ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಬರುವ ನ.05 ರಂದು ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳ ಸಹಯೋಗದಲ್ಲಿ ನಗರದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಸ್ಥಾಪನೆಯ 50ನೇ ವರ್ಷಾಚರಣೆಯ ಸುವರ್ಣ ಮಹೋತ್ಸವ ಹಾಗೂ ಪರಿಸರ ಸಂರಕ್ಷಣೆಗಾಗಿ ಸೇವೆ ಸಲ್ಲಿಸಿದ ಜಿಲ್ಲೆಯ ಗಣ್ಯರಿಗೆ ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿವಮೊಗ್ಗ ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆ ಮತ್ತು ಪರಿಸರ ವ್ಯವಸ್ಥೆಯ ಸ್ಥಾಪನೆಗಾಗಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿ ಹಾಗೂ ಸಂಸ್ಥೆಗಳನ್ನು ಗುರುತಿಸಿ ತಲಾ ಮೂರು ಪ್ರಶಸ್ತಿಗಳನ್ನು ನೀಡಲಾಗುವುದು. ಇದಕ್ಕಾಗಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಲಾಗುವುದು. ಇದರೊಂದಿಗೆ 03 ಪರಿಸರ ಸ್ನೇಹಿ ಗ್ರಾಮ ಪಂಚಾಯಿತಿಗಳಿಗೂ ಪ್ರಶಸ್ತಿ ನೀಡಲಾಗುವುದು ಎಂದರು.
ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಿಕ್ಷಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಸೇರಿದಂತೆ ಶಿವಮೊಗ್ಗ ಹಾಗೂ ಚಿತ್ರದುರ್ಗ ಜಿಲ್ಲೆಯ ಜನ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದರಿಂದ ಅಧಿಕಾರಿಗಳು ಎಚ್ಚರಿಕೆಯಿಂದ ಶಿಷ್ಠಾಚಾರ ಪಾಲನೆ ಮಾಡಬೇಕು ಎಂದರು.ಜಿಲ್ಲಾ ಪರಿಸರ ಅಧಿಕಾರಿ ಆಸಿಫ್ ಖಾನ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಿಲ್ಲಾಶಸ್ತ್ರ ಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ, ಸಹಾಯಕ ಪರಿಸರಾಧಿಕಾರಿ ರಾಜೇಶ್ ಇದ್ದರು.