ಕುಡಿವ ನೀರಿನ ಸಮರ್ಪಕ ಸರಬರಾಜಿಗೆ ಸೂಚನೆ

KannadaprabhaNewsNetwork |  
Published : Feb 21, 2026, 01:30 AM IST
್ಿಿ್ | Kannada Prabha

ಸಾರಾಂಶ

ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಅಸಮರ್ಪಕ ನೀರು ಸರಬರಾಜು ಕುರಿತಂತೆ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಗೋವಿಂದ ಎಂ. ಕಾರಜೋಳ ಅವರು ಮಧುಗಿರಿ ಉಪವಿಭಾಗಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಕನ್ನಡಪ್ರಭ ವಾರ್ತೆ ತುಮಕೂರುಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಅಸಮರ್ಪಕ ನೀರು ಸರಬರಾಜು ಕುರಿತಂತೆ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಗೋವಿಂದ ಎಂ. ಕಾರಜೋಳ ಅವರು ಮಧುಗಿರಿ ಉಪವಿಭಾಗಾಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾ ಪಂಚಾಯತಿಯಲ್ಲಿ ಶುಕ್ರವಾರ ನಡೆದ ಶಿರಾ ಮತ್ತು ಪಾವಗಡ ತಾಲೂಕುಗಳಿಗೆ ಸಂಬಂಧಿಸಿದ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ(ದಿಶಾ)ಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಸುಮಾರು 2200 ಕೋಟಿ ರು. ವೆಚ್ಚದಲ್ಲಿ ಪಾವಗಡ ತಾಲೂಕಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಮಂಜೂರು ಮಾಡಿ ಅನುಷ್ಠಾನಗೊಳಿಸಿದ್ದರೂ ತಾಲೂಕಿನ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರಿನ ಸರಬರಾಜು ಆಗುತ್ತಿಲ್ಲ ಎಂಬ ದೂರು ಕೇಳಿ ಬರುತ್ತಿದೆ. ಕುಡಿಯುವ ನೀರಿನ ಯೋಜನೆ ಸರಬರಾಜು ಮಾಡಲು ಜವಾಬ್ದಾರಿ ವಹಿಸಿಕೊಂಡಿರುವ ಏಜೆನ್ಸಿ ಹಾಗೂ ಸಂಬಂಧಿಸಿದ ಇಲಾಖೆಗಳ ಅಸಮರ್ಪಕ ನಡೆಯಿಂದ ಕುಡಿಯುವ ನೀರು ಸರಬರಾಜಿನಲ್ಲಿ ಸಾಕಷ್ಟು ಸಮಸ್ಯೆಯಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ಈ ಸಂಬಂಧ ಮಧುಗಿರಿ ಉಪವಿಭಾಗಾಧಿಕಾರಿ ಅವರು ಪರಿಶೀಲಿಸಿ ವರದಿ ಸಲ್ಲಿಸುವಂತೆ ಸೂಚಿಸಿದರು. ತಮ್ಮ ಕ್ಷೇತ್ರ ವ್ಯಾಪ್ತಿಯ ಶಿರಾ ಮತ್ತು ಪಾವಗಡ ತಾಲೂಕುಗಳು ಬರಪೀಡಿತ ಪ್ರದೇಶಗಳಿಂದ ಕೂಡಿದ್ದು, ಕುಡಿಯುವ ನೀರಿನ ಅಭಾವ ಎದುರಿಸುತ್ತಿವೆ. ಪ್ರಸ್ತುತ ಬೇಸಿಗೆಯಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಆಗುವ ಸಂಭವವಿರುವುದರಿಂದ ಕೂಡಲೇ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಲಸ ನಿರ್ವಹಿಸಬೇಕು ಹಾಗೂ ಸಮಸ್ಯೆಯಿರುವ ಘಟಕಗಳನ್ನು ತಕ್ಷಣ ಸರಿಪಡಿಸಿ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿ ನಿಲಯಗಳು ಹಾಗೂ ವಸತಿ ಶಾಲೆಗಳಿಗೆ ನಿರಂತರ ಕುಡಿಯುವ ನೀರು ಸರಬರಾಜು ಮಾಡಲು ಸ್ಥಳೀಯ ಆಡಳಿತ ಕ್ರಮವಹಿಸಬೇಕು ಎಂದು ಸೂಚಿಸಿದರು.

