ದೊಡ್ಡಬಳ್ಳಾಪುರ: ಇನ್ಫೋಸಿಸ್ ಸಂಸ್ಥೆ ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್‌ಆರ್)ಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲಾ ಕಟ್ಟಡಗಳ ನವೀಕರಣ ಮತ್ತು ಅಭಿವೃದ್ಧಿಪಡಿಸಲು ಮುಂದೆ ಬಂದಿರುವುದು ಜಿಲ್ಲೆಯ ಜನತೆಗೆ ಹೆಮ್ಮೆಯ ವಿಷಯ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.
ಸಿಎಸ್ಆರ್ ಅನುದಾನದಡಿ ನಿರ್ಮಾಣಗೊಳ್ಳಲಿರುವ ಶಾಲಾ ಕಟ್ಟಡಗಳು ಗುಣಮಟ್ಟದಿಂದ ಕೂಡಿರಬೇಕು ಹಾಗೂ ಸಾಕಷ್ಟು ವರ್ಷ ಕಟ್ಟಡ ಬಾಳಿಕೆ ಬರಬೇಕು. ಆ ರೀತಿಯಲ್ಲಿ ಯೋಜನೆ ರೂಪಿಸಿ ಶಾಲಾ ಕಟ್ಟಡ ನಿರ್ಮಾಣ ಮಾಡಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಸಾಕಷ್ಟು ರೈತರು ಕೈಗಾರಿಕಾ ಪ್ರದೇಶದಿಂದ ಕೃಷಿಭೂಮಿ ಕಳೆದುಕೊಂಡಿದ್ದಾರೆ. ಆ ರೈತ ಕುಟುಂಬಗಳುಈಗ ಕೈಗಾರಿಕೆಗಳಲ್ಲಿ ಕಡಿಮೆ ಸಂಬಳಕ್ಕೆ ದುಡಿಯುತ್ತಿರುವುದು ವಾಸ್ತವ. ಅಂತಹ ಪರಿಸ್ಥಿತಿ ಮುಂದಿನ ಪೀಳಿಗೆಯ ಮಕ್ಕಳಿಗೆ ಬರಬಾರದು. ಹಾಗಾಗಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು, ಬಡತನದಿಂದ ಬೆಳೆದ ಮಕ್ಕಳು ಒಳ್ಳೆಯ ವಿದ್ಯಾಭ್ಯಾಸ ಪಡೆಯಲು ಸಹಕಾರಿ ಆಗಬೇಕು. ಖಾಸಗಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ಮರಳಿ ಸರ್ಕಾರಿ ಶಾಲೆಗಳತ್ತ ಬರಬೇಕು ಎಂಬುದು ನನ್ನ ಆಶಯ. ಕೆಪಿಎಸ್ ಶಾಲೆಗಳನ್ನು ಸಹ ಉನ್ನತಶ್ರೇಣಿಯಲ್ಲಿ ನವೀಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಮಾತನಾಡಿ, ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ಜೊತೆಗೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅಷ್ಟೇ ಮುಖ್ಯ. ಶಾಲೆಗಳಿಗೆ ಕೌಶಲ್ಯಾಧಾರಿತ ಶಿಕ್ಷಕರನ್ನು ನೇಮಿಸುವುದರೊಂದಿಗೆ ಶಿಕ್ಷಕರ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಡಾ.ಕೆ.ಎನ್.ಅನುರಾಧ, ಅಪರ ಜಿಲ್ಲಾಧಿಕಾರಿ ಅಮರೇಶ್, ಉಪವಿಭಾಗಾಧಿಕಾರಿ ದುರ್ಗಶ್ರೀ , ಇನ್ಫೋಸಿಸ್ ಸಂಸ್ಥೆ ಅಧಿಕಾರಿ ಗಗನ್ ಮಟ್ಟಿ ಹಾಗೂ ತಂಡ, ಜಿಲ್ಲಾ ಮಟ್ಟದ ಅಧಿಕಾರಿಗಳು, ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.1ಕೆಡಿಬಿಪಿ1-
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ನೀಲನಕ್ಷೆ ಸಿದ್ದಪಡಿಸಿರುವ ಇನ್ಫೋಸಿಸ್ ಸಂಸ್ಥೆಯ ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಶ್ಲಾಘಿಸಿದರು.