ಸಿಎಂ ಖರ್ಚಿ ಮೇಲೆ ಕಣ್ಣಿಟ್ಟವರಿಂದ ಎಂಡಿಎ ಹಗರಣ ಬಯಲು

KannadaprabhaNewsNetwork | Published : Jul 6, 2024 12:47 AM

ಸಾರಾಂಶ

ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ. ಆದರೆ, ಹಗರಣ ಆಚೆ ಬರಲು ಕಾಂಗ್ರೆಸ್‌ ನವರೇ ಒಳಗೆ ಕುಮ್ಮಕ್ಕು ಕೊಡುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ.

ಕನ್ನಡಪ್ರಭ ವಾರ್ತೆ ಮೈಸೂರು

ಸಿಎಂ ಖರ್ಚಿ ಮೇಲೆ ಕಣ್ಣಿಟ್ಟವರಿಂದ ಎಂಡಿಎ ಹಗರಣ ಬಯಲು ಎಂದು ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಮೈಸೂರಿನ ಚಾಮುಂಡಿಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಯಾಕೆ? ಇದರ ಹಿಂದೆ ಸಿಎಂ ಖುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರ ಇದೆ. ಸಿಡಿ ಫ್ಯಾಕ್ಟರಿ ಬಂದ್ ಆಯ್ತು ಎಂಡಿಎ ಫ್ಯಾಕ್ಟರಿ ಶುರುವಾಯ್ತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಪರೋಕ್ಷವಾಗಿ ಆರೋಪಿಸಿದರು.

ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ. ಆದರೆ, ಹಗರಣ ಆಚೆ ಬರಲು ಕಾಂಗ್ರೆಸ್‌ ನವರೇ ಒಳಗೆ ಕುಮ್ಮಕ್ಕು ಕೊಡುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಸಿಎಂ ಪತ್ನಿಗೆ ಆ ಜಾಗ ಹೇಗೆ ಬಂತು ಅಂತಲೂ ನನಗೆ ಗೊತ್ತಿದೆ. 62 ಕೋಟಿ ರೂ. ಪರಿಹಾರ ಕೇಳುವ ಸಿಎಂ ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಅವರು ಸವಾಲು ಹಾಕಿದರು.

ಆ ದೇವರು ಮೆಚ್ಚುತ್ತಾನಾ?

ಸಿಎಂ ಪತ್ನಿಗೆ 14 ಸೈಟ್ ಹಂಚಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾನೂನು ಸಲಹೆಗಾರ ಈಗ ಎಂಎಲ್ಎ ಆಗಿದ್ದಾರೆ. ಅವರು ಸಿಎಂ ಪರ ಸುಧೀರ್ಘವಾಗಿ ಮಾತನಾಡಿದ್ದಾರೆ. 62 ಕೋಟಿ ರೂ. ಪರಿಹಾರ ನೀಡಬೇಕು ಎಂದಿದ್ದಾರೆ. ಆದರೆ, ಹಲವು ಅಭಿವೃದ್ಧಿ ‌ಹೆಸರಿನಲ್ಲಿ ಭೂ ಸ್ವಾಧೀನವಾಗಿದೆ. ಆ ರೈತರು ಇನ್ನೂ ಕೂಡ ಬೀದಿಯಲ್ಲಿ ಅಲೆದಾಡುತ್ತಿದ್ದಾರೆ. ಅವರಿಗೆ ರೇಟ್ ಫಿಕ್ಸ್ ಮಾಡುವಾಗ ಹೇಗೆ ಮಾಡುತ್ತೀರಾ? ರೈತರನ್ನ ಬೀದಿಗೆ ನಿಲ್ಲಿಸಿದ್ದೀರಿ ಇದು ಸರೀನಾ? ನಿಮ್ಮ ಪತ್ನಿಯ ಹಣ ಕೇಳುತ್ತಾ ಇದ್ದೀರಲ್ಲಾ ಆ ದೇವರು ಮೆಚ್ಚುತ್ತಾನಾ ಎಂದು ಪ್ರಶ್ನಿಸಿದರು.

Share this article