1783 ಕಡೆ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ

KannadaprabhaNewsNetwork |  
Published : Sep 11, 2026, 01:15 AM IST
ಚಿತ್ರದುರ್ಗ ಎರಡನೇ ಪುಟದ ಲೀಡ್ | Kannada Prabha

ಸಾರಾಂಶ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಗಣೇಶೋತ್ಸವದ ಪೂರ್ವ ಸಿದ್ದತಾ ಸಭೆಯಲ್ಲಿ ಜಿಲ್ಲಾಧಿಕಾರಿ ರಮ್ಯ ಮಾತನಾಡಿದರು.

3ನೇ ದಿನ 927, 5ನೇ ದಿನ 453 ಗಣಪತಿ ಮೂರ್ತಿಗಳ ವಿಸರ್ಜನೆ । ಮಾರ್ಗ ಸೂಚಿ ಪ್ರಕಟ

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಚಿತ್ರದುರ್ಗ ಜಿಲ್ಲೆಯ ಒಟ್ಟು ಒಟ್ಟು 1,783 ಕಡೆ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. 3ನೇ ದಿನದಂದು ಸುಮಾರು 927, 5ನೇ ದಿನದಂದು 453 ಗಣಪತಿ ಮೂರ್ತಿಗಳ ವಿಸರ್ಜನೆ ಮೆರವಣಿಗೆಗಳು ನಡೆಯಲಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಂಬರುವ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು ಆಚರಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾದ್ಯಂತ ಗಣೇಶೋತ್ಸವವನ್ನು ಶಾಂತಿಯುತ ಹಾಗೂ ಸುಸೂತ್ರವಾಗಿ ನೆರವೇರಿಸಲು ಪೋಲೀಸ್ ಇಲಾಖೆಯಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮ ಮತ್ತು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ನಗರದ ಹಿಂದೂ ಮಹಾಗಣಪತಿ ಅತಿ ದೊಡ್ಡ ಹಾಗೂ ಅತಿ ಸೂಕ್ಷ್ಮ ಮೆರವಣಿಗೆಯಾಗಿದ್ದು, ಶೋಭಾಯಾತ್ರೆ ಅಕ್ಟೋಬರ್ 3 ರಂದು ನಿಗದಿಯಾಗಿದೆ. ಸುಮಾರು 3.5 ಲಕ್ಷಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇದು ರಾಜ್ಯದಲ್ಲೇ ಅತಿ ದೊಡ್ಡ ಹಾಗೂ ದೇಶದಲ್ಲೇ ಎರಡನೇ ಜನಸಂದಣಿಯ ಮೆರವಣಿಯಾಗಿದೆ. ಇದರ ಜೊತೆಗೆ ಜಿಲ್ಲೆಯ 6 ಕಡೆ ಹಿಂದು ಮಹಾಗಣಪತಿ ವಿಸರ್ಜನೆ ಮೆರವಣಿಗೆ ನಡೆಯಲಿದೆ. 5000 ಕ್ಕೂ ಹೆಚ್ಚು ಜನ ಸೇರುವ ಎಲ್ಲಾ ಮೆರವಣಿಗೆಗಳನ್ನೂ ಸೂಕ್ಷ್ಮ ಎಂದು ಪರಿಗಣಿಸಿ ಸೂಕ್ತ ಬಂದೋಬಸ್ತ್ ಯೋಜನೆ ರೂಪಿಸಲಾಗಿದೆ ಎಂದರ.

ಹಿಂದೂ ಮಹಾಗಣಪತಿ ಶೋಭಾ ಯಾತ್ರ ನಗರದ ಮರುಘರಾಜೇಂದ್ರ ಕ್ರೀಡಾಂಗಣದಿಂದ ಪ್ರಾರಂಭಗೊಂಡು ಪ್ರಮುಖ ರಸ್ತೆಗಳಲ್ಲಿ ಸಾಗಲಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸಲಾಗಿದ್ದು, ಮದಕರಿ ಹಾಗೂ ಗಾಂಧಿ ವೃತ್ತದಂತಹ ಪ್ರಮುಖ ಜಂಕ್ಷನ್‍ಗಳಲ್ಲಿ ಹೆಚ್ಚಿನ ಭದ್ರತೆ ನಿಯೋಜಿಸಲಾಗುವುದು. ಮೆರವಣಿಗೆ ಸಾಗುವ ಮಾರ್ಗದಲ್ಲಿರುವ ಮಸೀದಿಗಳ ಮುಂಭಾಗ ಸೂಕ್ತ ಭದ್ರತಾ ಹಾಗೂ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ.. ಹಿಂದೂ ಮಹಾಗಣಪತಿ ಶೋಭಾಯಾತ್ರೆಯನ್ನು ವಿಪತ್ತು ನಿರ್ವಹಣೆ ಮಾದರಿಯಲ್ಲಿ ಕೈಗೊಳ್ಳಲು ಅನುಮತಿ ಕೋರಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಪತ್ರ ಬರೆಯುವುದಾಗಿ ಎಸ್ಪಿ ರಂಜಿತ್ ಕುಮಾರ್ ಬಂಡಾರು ತಿಳಿಸಿದರು.

ಜನಸಂದಣಿ ಹಾಗೂ ಕಾಲ್ತುಳಿತ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ನೂತನ ಪ್ರಮಾಣಿತ ಕಾರ್ಯಾಚರಣೆ ವಿಧಾನ ಮತ್ತು ಮಾರ್ಗಸೂಚಿಗಳನ್ನು ಹೊರಡಿಸಿದೆ. ಗಣೇಶೋತ್ಸವ ಹಾಗೂ ಶೋಭಾಯಾತ್ರೆ ಆಯೋಜಕರು ಕಡ್ಡಾಯವಾಗಿ ಪಾಲನೆ ಮಾಡಬೇಕು. ಸಂಬಂಧ ಪಟ್ಟ ಎಲ್ಲಾ ಇಲಾಖೆಗಳಿಂದ ಅನುಮತಿ ಪಡೆಯಬೇಕು.

ಆಯೋಜಕರು ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ಜಿಲ್ಲಾಧಿಕಾರಿ ಎಸ್.ರಮ್ಯ ಮಾತನಾಡಿ, ಜನರ ಜೀವ ಮತ್ತು ಆಸ್ತಿಪಾಸ್ತಿಯ ರಕ್ಷಣೆಯು ಅತ್ಯಂತ ಸೂಕ್ಷ್ಮ ಹಾಗೂ ಪ್ರಮುಖ ಜವಾಬ್ದಾರಿಯಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮಗಳ ಯಶಸ್ಸಿಗೆ ಗಂಭೀರವಾಗಿ ಶ್ರಮಿಸಬೇಕು. ಸಣ್ಣ ಪುಟ್ಟ ಲೋಪದೋಷಗಳಿಗೂ ಆಸ್ಪದ ನೀಡದೆ ಪರಿಶೀಲನಾ ಪಟ್ಟಿ ಆಧಾರದಲ್ಲಿ ಸಿದ್ಧತೆಗಳನ್ನು ಪರಿಶೀಲಿಸಬೇಕು. ಗಣೇಶ ವಿಸರ್ಜನೆ ಹಾಗೂ ಹಬ್ಬದ ಆಚರಣೆಗಳು ಪೂರ್ಣಗೊಳ್ಳುವವರೆಗೆ ನಗರಸಭೆ ಕಮಿಷನರ್, ತಹಶೀಲ್ದಾರ್, ಎಸಿ, ವೈದ್ಯಾಧಿಕಾರಿಗಳು ಸೇರಿದಂತೆ ಯಾವುದೇ ಅಧಿಕಾರಿಗಳು ಕೇಂದ್ರಸ್ಥಾನ ಬಿಡುವಂತಿಲ್ಲ. ತುರ್ತು ಸಂದರ್ಭ ಎದುರಾದರೆ ನೇರವಾಗಿ ಜಿಲ್ಲಾಧಿಕಾರಿಗಳಿಂದಲೇ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂದು ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿಕುಮಾರಸ್ವಾಮಿ ಮಾತನಾಡಿ,ಬ್ಯಾನರ್ ಹಾಗೂ ಫ್ಲೆಕ್ಸ್ ಅಳವಡಿಕೆಗೆ ಅನುಮತಿ ನೀಡುವಾಗ ‘ಎಲ್ಲಿ ಅಳವಡಿಸಬೇಕು, ಎಷ್ಟು ಪ್ರಮಾಣದಲ್ಲಿರಬೇಕು ಹಾಗೂ ಎಷ್ಟು ದಿನಗಳ ಕಾಲ ಇರಬೇಕು'''''''' ಎಂಬುದರ ಕುರಿತು ಸ್ಪಷ್ಟ ಮತ್ತು ಕಟ್ಟುನಿಟ್ಟಾದ ಆದೇಶ ಹೊರಡಿಸಬೇಕು. ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳು, ಸರ್ಕಾರಿ ಕಚೇರಿಗಳ ಆವರಣ ಹಾಗೂ ಗೊಂದಲಗಳಿಗೆ ಕಾರಣವಾಗುವ ಸ್ಥಳಗಳಲ್ಲಿ ಫ್ಲೆಕ್ಸ್ ಅಳವಡಿಸುವುದನ್ನು ನಿಯಂತ್ರಿಸಬೇಕು ಎಂದರು.

ಉಪವಿಭಾಗಾಧಿಕಾರಿ ಡಾ.ಕಾಂತರಾಜ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಂ.ಸಿ.ಸುನೀಲ್ ಕುಮಾರ್, ನಗರಸಭೆ ಆಯುಕ್ತೆ ಲಕ್ಷ್ಮಿ, ಪರಿಸರಾಧಿಕಾರಿ ಪಲ್ಲವಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಚ್ಚಪ್ಪ ಜಮಾದಾರ ನಿಂದನೆ ಖಂಡಿಸಿ ಪ್ರತಿಭಟನೆ
ಭವಿಷ್ಯದ ಸವಾಲುಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಿ: ಸಂಸದ ರಾಧಾಕೃಷ್ಣ ದೊಡ್ಡಮನಿ