ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ.ಎಸ್.ರಕ್ಷಾರಾಮಯ್ಯ ಬುಧವಾರ ನಾಮಪತ್ರ ಸಲ್ಲಿಸಲು ನಗರದಲ್ಲಿ ಏರ್ಪಡಿಸಿದ್ದ ಬೃಹತ್ ರೋಡ್ ಶೋ ನಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ್ಮ ತೆರಿಗೆ ಪಾಲನ್ನು ಕೊಡದೇ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತಳೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ ಬರೆದು, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಬರ ಪರಿಹಾರವಾಗಿ ಈವರೆಗೆ ಒಂದು ಪೈಸೆಯನ್ನೂ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಜ್ಯ ಸರ್ಕಾರದ ಸಾಧನೆಗಳು ಮತ್ತು ಗ್ಯಾರಂಟಿ ಯೋಜನೆಗಳಿಂದಾಗಿರುವ ಪ್ರಯೋಜನಗಳ ಬಗ್ಗೆ ತಿಳಿಸಿದರು. ಈ ಅಂಶಗಳನ್ನೇ ಮತದಾರರ ಮನೆ ಮನೆಗಳಿಗೆ ತಲುಪಿಸುವಂತೆ ಕಾರ್ಯಕರ್ತರು, ಮುಖಂಡರು ಹಾಗೂ ಜನಪ್ರತಿನಿಧಿಗಳಿಗೆ ಸೂಚಿಸಿದರು.ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ, ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವ ನೀಡಿದ ಭರವಸೆಗಳಂತೆ ಎಲ್ಲಾ ಐದು ಗ್ಯಾರಂಟಿಗಳನ್ನು ನೀಡಿ ನುಡಿದಂತೆ ನಡೆದಿದೆ. ರಾಜ್ಯದ ಏಳುವರೆ ಕೋಟಿ ಜನರಲ್ಲಿ ನಾಲ್ಕುವರೆ ಕೋಟಿ ಜನರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಬಡ ಮತ್ತು ಮಧ್ಯಮ ವರ್ಗದ ಜನರ ಬದುಕನ್ನು ಹಸನಾಗಿಸಲು ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು. ನಮ್ಮ ಕಾರ್ಯಕ್ರಮಗಳ ಮೂಲಕ ಜನಸಾಮಾನ್ಯರ ಜೇಬಿಗೆ ಹಣ ಹಾಕಿ, ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ. ಇದನ್ನು ವಿರೋಧಿಸುವ ಬಿಜೆಪಿಯ ಕಾರ್ಯಕರ್ತರು ಹಾಗೂ ಬೆಂಬಲಿಗರೂ ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ ಎಂದರು.
ನಗರದ ವಕ್ಕಲಿಗರ ಕಲ್ಯಾಣ ಮಂಟಪದಿಂದ ಅಂಬೆಡ್ಕರ್ ವೃತ್ತದವರೆಗೆ ಬೃಹತ್ ರೋಡ್ ಶೋ ನಡೆಸಿದರು.
ಅಭ್ಯರ್ಥಿ ಎಂ.ಎಸ್.ರಕ್ಷಾರಾಮಯ್ಯ ಮಾತನಾಡಿ, ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ಯುವಕರಿಗೆ ಅವಕಾಶ ಕೊಟ್ಟಿದ್ದು, ರಾಜ್ಯದಲ್ಲಿ 9 ಮಂದಿ ಯುವಕರಿಗೆ ಲೋಕಸಭೆಯ ಟಿಕೆಟ್ ನೀಡಿದೆ. ಸ್ಥಳೀಯವಾಗಿ ಯುವ ಕಾಂಗ್ರೆಸ್ ಹಾಗೂ ಎಲ್ಲಾ ಕಾಂಗ್ರೆಸ್ ಮುಖಂಡರಿಂದ ನನಗೆ ಸಾಕಷ್ಟು ಬೆಂಬಲ ಸಿಗುತ್ತಿದೆ. ಕ್ಷೇತ್ರದ ಜನತೆ ಈ ಭಾಗದಲ್ಲಿ ಅಧಿಕ ಮತಗಳನ್ನು ನೀಡಿ ನನಗೆ ಅವಕಾಶ ನೀಡಬೇಕೆಂದು ಮತದಾರರಲ್ಲಿ ಮನವಿ ಮಾಡಿಕೊಂಡರು. ಚಿಕ್ಕಬಳ್ಳಾಪುರ ಕ್ಷೇತ್ರ ಯಾವುದಕ್ಕೂ ಕಡಿಮೆಯಿಲ್ಲಾ. ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಸಾಕಷ್ಟು ಅಭಿವೃದ್ಧಿ ಮಾಡಬೇಕೆಂದು ಸ್ಥಳೀಯ ಸಚಿವರು, ಶಾಸಕರು ಮುಂದಾಗುತ್ತಿದ್ದಾರೆ. ಅದರಂತೆ ಮುಂದೆ ಶ್ರಮವಹಿಸಲಾಗುವುದು. ದೇಶದಲ್ಲಿ ಮತ್ತು ರಾಜ್ಯದಲ್ಲಿ ಶೇ 55 ರಿಂದ 60 ರಷ್ಟು ಯುವಕರಿದ್ದು, ಅವರನ್ನು ನಿರುದ್ಯೋಗ ಸಮಸ್ಯೆ ಕಾಡುತ್ತಿದೆ. ಭಾರತದಲ್ಲಿನ ನಿರುದ್ಯೋಗ ಸಮಸ್ಯೆ ಬಗ್ಗೆ ಆತಂಕ ಮೂಡಿಸುತ್ತಿದೆ. ಕ್ಷೇತ್ರದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೈಗಾರಿಕೆಗಳ ಸ್ಥಾಪನೆಗೆ ಒತ್ತು ನೀಡುತ್ತೇನೆ. ಆದ್ಧರಿಂದ ನಮಗೆ ಬರಬೇಕಾದ ಎಲ್ಲವನ್ನೂ ಪಡೆದುಕೊಳ್ಳಬೇಕಾದರೆ ಕಾಂಗ್ರೆಸ್ ಗೆ ಮತ ನೀಡಬೇಕೆಂದು ಮನವಿ ಮಾಡಿಕೊಂಡರು.