ಕನ್ನಡಪ್ರಭವಾರ್ತೆ ಚಾಮರಾಜನಗರ
ಸಭೆಯ ಆರಂಭದಲ್ಲಿ ಜಿಲ್ಲಾ ಚುನಾವಣಾಧಿಕಾರಿದ ಶಿಲ್ಪಾನಾಗ್ ಲೋಕಸಭಾ ಸಾರ್ವತ್ರಿಕ ಚುನಾವಣೆ ಪೂರ್ವ ಸಿದ್ಧತೆಗಳ ಬಗ್ಗೆ ಸಾಮಾನ್ಯ ವೀಕ್ಷಕರಿಗೆ ಸಂಕ್ಷಿಪ್ತ ಮಾಹಿತಿ ನೀಡಿದರು. ಜಿಲ್ಲೆಯ ಭೌಗೋಳಿಕ ಪ್ರದೇಶ, ಕ್ಷೇತ್ರಕ್ಕೆ ಒಳಪಡುವ ವಿಧಾನಸಭೆಗಳ ಕ್ಷೇತ್ರವಾರು ಮಾಹಿತಿ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ಜನಸಂಖ್ಯೆ, ಸಾಕ್ಷರತಾ ಪ್ರಮಾಣ, ಗ್ರಾಮಗಳು, ಗ್ರಾಪಂ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳು, ಮತಗಟ್ಟೆಗಳ, ಮತದಾರರ ಸಂಖ್ಯೆ, ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು, ಬಿ.ಎಲ್.ಒ. ಇತ್ಯಾದಿಗಳ ಕುರಿತು ಪ್ರಮುಖ ಅಂಕಿ ಅಂಶಗಳನ್ನು ಪವರ್ ಪಾಯಿಂಟ್ ಮೂಲಕ ವಿವರಿಸಿದರು.
ಲೋಕಸಭಾ ಕ್ಷೇತ್ರವ್ಯಾಪ್ತಿಯ ಮಾಹಿತಿ ಪಡೆದು ಬಳಿಕ ಮಾತನಾಡಿದ ಸಾಮಾನ್ಯ ವೀಕ್ಷಕರಾದ ಪಾರ್ಥ ಗುಪ್ತ ಅವರು ಮತದಾನಕ್ಕೆ ಇನ್ನು ಕೇವಲ 10 ದಿನಗಳು ಮಾತ್ರ ಬಾಕಿ ಇದ್ದು, ಈ ಅವಧಿಯಲ್ಲಿ ಚುನಾವಣಾ ಪ್ರಕ್ರಿಯೆಯ ಸಿದ್ದತೆಗಳ ಕೆಲಸ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಿ ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಚುನಾವಣೆಗೂ ಮುನ್ನ ಯಾವುದೇ ಗೊಂದಲಗಳಿಗೂ ಅವಕಾಶವಾಗದಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಪೋಲಿಸ್ ವರಿಷ್ಠಾಧಿಕಾರಿಗಳ ಸಲಹೆ, ಮಾರ್ಗದರ್ಶನದೊಂದಿಗೆ ಅಧಿಕಾರಿಗಳು ಚುನಾವಣೆ ಸಿದ್ದರಾಗಬೇಕಿದೆ ಎಂದರು.ಚುನಾವಣೆಗೆ ನಿಯೋಜಿತರಾಗಿರುವ ಎಲ್ಲಾ ಅಧಿಕಾರಿಗಳು ಚುನಾವಣೆಯ ಪ್ರಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಅಧಿಕಾರಿಗಳು ಒಂದು ತಂಡವಾಗಿ ಕೆಲಸ ಮಾಡಬೇಕು. ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಭಾರತ ಚುನಾವಣಾ ಆಯೋಗದ ನಿರ್ದೇಶನಗಳನ್ನು ಪಾಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಮತಗಟ್ಟೆಗಳ ಸ್ಥಳ ಹಾಗೂ ಸಂಖ್ಯೆಗನುಗುಣವಾಗಿ ಸಾರಿಗೆ ಸಂಪರ್ಕ, ಮೂಲಭೂತ ಸೌಕರ್ಯಗಳು ಸಮರ್ಪಕವಾಗಿರಬೇಕು. ವಲ್ನರಬಲ್ ಹಾಗೂ ಕ್ರಿಟಿಕಲ್ ಮತಗಟ್ಟೆಗಳ ಮಾಹಿತಿ ಸಂಗ್ರಹಿಸಿ ಮತಗಟ್ಟೆಗಳಲ್ಲಿ ಮತದಾರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆಗಳನ್ನು ಮಾಡಿಕೊಡಬೇಕು. ಒಂದು ಕಟ್ಟಡ ಅಥವಾ ಒಂದು ಸ್ಥಳದಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾಪಿಸಿರುವ ಮತಗಟ್ಟೆಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಬೇಕು. ಮತದಾನ ಕೇಂದ್ರವು 2 ಕಿ.ಮೀ ಒಳಗೆ ಇರುವಂತೆ ಪರಿಶೀಲಿಸಿ ಖಚಿತಪಡಿಸಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮತದಾನ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿರುವ ಹಾಗೂ ಕಟ್ಟಡ ಸುಸ್ತಿತಿಯಲ್ಲಿರುವ ಕುರಿತು ಸ್ಥಳ ಪರಿಶೀಲನೆ ನಡೆಸಬೇಕು. ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 353 ಮತಗಟ್ಟೆಗಳನ್ನು ಕ್ರಿಟಿಕಲ್ ಮತಗಟ್ಟೆ ಎಂದು ಗುರುತಿಸಿದ್ದು ಸದರಿ ಮತಗಟ್ಟೆಗಳಿಗೆ ವೈಯಕ್ತಿಕವಾಗಿ ಭೇಟಿ ಮಾಡಿ ಸದರಿ ಮತಗಟ್ಟೆ ವ್ಯಾಪ್ತಿಯ ಮತದಾರರಿಗೆ ಧೈರ್ಯ ಹಾಗೂ ಭದ್ರತೆ ಒದಗಿಸುವ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಡಬೇಕು ಎಂದು ತಿಳಿಸಿದರು.
ಎಡಿಸಿ ಗೀತಾ ಹುಡೇದ್, ಎಸ್ಪಿ ಪದ್ಮಿನಿ ಸಾಹು, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಹಾಗೂ ಜಿಪಂ ಉಪ ಕಾರ್ಯದರ್ಶಿ ಪಿ ಲಕ್ಷ್ಮ, ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು, ನೋಡೆಲ್ ಅಧಿಕಾರಿಗಳು, ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.