾರತದ ಸಂವಿಧಾನ ಪ್ರಸ್ತಾವನೆಯನ್ನು ಎಲ್ಲರೂ ಸಾಮೂಹಿಕವಾಗಿ ಪಠಿಸಿದರು. ಅಂಬೇಡ್ಕರ್ ವೃತ್ತದಿಂದ ನಡೆದ ಜಾಥಾ ಲಾಲ್ ಬಹಾದ್ದೂರ್ ಶಾಸ್ತ್ರಿ ವೃತ್ತದ ಮೂಲಕ ಸಂಚರಿಸಿತು. ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ನಂತರದ ಹಾಸ್ಟೆಲ್ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.