ಗದಗ: ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ತುರ್ತು ಮತ್ತು ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಗದಗ ಜಿಲ್ಲಾ ಪ್ರಕೃತಿ ವಿಕೋಪ ಮೇಲುಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.
ಗದಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ತೀವ್ರ ಮಳೆಯ ಕೊರತೆಯಾಗಿರುವುದರಿಂದ ಜಿಲ್ಲೆಯನ್ನು ತಕ್ಷಣ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಶಾಸಕರು ಹಾಗೂ ಜನಪ್ರತಿನಿಧಿಗಳು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಈಶ್ವರ ಖಂಡ್ರೆ, ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಜಿಲ್ಲೆಗಳ ಪರಿಸ್ಥಿತಿ ಪರಿಶೀಲಿಸಲಾಗುತ್ತಿದ್ದು, ಈಗಾಗಲೇ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ವರದಿಯ ಆಧಾರದ ಮೇಲೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲೆಯಲ್ಲಿ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು. ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ಮುಂಚಿತ ಸಿದ್ಧತೆ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಕಂಡುಬಂದ ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಬರ ಪರಿಸ್ಥಿತಿಯಿಂದ ಜನರು ಉದ್ಯೋಗ ಅರಸಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಬಾರದು. ಗ್ರಾಮೀಣ ಪ್ರದೇಶಗಳಲ್ಲೇ ಉದ್ಯೋಗಾವಕಾಶಗಳನ್ನು ಕಲ್ಪಿಸಿ ಜನರಿಗೆ ಜೀವನೋಪಾಯ ಒದಗಿಸಬೇಕು. ಉದ್ಯೋಗ ಖಾತರಿ ಯೋಜನೆ ಸೇರಿದಂತೆ ಲಭ್ಯವಿರುವ ಎಲ್ಲ ಯೋಜನೆಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಜಲಜೀವನ ಮಿಷನ್ ಜತೆಗೆ ವಿಬಿ ಜಿ ರಾಮ್‌ಜಿ ಯೋಜನೆಯಡಿ ಕೂಡ ಅವಕಾಶಗಳಿದ್ದು, ಲಭ್ಯವಿರುವ ಅನುದಾನ ಬಳಸಿಕೊಂಡು ತಕ್ಷಣ ಕಾಮಗಾರಿಗಳನ್ನು ಆರಂಭಿಸಬೇಕು. ಬೆಳೆ ವಿಮೆ ಕಂತು ಪಾವತಿಗೆ ಅವಕಾಶ ಕಲ್ಪಿಸಿ ಎಂದರು.ಬೆಳೆವಿಮೆ ಭರ್ತಿ ಮಾಡಲು ಜು. 22ರ ವರೆಗೆ ಹಾಗೂ ಇನ್ನೂ ಕೆಲವು ಬೆಳೆಗಳಿಗೆ ಜು. 31ರ ವರೆಗೆ ವಿಮೆ ಕಂತು ಪಾವತಿಸಲು ಅವಕಾಶ ಇರುವುದರಿಂದ, ರೈತರಿಗೆ ಯಾವುದೇ ತೊಂದರೆ ಆಗದಂತೆ ಲೀಡ್ ಬ್ಯಾಂಕ್ ಹಾಗೂ ಡಿಸಿಸಿ ಬ್ಯಾಂಕ್ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚೆ: ಸಭೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಎಚ್.ಕೆ. ಪಾಟೀಲ, ಜಿ.ಎಸ್. ಪಾಟೀಲ, ಸಿ.ಸಿ. ಪಾಟೀಲ, ಡಾ. ಚಂದ್ರು ಲಮಾಣಿ ಹಾಗೂ ಎಸ್.ವಿ. ಸಂಕನೂರು ಅವರು ಜಿಲ್ಲೆಯ ಕುಡಿಯುವ ನೀರಿನ ಸ್ಥಿತಿ, ಬರ ನಿರ್ವಹಣೆ, ರೈತರ ಸಂಕಷ್ಟ ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.