ಗ್ರಾಪಂ ಮಟ್ಟದಲ್ಲಿ ಮಕ್ಕಳ ರಕ್ಷಣೆ ಕಾರ್ಯಪಡೆ ರಚಿಸಲು ಸೂಚನೆ

KannadaprabhaNewsNetwork |  
Published : Jan 03, 2025, 12:31 AM IST
ಬಳ್ಳಾರಿ ಜಿ.ಪಂ. ಸಭಾಂಗಣದಲ್ಲಿ ‘ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009’  ಕುರಿತು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಗುರುವಾರ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ಭಾಗವಹಿಸಿದ್ದರು.  | Kannada Prabha

ಸಾರಾಂಶ

ಶಿಕ್ಷಣ ಮೂಲಭೂತ ಹಕ್ಕಾಗಿದ್ದು, ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009ರ ಅನ್ವಯ ಸಮಾಜದಲ್ಲಿನ 6-14 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ದೊರೆಯಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು.

ಬಳ್ಳಾರಿ: ಮಕ್ಕಳ ಮೇಲಿನ ದೌರ್ಜನ್ಯ, ಹಲ್ಲೆ, ಶೋಷಣೆ ತಾರತಮ್ಯ ಹಾಗೂ ಮಕ್ಕಳ ರಕ್ಷಣೆಗಾಗಿ ಮಕ್ಕಳ ರಕ್ಷಣಾ ನೀತಿ-2016, ತಿದ್ದುಪಡಿ ಕಾಯ್ದೆ-2023ರ ನಿಯಮಗಳನ್ನು ಪಾಲಿಸಬೇಕು. ಗ್ರಾಪಂ ಮಟ್ಟದಿಂದ ಜಿಲ್ಲಾ ಮಟ್ಟದ ಅಧಿಕಾರಿಗಳು ಸಕಾಲದಲ್ಲಿ ಸಭೆ ನಡೆಸಿ, ಮಕ್ಕಳ ಶಿಕ್ಷಣ ಕಾರ್ಯಪಡೆ ರಚಿಸಿ, ಮಕ್ಕಳ ರಕ್ಷಣೆಯಲ್ಲಿ ಇಲಾಖೆಗಳ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ವಿಶೇಷ ಪೊಲೀಸ್ ಘಟಕ, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣಾ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿ ನಗರದ ಜಿಪಂನ ನಜೀರ್ ಸಭಾಂಗಣದಲ್ಲಿ ‘ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009’ರ ಕುರಿತು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಗುರುವಾರ ಏರ್ಪಡಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣ ಮೂಲಭೂತ ಹಕ್ಕಾಗಿದ್ದು, ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009ರ ಅನ್ವಯ ಸಮಾಜದಲ್ಲಿನ 6-14 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ದೊರೆಯಬೇಕು. ಮಕ್ಕಳ ಹಕ್ಕುಗಳ ರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕಿದ್ದು, ಮಕ್ಕಳ ಹಕ್ಕುಗಳಿಗೆ ಚ್ಯುತಿಯಾಗದಂತೆ ಕಾರ್ಯನಿರ್ವಹಿಸುವುದು ವಿವಿಧ ಇಲಾಖೆ ಅಧಿಕಾರಿಗಳ ಜವಬ್ದಾರಿಯಾಗಿದೆ ಎಂದರು.

ಆರ್‌ಟಿಇ-2009 ಸೆಕ್ಸನ್ 10 ಪ್ರಕಾರ ಪ್ರತಿಯೊಬ್ಬ ಪೋಷಕರೂ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಇಲ್ಲವಾದಲ್ಲಿ ಆರ್‌ಟಿಇ ಕಾಯ್ದೆ ಸೆಕ್ಷನ್ 11ರ ಪ್ರಕಾರ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಕರೆತರುವ ಕೆಲಸ ಮಾಡಬೇಕು. ಜತೆಗೆ ಯಾವ ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ವಿಫಲಗೊಂಡಲ್ಲಿ ಶಿಸ್ತು ಕ್ರಮಕೈಗೊಳ್ಳಲು ಕಾನೂನಿನಲ್ಲಿ ಅವಕಾಶವಿದೆ ಎಂದು ಜನಸಾಮಾನ್ಯರಿಗೆ ಮನವರಿಕೆ ಮಾಡಬೇಕು ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಮಾಜಿ ಸದಸ್ಯ ಎಚ್.ಸಿ. ರಾಘವೇಂದ್ರ ಉಪನ್ಯಾಸ ನೀಡಿದರು. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ವಿಜಯಲಕ್ಷ್ಮಿ ಮೈದೂರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆನಾಗಪ್ಪ, ಜಿಲ್ಲಾ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರು, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಲಿಂಗಮೂರ್ತಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮತ್ತು ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಯ ಅಧೀಕ್ಷಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು