ಬಳ್ಳಾರಿ: ರಾಜ್ಯ ಸರ್ಕಾರದ ಆದೇಶದಂತೆ ನಗರದ ಅಂಗಡಿ ಮುಂಗಟ್ಟುಗಳು, ವ್ಯಾಪಾರ ವಾಣಿಜ್ಯ ಸಂಸ್ಥೆಗಳು ಕನ್ನಡ ನಾಮಫಲಕಗಳನ್ನು ಅಳವಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದಲ್ಲಿ ಜನಜಾಗೃತಿ ಆಂದೋಲನ ಹಮ್ಮಿಕೊಂಡಿದ್ದರು.
ಇದೇ ವೇಳೆ ನಾಮಫಲಕದಲ್ಲಿ ಶೇ. 60ರಷ್ಟು ಕನ್ನಡ ಇರದ ಅಂಗಡಿ ಮಾಲೀಕರನ್ನು ತರಾಟೆಗೆ ತೆಗೆದುಕೊಂಡರಲ್ಲದೆ, ಒಂದು ವಾರದೊಳಗೆ ಫಲಕ ಬದಲಾಯಿಸದೇ ಹೋದಲ್ಲಿ ನಾವೇ ಕಿತ್ತು ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಕೆಲವೆಡೆ ಇಂಗ್ಲಿಷ್ ನಾಮಫಲಕಗಳಿಗೆ ಕರವೇ ಕಾರ್ಯಕರ್ತರು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕರು ಹಾಗೂ ಕರವೇ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಪೊಲೀಸರು ಮಧ್ಯಪ್ರವೇಶಿಸಿ ತಿಳಿಗೊಳಿಸಿದರು.ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರವೇ ಜಿಲ್ಲಾಧ್ಯಕ್ಷ ಅಂಗಡಿ ಶಂಕರ್ ಡಿ. ಕಗ್ಗಲ್, ಯಾವುದೇ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಇರಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ಆದಾಗ್ಯೂ ನಗರದ ಬಹುತೇಕ ವ್ಯಾಪಾರಿಗಳು ಸರ್ಕಾರದ ಆದೇಶ ಪಾಲಿಸುತ್ತಿಲ್ಲ. ಗಡಿನಾಡು ಬಳ್ಳಾರಿಯಲ್ಲಿ ಕನ್ನಡ ಅನುಷ್ಠಾನ ಅಗತ್ಯವಿದ್ದು, ಈ ದಿಸೆಯಲ್ಲಿ ಸರ್ಕಾರದ ಆದೇಶ ಪಾಲನೆ ಮಾಡಬೇಕು ಎಂದು ಎಲ್ಲರಿಗೂ ಮನವಿ ಮಾಡಿಕೊಳ್ಳುತ್ತಿದ್ದೇವೆ. ನಾಮಫಲಕಗಳನ್ನು ಬದಲಾಯಿಸಲು ಒಂದು ವಾರದ ಗಡವು ನೀಡಿದ್ದು, ಒಂದು ವೇಳೆ ಬದಲಾಯಿಸದೇ ಹೋದರೆ ಮುಂದಿನ ಹಂತದ ಕೆಲಸವನ್ನು ನಾವೇ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.