ಕಾರವಾರ: ಜಿಲ್ಲೆಯಲ್ಲಿರುವ ಎಲ್ಲ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ನಿಯಮಿತವಾಗಿ ತಪಾಸಣೆ ಮಾಡುವ ಮೂಲಕ ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಕಾಯ್ದೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲೆಯ ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಪತ್ತೆ ಯಂತ್ರ ವಿಧಾನಗಳ ನಿಷೇಧ ಅಧಿನಿಯಮ ಸಕ್ಷಮ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸ್ತುತ ಜಿಲ್ಲೆಯಲ್ಲಿ ಪಿಸಿ ಆ್ಯಂಡ್ ಪಿಎನ್‌ಡಿಟಿ ಕಾಯ್ದೆಯಡಿ ನೋಂದಣಿಯಾಗಿ ಕಾರ್ಯನಿರ್ವಹಿಸುತ್ತಿರುವ 71 ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿಯ ಸದಸ್ಯರು ತಪಾಸಣೆ ನಡೆಸಬೇಕು. ಈ ಸೆಂಟರ್‌ಗಳಲ್ಲಿ ಕಾನೂನು ರೀತ್ಯಾ ನಿರ್ವಹಿಸಬೇಕಾದ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ ದಾಖಲಾತಿಗಳನ್ನು ಸಮರ್ಪಕವಾಗಿ ನಿರ್ವಹಿಸುತ್ತಿರುವ ಬಗ್ಗೆ ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ನಿಷೇಧ ಕುರಿತ ಜಾಗೃತಿ ಫಲಕಗಳನ್ನು ಅಳವಡಿಸಿರುವ ಬಗ್ಗೆ ಸಮಗ್ರ ತಪಾಸಣೆ ಕೈಗೊಳ್ಳುವಂತೆ ತಿಳಿಸಿದರು.ಜಿಲ್ಲೆಯ ತಾಲೂಕುಗಳ ಸರ್ಕಾರಿ ಆಸ್ಪತ್ರೆಗಳಲ್ಲಿರುವ ಸ್ಕ್ಯಾನಿಂಗ್ ಯಂತ್ರಗಳನ್ನು ಸೂಕ್ತ ರೀತಿಯಲ್ಲಿ ಬಳಕೆ ಮತ್ತು ನಿರ್ವಹಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಇವುಗಳ ಸೇವೆಯು ಸಮರ್ಪಕವಾಗಿ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀರಜ್ ಬಿ.ವಿ., ಜಿಲ್ಲಾ ಸರ್ಜನ್ ಡಾ. ಶಿವಾನಂದಕುಡ್ತರಕರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಅನ್ನಪೂರ್ಣಾ ವಸ್ತ್ರದ್, ವಾರ್ತಾಧಿಕಾರಿ ಬಿ. ಶಿವಕುಮಾರ್, ಮಕ್ಕಳ ತಜ್ಞ ಡಾ. ವಿಶ್ವನಾಥ್ ಮಾಚಕನೂರ, ರೇಡಿಯಾಲಜಿಸ್ಟ್ ಡಾ. ಯುವರಾಜ ಪಟವರ್ಧನ್, ವಕೀಲ ಮಾರುತಿ ಮರಜ್ಜ, ಸಾಂತ್ವನ ಜನಸೇವಾ ಕೇಂದ್ರದ ಶ್ರೀಕಾಂತ ಮಹಾದೇವ ನಾಯ್ಕ ಇದ್ದರು.ಜೋಯಿಡಾದಲ್ಲಿ ಸುವರ್ಣ ರಥಕ್ಕೆ ಸ್ವಾಗತ
ಜೋಯಿಡಾ: ಗುರುವಾರ ಪಟ್ಟಣಕ್ಕೆ ಆಗಮಿಸಿದ ಸುವರ್ಣ ಕರ್ನಾಟಕ ಜ್ಯೋತಿ ರಥಯಾತ್ರೆಯ ರಥಕ್ಕೆ ತಾಲೂಕಿನಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ತಹಸೀಲ್ದಾರ್ ಮಂಜುನಾಥ ಮುನ್ನೋಳ್ಳಿ ಹಿಂದೆ ನಮ್ಮ ರಾಜ್ಯಕ್ಕೆ ಮೈಸೂರು ರಾಜ್ಯ ಎಂಬ ಹೆಸರಿತ್ತು. 50 ವರ್ಷಗಳ ಹಿಂದೆ ಆಗಿನ ಸರ್ಕಾರ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದರು. ಈ 50 ವರ್ಷಗಳ ಸಂಭ್ರಮವನ್ನು ನಾವಿಂದು ಆಚರಿಸುತ್ತಿದ್ದೇವೆ. ರಾಜ್ಯದಲ್ಲಿ ಕನ್ನಡ ನಮ್ಮೆಲ್ಲರ ಉಸಿರಾಗಿರಲಿ. ನೆಲ, ಜಲ, ಭಾಷೆ ಪ್ರೀತಿಸೋಣ ಎಂದರು.ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪಾಂಡುರಂಗ ಪಟಗಾರ ಮಾತನಾಡಿದರು. ಎಲ್ಲ ಇಲಾಖೆಯ ಅಧಿಕಾರಿಗಳ ಪರವಾಗಿ ಭುವನೇಶ್ವರಿಗೆ ಪುಷ್ಪಾರ್ಚನೆ ನಡೆದ ನಂತರ ತಹಸೀಲ್ದಾರರು ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಎಕ್ಕಳ್ಳಿಕರ, ಪಿಎಸ್ಐ ಮಹೇಶ ಮಾಳಿ ಸೇರಿದಂತೆ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ರಥಯಾತ್ರೆಯಲ್ಲಿ ಪಾಲ್ಗೊಂಡಿದ್ದರು.