
ಕಾರವಾರ: ಕಾರವಾರ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಮೂಲಸೌಕರ್ಯಗಳ ಕೊರತೆಯಿಂದ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಈ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಬಿಜೆಪಿ ಕಾರವಾರ ಗ್ರಾಮೀಣ ಘಟಕ ಜಿಲ್ಲಾಡಳಿತಕ್ಕೆ ಸಲ್ಲಿಸಿದ ಮನವಿಯಲ್ಲಿ ಎಚ್ಚರಿಕೆ ನೀಡಿದೆ.
ಶಿರವಾಡ, ಕಡವಾಡ, ಕಿನ್ನರ, ಫಾಡಸಾಯಿ, ತೋಡೂರು ಕಾಲೋನಿ ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಸಮರ್ಪಕವಾಗಿ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳ್ಳದ ಕಾರಣ ಜನರು ಒಂದು ಬಿಂದಿಗೆ ನೀರಿಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಇದರೊಂದಿಗೆ ಗ್ರಾಮೀಣ ಪ್ರದೇಶಗಳಲ್ಲಿ ನಿರಂತರ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದ್ದು, ರೈತರು ಹಾಗೂ ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತಿದೆ. ಬೀದಿದೀಪಗಳ ಕೊರತೆ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ನಿರಂತರವಾಗಿ ದೂರು ನೀಡುತ್ತಿದ್ದರೂ ಸಂಬಂಧಪಟ್ಟ ಇಲಾಖೆಯಿಂದ ಸಮರ್ಪಕ ಸ್ಪಂದನೆ ದೊರೆಯುತ್ತಿಲ್ಲ ಎಂದು ಮನವಿಯಲ್ಲಿ ಅಸಮಾಧಾನ ವ್ಯಕ್ತಪಡಿಸಲಾಗಿದೆ.ಗ್ರಾಮೀಣ ಭಾಗದ ಅಭಿವೃದ್ಧಿಗೆ ಸರ್ಕಾರ ವಿಶೇಷ ಗಮನಹರಿಸಬೇಕು. ರಸ್ತೆ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಭೆ ನಡೆಸಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಬಿಜೆಪಿ ಮನವಿ ಮೂಲಕ ಎಚ್ಚರಿಕೆ ನೀಡಿದೆ.
ರೂಪಾಲಿ ನಾಯ್ಕ ಶಾಸಕತ್ವದ ಅವಧಿಯ ಶಿಲಾನ್ಯಾಸ ಫಲಕ ತೆರವಿಗೆ ಆಕ್ರೋಶ
ಬಿಜೆಪಿ ಕಾರವಾರ ಗ್ರಾಮೀಣ ಮಂಡಲ ಅಧ್ಯಕ್ಷ ಸುಭಾಷ್ ಗುನಗಿ ಅವರು ಗುರುವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, 2018ರಿಂದ 2023ರ ಅವಧಿಯಲ್ಲಿ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಅವರು ಕ್ಷೇತ್ರದಲ್ಲಿ ಲೋಕೋಪಯೋಗಿ ಇಲಾಖೆ, ಕೆಆರ್‌ಐಡಿಎಲ್, ಪಿಎಂಜಿಎಸ್‌ವೈ, ನೀರಾವರಿ ಇಲಾಖೆ, ಪಿಆರ್‌ಇಡಿ ಹಾಗೂ ನಿರ್ಮಿತಿ ಕೇಂದ್ರ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ ಮೂಲಕ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದರು ಎಂದು ತಿಳಿಸಿದ್ದಾರೆ.
ತೆರವುಗೊಳಿಸಲಾದ ಶಿಲಾನ್ಯಾಸ ಫಲಕಗಳನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕೂಡಲೇ ಕಾಮಗಾರಿ ನಡೆದ ಸ್ಥಳಗಳಲ್ಲಿ ಮರುಸ್ಥಾಪಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಫಲಕಗಳನ್ನು ಮರಳಿ ಅಳವಡಿಸದಿದ್ದರೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಸಂಬಂಧಪಟ್ಟ ಇಲಾಖೆಯ ಕಚೇರಿ ಎದುರು ಧರಣಿ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದೆ.