ಇಂದಿರಾ ಗಾಂಧಿ ಪುಣ್ಯಸ್ಮರಣೆ । ಸರ್ದಾರ್ ವಲ್ಲಭಭಾಯ್ ಪಟೇಲ್ ಜಯಂತಿ
ಉಡುಪಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಉಕ್ಕಿನ ಮಹಿಳೆ ಎನ್ನುವ ಬಿರುದಿಗೆ ತಕ್ಕ ಹಾಗೆ ಬದುಕಿ ತೋರಿಸಿದ್ದರು. ಅವರ ವ್ಯಕ್ತಿತ್ವ ಇಡೀ ವಿಶ್ವಕ್ಕೇ ಮಾದರಿ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಶುಕ್ರವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಭವನದಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯ್ ಪಟೇಲ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿರಾ ಗಾಂಧಿ ನನ್ನ ಆದರ್ಶ, ನನ್ನಂತಹ ಲಕ್ಷಾಂತರ ಜನರಿಗೆ ಸ್ಫೂರ್ತಿಯ ಸೆಲೆ ಆಗಿದ್ದಾರೆ ಎಂದರು.
ಇಂದಿರಾ ಗಾಂಧಿ ರಾಜಕಾರಣ ಕೇವಲ ಮಹಿಳೆಯರಿಗಷ್ಟೇ ಅಲ್ಲದೆ, ಪುರುಷರಿಗೂ ಆದರ್ಶ. ಅವರ ನೇತೃತ್ವದಲ್ಲಿ ಭಾರತವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಲಿಷ್ಠ ರಾಷ್ಟ್ರವಾಗಿ ಗುರುತಿಸಿಕೊಂಡಿತು. ಒಂದು ಹೊತ್ತು ಊಟ ಮಾಡಲು ಕಷ್ಟ ಪಡುತ್ತಿದ್ದ ಕಾಲದಲ್ಲಿ ದೇಶವನ್ನು ಮುನ್ನಡೆಸಿ ಇಂದಿರಾಗಾಂಧಿ ದೇಶದ ಸ್ವಾವಲಂಬನೆಗಾಗಿ ಬ್ಯಾಂಕ್ ಗಳ ರಾಷ್ಟ್ರೀಕರಣ, ಹಸಿರು ಕ್ರಾಂತಿ ಸೇರಿದಂತೆ ಅನೇಕ ಆರ್ಥಿಕ ಮತ್ತು ಸಾಂಸ್ಕೃತಿಕ ಸುಧಾರಣೆಗಳನ್ನು ಆರಂಭಿಸಿದರು ಎಂದರು. ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸೋಕೆ ಪ್ರತಿಯೊಬ್ಬ ಕಾರ್ಯಕರ್ತನ ಶ್ರಮ ಅಗತ್ಯ. ದೇಶ ಉಳಿಬೇಕು ಎಂದರೆ ಕಾಂಗ್ರೆಸ್ ಪಕ್ಷ ಉಳಿಬೇಕು, ಉಡುಪಿ ಜಿಲ್ಲೆಯಲ್ಲಿ ಐದು ಕ್ಷೇತ್ರಗಳಲ್ಲಿ ಸೋತರೂ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ. ದೇಶದ ಭವಿಷ್ಯ, ಮಕ್ಕಳ ಭವಿಷ್ಯಕ್ಕಾಗಿ ಕಾಂಗ್ರೆಸ್ ಪಕ್ಷ ಅತ್ಯಗತ್ಯ ಎಂದು ಹೇಳಿದರು. ಪಟೇಲ್ ಆದರ್ಶ ಪುರುಷ: ಹರಿದು ಹಂಚಿ ಹೋಗಿದ್ದ ಭಾರತವನ್ನು ಒಂದುಗೂಡಿಸಿದ ಖ್ಯಾತಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಸಲ್ಲುತ್ತದೆ. ಅಖಂಡ ಭಾರತ ನಿರ್ಮಾಣದಲ್ಲಿ ಅವರ ಪಾತ್ರ ದೊಡ್ಡದು, ಅವರೊಬ್ಬ ಆದರ್ಶ ಪುರುಷ ಎಂದು ಸಚಿವೆ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ರಮೇಶ್ ಕಾಂಚನ್ ಮತ್ತಿತರರಿದ್ದರು.