- ಮನರೇಗಾ ಯೋಜನೆಗೆ ತಿದ್ದುಪಡಿ, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ, ಪೂರ್ವಭಾವಿ ಸಭ
ಹಳ್ಳಿಗಳ ಜನರ ಜೀವನ ಮಟ್ಟ ಸುಧಾರಣೆಯಾಗಬೇಕು. ಸ್ಥಳೀಯವಾಗಿ ಎಲ್ಲಾ ಕಾಲದಲ್ಲೂ ಅವರಿಗೆ ಕೂಲಿ ಕೆಲಸ ಸಿಗಬೇಕೆಂಬ ಉದ್ದೇಶದಿಂದ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಮನರೇಗಾ ಯೋಜನೆಗೆ ತಿದ್ದುಪಡಿ ತರುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಕೂಲಿ ಕಾರ್ಮಿಕರಿಗೆ, ರೈತರಿಗೆ ಅನ್ಯಾಯ ಮಾಡಲು ಹೊರಟಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ ರದ್ದುಪಡಿಸಿ ಗ್ರಾಮ ಪಂಚಾಯಿತಿ ಅಧಿಕಾರವನ್ನು ಮೊಟಕುಗೊಳಿಸಲು ಹೊರಟಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ಕುರಿತು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ನಿಂದ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.ಮನರೇಗಾ ಯೋಜನೆಯಿಂದ ಗ್ರಾಮ ಪಂಚಾಯಿತಿಗಳು, ಗ್ರಾಮಗಳು ಅಭಿವೃದ್ಧಿ ಹೊಂದಿವೆ. ಪ್ರಧಾನಮಂತ್ರಿಗಳು ಬಿಡುಗಡೆ ಮಾಡುವ ಹಣ ನೇರವಾಗಿ ಗ್ರಾಮ ಪಂಚಾಯಿತಿಗಳಿಗೆ ಬರುತ್ತಿತ್ತು. ವಿಬಿ ಜಿ ರಾಮ್ ಜಿ ಯೋಜನೆಯಿಂದ ಗ್ರಾಮ ಪಂಚಾಯಿತಿಗಳು ತಮ್ಮ ಅಧಿಕಾರ ಕಳೆದುಕೊಳ್ಳಲಿವೆ ಎಂದರು.
ಮಹಾತ್ಮಗಾಂಧಿಯವರ ಕನಸು ನನಸು ಮಾಡಲು ಕಾಂಗ್ರೆಸ್ ಮುಂದಾಗಿದ್ದರೆ, ಕೇಂದ್ರ ಬಿಜೆಪಿ ಸರ್ಕಾರ ಮಹಾತ್ಮಗಾಂಧಿ ಅವರ ಕನಸಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಬಿಜೆಪಿಗೆ ಜನಸಾಮಾನ್ಯರು, ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಹೇಳಿದರು.
ಕಾಂಗ್ರೆಸ್ ಆಡಳಿತದಲ್ಲಿ ಉತ್ತಮ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಆ ಯೋಜನೆ ಮೊಟಕುಗೊಳಿಸುವ ಮೂಲಕ ಗ್ರಾಮೀಣ ಭಾಗದ ಜನರ ಕೆಲಸವನ್ನು ಕೇಂದ್ರ ಬಿಜೆಪಿ ಸರ್ಕಾರ ಕಿತ್ತುಕೊಳ್ಳಲು ಹೊರಟಿದೆ ಎಂದು ತಿಳಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪಗೌಡ ಮಾತನಾಡಿ, ಮನರೇಗಾ ಯೋಜನೆ ಹೆಸರನ್ನು ಬದಲಾಯಿಸುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ದಿಕ್ಕು ತಪ್ಪಿಸುವ ಕೆಲಸ ಮಾಡಲು ಹೊರಟಿದೆ. ಹೆಸರು ಬದಲಾಯಿಸುವುದೇ ಬಿಜೆಪಿ ಸರ್ಕಾರದ ಸಾಧನೆಯಾಗಿದೆ ಎಂದು ವ್ಯಂಗ್ಯವಾಡಿದರು.
ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಹಮದ್ ನಯಾಜ್, ಜಿಲ್ಲಾ ಕಾಂಗ್ರೆಸ್ ಎಸ್.ಸಿ ಘಟಕ ಜಿಲ್ಲಾಧ್ಯಕ್ಷ ಮಲ್ಲೇಶಸ್ವಾಮಿ ಮಾತನಾಡಿದರು. ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಪಿ.ಮಂಜೇಗೌಡ ಅಧ್ಯಕ್ಷತೆ ವಹಿಸಿದ್ದರು.