ಹೊನ್ನಾವರ: ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತಕ್ಕೆ ನೀಡಿದ ಸಂವಿಧಾನ ಪ್ರಪಂಚಕ್ಕೆ ಮಾದರಿಯಾಗಿದ್ದು, ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹೊನ್ನಪ್ಪ ನಾಯಕ ತಿಳಿಸಿದರು.
ಭಾನುವಾರ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಏರ್ಪಡಿಸಿದ್ದ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ೧೩೩ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕೆಲವರು ತಮ್ಮ ರಾಜಕೀಯ ತೆವಲಿಗಾಗಿ ಸಂವಿಧಾನ ಬದಲಾಯಿಸುವುದಕ್ಕಾಗಿಯೇ ತಾವು ಅಧಿಕಾರಕ್ಕೆ ಬಂದಿದ್ದು ಎಂದು ಹೇಳುತ್ತಾ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಆದರೆ ಅಂಥವರು ಇಂದು ಜನರ ನಡುವೆ ಕಾಣದಂತಾಗಿದ್ದಾರೆ ಎಂದು ಪರೋಕ್ಷವಾಗಿ ಸಂಸದ ಅನಂತ್ ಕುಮಾರ್ ಹೆಗಡೆಯವರಿಗೆ ಟಾಂಗ್ ನೀಡಿದರು.ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ ಪ್ರಾಸ್ತಾವಿಕವಾಗಿ ಮಾತನಾಡಿ, ಭಾರತದಂಥ ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಾವಿರಾರು ಜಾತಿ, ಹತ್ತಾರು ಧರ್ಮಗಳು, ಅನೇಕ ಭಾಷೆಗಳ ನಡುವೆಯೂ ಸಮಾಜದಲ್ಲಿ ಪ್ರೀತಿ, ವಿಶ್ವಾಸ, ಶಾಂತಿ ಮತ್ತು ಸ್ನೇಹದಿಂದ ಬದುಕುತ್ತಿದ್ದರೆ ಅದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತಕ್ಕೆ ನೀಡಿದ ಸಂವಿಧಾನದ ಮೂಲಕ ಎನ್ನುವುದಕ್ಕೆ ತುಂಬಾ ಹೆಮ್ಮೆ ಎನಿಸುತ್ತದೆ ಎಂದರು. ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಶಿಕ್ಷಕರ ವಿಭಾಗದ ಅಧ್ಯಕ್ಷ ಪ್ರೊ. ಎಸ್.ಡಿ. ಹೆಗಡೆ ಮಾತನಾಡಿ, ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರು ಮಹಾನ್ ಮಾನವತಾವಾದಿಗಳಾಗಿದ್ದರು. ಅವರು ರಚಿಸಿದ ಭಾರತದ ಸಂವಿಧಾನ ಜಗತ್ತಿಗೆ ಮಾದರಿಯಾಗಿದ್ದು, ಡಾ. ಅಂಬೇಡ್ಕರ್ ಅವರ ತತ್ವ, ಆದರ್ಶ, ಚಿಂತನೆಗಳು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿಯಾಗಿ ನಿಂತಿದೆ ಎಂದರು.
ಹೊನ್ನಾವರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಮಹೇಶ್ ಅವರು ಕಾಂಗ್ರೆಸ್ ಕಾರ್ಯಕರ್ತರಿಗೆ ಸಂವಿಧಾನ ಪೀಠಿಕೆ ಬೋಧಿಸಿದರು. ಹೊನ್ನಾವರ ಪಟ್ಟಣ ಪಂಚಾಯಿತಿಯಲ್ಲಿ ಪೌರಕಾರ್ಮಿಕನಾಗಿ ನಿವೃತ್ತಿ ಹೊಂದಿ, ಹಾಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಕೃಷ್ಣ ರಂಗಾ ಹರಿಜನ ಅವರನ್ನು ಸನ್ಮಾನಿಸಲಾಯಿತು.ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ವಿನೋದ ನಾಯ್ಕ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪ್ರಕಾಶ ನಾಯಕ, ಜಿಲ್ಲಾ ಸೇವಾದಳದ ಪ್ರಧಾನ ಕಾರ್ಯದರ್ಶಿ ಕೃಷ್ಣ ಮಾರಿಮನೆ, ಜಿಲ್ಲಾ ಇಂಟೆಕ್ ವಿಭಾಗದ ಕಾರ್ಯದರ್ಶಿ ಕೇಶವ ಮೇಸ್ತ, ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷ ಕುಪ್ಪು ಗೌಡ ಸೇರಿದಂತೆ ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದರು.