ಬಂಟ್ವಾಳ ತಾಲೂಕಿನಲ್ಲಿ ಡಿಸಿ ಹೆದ್ದಾರಿ ಕಾಮಗಾರಿ ಪರಿಶೀಲನೆ

KannadaprabhaNewsNetwork |  
Published : Feb 08, 2024, 01:34 AM IST
ಚತುಷ್ಪಥ ಹೆದ್ದಾರಿ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಭೇಟಿ | Kannada Prabha

ಸಾರಾಂಶ

ಬಿ.ಸಿ. ರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿ ವೀಕ್ಷಣೆ ನಡೆಸಿದ ಬಳಿಕ ಮೆಲ್ಕಾರ್, ಕಲ್ಲಡ್ಕ, ಮಾಣಿ ಮತ್ತು ಉಪ್ಪಿನಂಗಡಿ ಭಾಗದತ್ತ ಜಿಲ್ಲಾಧಿಕಾರಿ ತೆರಳಿ ಕಾಮಗಾರಿ ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಬಂಟ್ವಾಳ ಬಿ.ಸಿ. ರೋಡ್‌ನಿಂದ ಅಡ್ಡಹೊಳೆವರೆಗೆ ನಡೆಯುತ್ತಿರುವ ಚತುಷ್ಪಥ ಹೆದ್ದಾರಿ ಕಾಮಗಾರಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಬುಧವಾರ ವೀಕ್ಷಿಸಿದರು. ಈ ಸಂದರ್ಭ ಸಾಕಷ್ಟು ಕಡೆಗಳಲ್ಲಿ ಸಾರ್ವಜನಿಕರು ತಮ್ಮ ಅಹವಾಲು ಮಂಡಿಸಿದರು. ಬಿ.ಸಿ.ರೋಡ್‌ನಿಂದ ಗುಂಡ್ಯದವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಭಾಗದಲ್ಲಿ ಆಗುತ್ತಿರುವ ಕಾಮಗಾರಿಗಳನ್ನು ಜಿಲ್ಲಾಧಿಕಾರಿ ಪರಿಶೀಲಿಸಿದ್ದು, ಬಿ.ಸಿ. ರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿ ವೀಕ್ಷಣೆ ನಡೆಸಿದ ಬಳಿಕ ಮೆಲ್ಕಾರ್, ಕಲ್ಲಡ್ಕ, ಮಾಣಿ ಮತ್ತು ಉಪ್ಪಿನಂಗಡಿ ಭಾಗದತ್ತ ಜಿಲ್ಲಾಧಿಕಾರಿ ತೆರಳಿ ಕಾಮಗಾರಿ ಪರಿಶೀಲಿಸಿದರು. ಮೆಲ್ಕಾರ್‌ನಲ್ಲಿ ಗುಡ್ಡವನ್ನು ಅಗೆದ ಪರಿಣಾಮವಾಗಿ ಕೆಲವೊಂದು ಮನೆಗಳಿಗೆ ಹಾನಿಯಾಗುವ ಸಂಭವವು ಇರುವ ಬಗ್ಗೆ ಮತ್ತು ಕೆಲವು ಮನೆಗಳಿಗೆ ಸಂಪರ್ಕ ರಸ್ತೆ ಕಡಿತಗೊಂಡ ಹಿನ್ನೆಲೆಯಲ್ಲಿ ಅವರಿಗೆ ಸೂಕ್ತವಾದ ಬದಲಿ ವ್ಯವಸ್ಥೆ ಮಾಡಿಕೊಡುವ ಬಗ್ಗೆ ಚಿಂತನೆ ನಡೆಸುವ ಕುರಿತು ವಿಷಯ ಪ್ರಸ್ತಾಪ ಮಾಡಲಾಯಿತು. ಈ ಸಂದರ್ಭ, ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದರು. ಕಲ್ಲಡ್ಕದಲ್ಲಿ ರಸ್ತೆ ಕಾಮಗಾರಿಯ ವೇಳೆ ದೂಳಿನ ಸಮಸ್ಯೆ ಉಂಟಾಗುತ್ತಿದ್ದು, ಸರಿಯಾಗಿ ನೀರು ಹಾಕುತ್ತಿಲ್ಲ ಎಂಬ ಬಗ್ಗೆ ಸಾರ್ವಜನಿಕರು ಗಮನ ಸೆಳೆದರು. ಈ ಸಂದರ್ಭದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು, ಇನ್ನು ಮುಂದೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ದೂರುಗಳು ಬರದ ರೀತಿಯಲ್ಲಿ ಸ್ಥಳೀಯ ಗ್ರಾ.ಪಂ. ರಸ್ತೆಗೆ ನೀರು ಹಾಕುವ ಜವಾಬ್ದಾರಿ ವಹಿಸಬೇಕು ಎಂದು ತಹಸೀಲ್ದಾ‌ರ್‌ಗೆ ತಿಳಿಸಿದರು. ಧೂಳಿನ ಸಮಸ್ಯೆಯಿಂದಾಗಿ ಕಲ್ಲಡ್ಕ ಪರಿಸರದಲ್ಲಿ ಆರೋಗ್ಯ ಸಮಸ್ಯೆ ಉದ್ಭವಿಸಿರುವ ಕುರಿತು ಸಾರ್ವಜನಿಕರು ಗಮನಕ್ಕೆ ತಂದರು. ಕೆಲವು ಕಡೆಗಳಲ್ಲಿ ರಸ್ತೆ ಕಾಮಗಾರಿ ವೇಳೆ ಕುಡಿಯುವ ನೀರಿನ ಪೈಪ್‌ಗಳನ್ನು ತುಂಡರಿಸಲಾಗಿದ್ದು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿದೆ, ಅಂತಹ ಕಡೆಗಳಲ್ಲಿ ಹೊಸ ಪೈಪ್‌ಲೈನ್ ಅಳವಡಿಸಿ ಕುಡಿಯುವ ನೀರಿಗೆ ಯಾವುದೇ ಕುಂದುಬರದಂತೆ ನೋಡಿಕೊಳ್ಳಿ ಎಂದು ತಿಳಿಸಿದ್ದಾರೆ. ಬಂಟ್ವಾಳ ತಹಸೀಲ್ದಾ‌ರ್ ಅರ್ಚನಾ ಭಟ್, ಬಂಟ್ವಾಳ ನಗರ ಪೋಲೀಸ್ ಠಾಣಾ ಇನ್ಸ್‌ಪೆಕ್ಟರ್ ಅನಂತ ಪದ್ಮನಾಭ, ಟ್ರಾಫಿಕ್ ಎಸ್.ಐ. ಸಂಜೀವ, ಕಂದಾಯ ನಿರೀಕ್ಷಕರಾದ ವಿಜಯ್ ಮತ್ತು ಜನಾರ್ದನ ಹಾಗೂ ಗ್ರಾಮ ಕರಣಿಕ ನಾಗರಾಜ್ ಮತ್ತಿತರರು ಇದ್ದರು.

PREV

Recommended Stories

ಟಿಕೆಟ್ ಆಯ್ತು, ಮಲ್ಟಿಪ್ಲೆಕ್ಸ್‌ಗಳಲ್ಲಿ ತಿಂಡಿ ದರ ಇಳಿಸಿ : ಸಿನಿ ಪ್ರಿಯರು
ಮಂಗಳಮುಖಿಯರು, ಮಹಿಳೆಯರಿಗೆ ಸರ್ಕಾರದಿಂದಲೇ ಉಚಿತ ಆಟೋ