ಅಂತರಾಷ್ಟ್ರೀಯ ಸಂವಿಧಾನ ದಿನಾಚರಣೆ
ಯಾವುದೇ ಒಂದು ದೇಶದ ಅಭಿವೃದ್ಧಿಯು ಅಲ್ಲಿನ ಆಡಳಿತ ವ್ಯವಸ್ಥೆ ಮೇಲೆ ಅವಲಂಬಿತವಾಗಿರುತ್ತದೆ. ಅಂತಹ ಉತ್ತಮ ಆಡಳಿತ ವ್ಯವಸ್ಥೆಯನ್ನು ನಮ್ಮ ದೇಶದಲ್ಲಿ ಕಾಣಬಹುದಾಗಿದೆ. ಅದರಿಂದಲೇ ಭಾರತ ಅಭಿವೃದ್ಧಿಯತ್ತ ಮುನ್ನುಗುತ್ತಿದೆ. ಈ ಕಾರಣಕ್ಕಾಗಿಯೇ ವಿಶ್ವವೇ ಭಾರತದತ್ತ ನೋಡುವಂತಾಗಿದೆ ಎಂದು ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್ ತಿಳಿಸಿದರು.
ಜಿಲ್ಲಾಡಳಿತ, ಜಿಪಂ ಮತ್ತು ಸಮಾಜ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ನನ್ನ ಮತ-ನಮ್ಮ ಹಕ್ಕು ಎಂಬ ಧ್ಯೇಯವಾಕ್ಯದೊಂದಿಗೆ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಸೋಮವಾರ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಡಾ. ಬಾಬು ಜಗನ್‌ಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.ವಿಶ್ವದಲ್ಲಿಯೇ ಎರಡನೇ ಅತಿದೊಡ್ಡ ಜನಸಂಖ್ಯೆ ಹೊಂದಿದ ರಾಷ್ಟ್ರ ಭಾರತ. ಪ್ರಜಾಪ್ರಭುತ್ವ ಹೊಂದಿದ ರಾಷ್ಟ್ರವಾಗಿದೆ. ಜನಪ್ರತಿನಿಧಿಗಳಿಂದಲೇ ಕಾನೂನು ರೂಪಿಸಲಾಗುತ್ತದೆ. ಜನರಿಗಾಗಿಯೇ ಅನುಷ್ಠಾನಗೊಳಿಸಲಾಗುತ್ತದೆ.
ಸ್ವಾತಂತ್ರ್ಯ ನಂತರದ ದೇಶದ ಅಭಿವೃದ್ಧಿ ಮತ್ತು ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಡಾ. ಬಿ.ಆರ್. ಅಂಬೇಡ್ಕರ್ ಭಾರತಕ್ಕೆ ಅತ್ಯುತ್ತಮ ಆಡಳಿತ ವ್ಯವಸ್ಥೆ ನೀಡಬೇಕೆಂದು ಗಣರಾಜ್ಯ ಹಾಗೂ ಪ್ರಜಾಪ್ರಭುತ್ವ ಕಲ್ಪನೆಯನ್ನು ರೂಪಿಸಿ ಅದನ್ನು ಸಂವಿಧಾನದಲ್ಲಿ ಅಳವಡಿಸಿದರು. ಅದೇ ರೀತಿಯಾದ ಆಡಳಿತ ರೂಪಿಸಿ, ಆ ವ್ಯವಸ್ಥೆ ಅಂಗೀಕರಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಮಾತನಾಡಿ, ಇಂದಿನ ಯುವ-ಪೀಳಿಗೆಯೇ ಪ್ರಜಾಪ್ರಭುತ್ವ ಭವಿಷ್ಯವಾಗಿದೆ. ಈಗಿನ ಯುವ ಮನಸ್ಕರು ಸಂವಿಧಾನ ಹಕ್ಕುಗಳು ಮತ್ತು ಮೂಲಭೂತ ಕರ್ತವ್ಯಗಳ ಅರಿವು ಹೊಂದಬೇಕಿದೆ. ಉದಾತ್ತ ಗುರಿ ಹೊಂದುವುದರ ಮೂಲಕ ದೇಶಕ್ಕೆ ಅಭಿವೃದ್ಧಿಯ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮ ಆರಂಭಕ್ಕೂ ಮುನ್ನ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಸಂವಿಧಾನ ಪ್ರಸ್ತಾವನೆ ಬೋಧಿಸಿದರು. ಇಂದಿನಿಂದ ಅಕ್ಟೋಬರ್ ಅಂತ್ಯದವರೆಗೆ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಭಾಷಣ, ಚರ್ಚಾಸ್ಪರ್ಧೆ, ಚಿತ್ರಕಲೆ ಮತ್ತು ಫೋಟೋಗ್ರಫಿ ಸ್ಪರ್ಧೆಗಳಿಗೆ ಚಾಲನೆ ನೀಡಲಾಯಿತು.
ಆಕರ್ಷಕ ಸೈಕಲ್ ರ‍್ಯಾಲಿ:
ಬಳಿಕ ಸೈಕಲ್ ರ‍್ಯಾಲಿಗೆ ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೈಕಲ್ ಸವಾರಿ ಮಾಡುವ ಮೂಲಕ ಚಾಲನೆ ನೀಡಿದರು. ರ‍್ಯಾಲಿಯು ನೂತನ ಜಿಲ್ಲಾಡಳಿತ ಭವನದಿಂದ ಆರಂಭಗೊಂಡು ಗಡಗಿ ಚೆನ್ನಪ್ಪ ವೃತ್ತ- ಕನಕ ದುರ್ಗಮ್ಮ ದೇವಸ್ಥಾನ ವೃತ್ತ- ಎಸ್ಪಿ ವೃತ್ತ- ಎಚ್.ಆರ್. ಗವಿಯಪ್ಪ ವೃತ್ತದ ಮಾರ್ಗವಾಗಿ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ವೇದಿಕೆ ಕಾರ್ಯಕ್ರಮದವರೆಗೆ ಸಾಗಿಬಂತು.