ಹಾವೇರಿ: ಜಿಲ್ಲೆಯಲ್ಲಿ ನಡೆಯಲಿರುವ ಗ್ರಾಮ ಆಡಳಿತ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಸಂಬಂಧಿಸಿದ ಅಧಿಕಾರಿಗಳು ಎಚ್ಚರಿಕೆಯಿಂದ ಹಾಗೂ ನಿಷ್ಠೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಎಲ್. ನಾಗರಾಜ ಹೇಳಿದರು.
ಜಿಲ್ಲಾಧಿಕಾರಿ ಕಾರ್ಯಾಲಯದ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅ. ೨೬ರಂದು ಜಿಲ್ಲೆಯ ೪ ಕೇಂದ್ರಗಳಲ್ಲಿ ಹಾಗೂ ಅ. ೨೭ರಂದು ೩೪ ಪರೀಕ್ಷಾ ಪರೀಕ್ಷೆ ನಡೆಲಿದ್ದು, ಪರೀಕ್ಷಾ ಕೇಂದ್ರಗಳನ್ನು ವ್ಯವಸ್ಥಿತವಾಗಿ ಸಜ್ಜುಗೊಳಿಸಬೇಕು. ಪರೀಕ್ಷಾ ಕೇಂದ್ರದ ಸುತ್ತಮುತ್ತ ಇರುವ ಅಂಗಡಿಗಳಲ್ಲಿ ಪರೀಕ್ಷಾ ಅವ್ಯವಹಾರಗಳು ಕಂಡುಬಂದಲ್ಲಿ ಅದನ್ನು ತಡೆಗಟ್ಟಲು ಕ್ರಮ ವಹಿಸಬೇಕು ಎಂದರು.ಪರೀಕ್ಷಾ ಕೇಂದ್ರದ ಒಳಗಡೆ ಸಕಲ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ಪರೀಕ್ಷಾ ಕೊಠಡಿ, ಶೌಚಾಲಯಗಳ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯಾಗಬೇಕು. ಪರೀಕ್ಷಾ ಕೊಠಡಿಗಳನ್ನು ಸ್ವಚ್ಛತೆಯಿಂದ ಇಟ್ಟುಕೊಳ್ಳಬೇಕು. ಕೊಠಡಿಯಲ್ಲಿ ಗಡಿಯಾರ ಇರುವ ಹಾಗೆ ನೋಡಿಕೊಳ್ಳಬೇಕು. ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅನುಕೂಲವಾಗುವ ನಿಟ್ಟಿನಲ್ಲಿ ಮಾರ್ಗದರ್ಶನ ಬೋರ್ಡ್‌ಗಳನ್ನು ಇಡಬೇಕು. ಪರೀಕ್ಷಾ ಕರ್ತವ್ಯಕ್ಕೆ ನೇಮಕವಾದ ಸಿಬ್ಬಂದಿಗೆ ನೀಡಲಾಗಿರುವ ಗುರುತಿನ ಚೀಟಿಗಳನ್ನು ಕಡ್ಡಾಯವಾಗಿ ಧರಿಸಬೇಕು. ಮುಖ್ಯವಾಗಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳ ಸಂಬಂಧಿಕರು ಇರದ ಹಾಗೆ ಗಮನ ಹರಿಸಬೇಕು ಎಂದು ಹೇಳಿದರು.
ಪರೀಕ್ಷೆಗಳು ಆರಂಭಕ್ಕೂ ಮೊದಲು ಪ್ರಶ್ನೆಪತ್ರಿಕೆ ಹಾಗೂ ಒಎಂಆರ್‌ಗಳನ್ನು ನೀಟಾಗಿ ಇಟ್ಟುಕೊಂಡು ನಿಗದಿ ಪಡಿಸಿದ ಸಮಯದಲ್ಲಿ ಪರೀಕ್ಷಾರ್ಥಿಗಳಿಗೆ ತೋರಿಸಿ ಅವರ ಸಮ್ಮುಖದಲ್ಲಿ ಪ್ರಶ್ನೆಪತ್ರಿಕೆಗಳನ್ನು ತೆರೆದು ಹಂಚಿಕೆ ಮಾಡಬೇಕು ಎಂದರು.ಮೊಬೈಲ್ ಫೋನ್ ಹಾಗೂ ಇಲೆಕ್ಟ್ರಾನಿಕ್ ಉಪಕರಣಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾರ್ಥಿಗಳು ಉದ್ದತೋಳಿನ ಉಡುಪು, ಜೀನ್ಸ್ ಪ್ಯಾಂಟ್, ಅತಿ ಹೆಚ್ಚು ಪ್ಯಾಕೆಟ್ ಇರುವ ಉಡುಪು, ಮುಖಗವಸು ಧರಿಸುವಂತಿಲ್ಲ ಎಂದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ. ಉಮೇಶಪ್ಪ ಪರೀಕ್ಷೆ ರೂಪುರೇಷೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳು ಉಪಸ್ಥಿತರಿದ್ದರು.