ಸರ್ಕಾರಿ ಶಾಲಾ ಶಿಕ್ಷಕರು ಕೇವಲ ತಮ್ಮ ವೇತನ ಮತ್ತು ತಮ್ಮ ಕುಟುಂಬದ ಶ್ರೇಯಸ್ಸಿಗಷ್ಟೇ ದುಡಿಯದೆ ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಬೇಕು. ಈ ಸಂಬಂಧ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಿಕ್ಷಕರಿಗೆ ಸರಿಯಾದ ಮಾರ್ಗದರ್ಶನ ನೀಡಿ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮಗೊಳಿಸಲು ಕ್ರಮವಹಿಸುವಂತೆ ಅವರು ತಿಳಿಸಿದರು.

ಮೀನುಗಾರಿಕೆ ಇಲಾಖೆಯಿಂದ ಸಾಂಪ್ರದಾಯಿಕ ಮೀನುಗಾರರಿಗಾಗಿ ಸೌಲಭ್ಯಗಳನ್ನು ವಿತರಿಸಲು ಕೇಂದ್ರ ಸರ್ಕಾರದಿಂದ ಯೋಜನೆಗಳನ್ನು ರೂಪಿಸಿದ್ದು, ಇವುಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದ ಅವರು, ಕೆರೆ ನಿರ್ವಹಣಾ ಸಂಘಗಳು ಹಾಗೂ ಮೀನುಗಾರರ ಸಂಘಗಳನ್ನು ಇಲಾಖೆಯು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಗಳನ್ನು ಅನುಷ್ಠಾನಗೊಳಿಸುವುದರಿಂದ ಪಾರದರ್ಶಕವಾಗಿ ಯೋಜನೆಗಳು ಫಲಾನುಭವಿಗಳನ್ನು ತಲುಪಲಿವೆ ಎಂದರು. ತೋಟಗಾರಿಕೆ ಮತ್ತು ಕೃಷಿ ಇಲಾಖೆಗಳಲ್ಲಿ ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿರಬೇಕು ಎಂದ ಅವರು, ಬಡವರು ಹಾಗೂ ಪರಿಶಿಷ್ಟ ಸಮುದಾಯಗಳಿಗೆ ಯೋಜನೆಗಳು ತಲುಪುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಈ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆ ಮುಖ್ಯಸ್ಥರು ಗಮನಹರಿಸುವಂತೆ ಸೂಚಿಸಿದರು. ಪ್ರಸ್ತುತ ಆರ್ಥಿಕ ವರ್ಷ ಅಂತ್ಯದಲ್ಲಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೈಗೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಹಾಗೂ ಬಡವರು, ಶೋಷಿತ ಸಮುದಾಯಗಳ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬವಾಗದಂತೆ ಕೆಲಸ ನಿರ್ವಹಿಸಲು ಇದೇ ಸಂದರ್ಭದಲ್ಲಿ ಅವರು ಸೂಚಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜ ಹಾಗೂ ದಿಶಾ ಸಮಿತಿಯ ಸದಸ್ಯರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಾಂಗ್ಲಾ ಮಾತ್ರವಲ್ಲ, ಭಾರತದಲ್ಲೂ ಹಿಂದೂಗಳ ಸ್ಥಿತಿ ಹೀನಾಯ
ಕರ್ಣಾಟಕ ಬ್ಯಾಂಕ್ 102ನೇ ಸಂಸ್ಥಾಪಕರ ದಿನಾಚರಣೆ