ಎಂಜಿನಿಯರಿಂಗ್, ಕೃಷಿ, ಪಶುಸಂಗೋಪನೆ ಪದವಿ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸಗಳಿಗೆ ಪ್ರವೇಶಾವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏ.23 ಹಾಗೂ 24ರಂದು ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದೆ.
ಹಾವೇರಿ: ಎಂಜಿನಿಯರಿಂಗ್, ಕೃಷಿ, ಪಶುಸಂಗೋಪನೆ ಪದವಿ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸಗಳಿಗೆ ಪ್ರವೇಶಾವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏ.23 ಹಾಗೂ 24ರಂದು ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದೆ. ಯಾವುದೇ ಲೋಪವಾಗದಂತೆ ಪಾರದರ್ಶಕವಾಗಿ ಹಾಗೂ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಬೇಕು ಎಂದು ಪರೀಕ್ಷಾ ನಿಯೋಜಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಾಮಾನ್ಯ ಪ್ರವೇಶ ಪರೀಕ್ಷೆ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊಠಡಿ ಮೇಲ್ವಿಚಾರಕರು, ಮಾರ್ಗಾಧಿಕಾರಿಗಳು, ತ್ರಿ ಸದಸ್ಯ ಸಮಿತಿ ಸದಸ್ಯರು, ವೀಕ್ಷಕರು ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದರು.ಸಿಇಟಿ ಪರೀಕ್ಷೆ ಬಹಳ ಸೂಕ್ಷ್ಮವಾಗಿದೆ, ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ವಿವಿಧ ಇಲಾಖೆ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಸ್ವ್ಕಾಡ್‌ಗಳು, ಕೊಠಡಿ ಮೇಲ್ವಿಚಾರಕರು ತಮ್ಮ ಕರ್ತವ್ಯಗಳಲ್ಲಿ ಯಾವುದೇ ಲೋಪವಾಗದಂತೆ ಜವಾಬ್ದಾರಿಯಿಂದ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.ಸಿಸಿ ಟಿವಿ ಕಡ್ಡಾಯ: ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಕೆ ಹಾಗೂ ಕೊಠಡಿಯೊಳಗೆ ಗಡಿಯಾರ ಅಳವಡಿಕೆ ಕಡ್ಡಾಯವಾಗಿದೆ. ಪರೀಕ್ಷಾರ್ಥಿಗಳಿಗೆ ಶುದ್ಧ ಕುಡಿಯುವ ನೀರು, ಗಾಳಿ, ಬೆಳಕು, ಸೂಕ್ತ ಪೀಠೋಪಕರಣ ಒಳಗೊಂಡಂತೆ ಮೂಲಭೂತ ಸೌಕರ್ಯ ಒದಗಿಸಬೇಕು. ಪರೀಕ್ಷಾ ವೀಕ್ಷಕರು ಈ ಕುರಿತಂತೆ ಪೂರ್ವ ಪರಿಶೀಲನೆ ನಡೆಸಿ ನಿಯಮಾನುಸಾರ ಮೂಲ ಸೌಕರ್ಯಗಳ ಕುರಿತಂತೆ ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡಿದರು.
ಪರೀಕ್ಷಾ ಮಾರ್ಗಸೂಚಿ ಅನುಸಾರ ಒಂದು ಪರೀಕ್ಷಾ ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಆಸನದ ವ್ಯವಸ್ಥೆಯನ್ನು ಜಿಗ್‌ಜಾಗ್ ಮಾದರಿಯಲ್ಲಿ ಮಾಡಬೇಕು. ವಿಶೇಷಚೇತನ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದ ನೆಲಮಹಡಿಯಲ್ಲಿ ಆಸನದ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಕೊಠಡಿ ಮೇಲ್ವಿಚಾರಕರನ್ನು ಲಾಟರಿ ಮೂಲಕ ನಿಯೋಜಿಸಬೇಕು ಎಂದು ಸೂಚನೆ ನೀಡಿದರು. ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ್ ಎಲ್. ಮಾತನಾಡಿ, ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಹೊರತುಪಡಿಸಿ ಬೇರೆಯವರಿಗೆ ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಇರುವುದಿಲ್ಲ ಎಂದು ತಿಳಿಸಿದ ಅವರು, ಪ್ರಶ್ನೆ ಪತ್ರಿಕೆ ತೆರೆಯುವಾಗ ಹಾಗೂ ಉತ್ತರ ಪತ್ರಿಕೆ ಬಂಡಲ್ ಮಾಡುವಾಗ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಕೈಗೊಳ್ಳುವಂತೆ ಸೂಚನೆ ನೀಡಿದರು.ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಫ್ರಿಸ್ಕಿಂಗ್, ಫೇಸ್ ರೆಕಗ್ನಿಶನ್ ಮಾಡಲಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳುವ ಮೊದಲು ಅವರ ತಪಾಸಣೆ ನಡೆಸಬೇಕು ಎಂದು ಸಲಹೆ ನೀಡಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಶೋಕ ಶಾಸ್ತ್ರಿ ಮಾತನಾಡಿ, ಪರೀಕ್ಷೆ ಕಾರ್ಯಕ್ಕೆ ನಿಯೋಜಿತ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿಗಳು ಪರೀಕ್ಷಾ ಗೌಪ್ಯತೆ ಹಾಗೂ ಪಾರದರ್ಶಕತೆಯನ್ನು ಕಾಪಾಡಿಕೊಳ್ಳಬೇಕು. ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಪರೀಕ್ಷೆ ಯಶಸ್ವಿಗೊಳಿಸಬೇಕು ಎಂದರು.ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ, ಜಿ.ಪಂ. ಯೋಜನಾ ನಿರ್ದೇಶಕ ಎಂ.ವೈ.ಮೀಶೆ, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳು, ವಿವಿಧ ತಾಲೂಕುಗಳ ತಹಸೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಪ್ರಾಚಾರ್ಯರು ಇದ್ದರು. ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ: ಪರೀಕ್ಷಾ ಪ್ರಾಧಿಕಾರ ನಿಗದಿಪಡಿಸಿದ ವಸ್ತ್ರ ಸಂಹಿತೆ (ಡ್ರೆಸ್ ಕೋಡ್)ನ್ನು ಪ್ರತಿಯೊಬ್ಬ ಅಭ್ಯರ್ಥಿಯು ಕಡ್ಡಾಯವಾಗಿ ಪಾಲಿಸಬೇಕು. ಉದ್ದ ತೋಳಿನ ಹಾಗೂ ತಲೆ ಮುಚ್ಚುವ ಉಡುಪು ಧರಿಸಿ ಬರುವಂತಿಲ್ಲ. ಬೆಲ್ಟ್, ಟೋಪಿ ಹಾಗೂ ಯಾವುದೇ ಆಭರಣಗಳನ್ನು ಧರಿಸುವಂತಿಲ್ಲ (ಮಂಗಳಸೂತ್ರ ಹೊರತು ಪಡಿಸಿ). ಶೂ ಹಾಕಿಕೊಂಡು ಬರುವಂತಿಲ್ಲ, ಸಾದಾ ಚಪ್ಪಲಿಗಳನ್ನು ಧರಿಸಿರಬೇಕು ಎಂದು ತಿಳಿಸಿದರು. 4,651 ವಿದ್ಯಾರ್ಥಿಗಳ ನೋಂದಣಿ: ಸುಗಮ ಪರೀಕ್ಷೆಗಾಗಿ ಹಾವೇರಿ ನಗರದಲ್ಲಿ 11 ಕೇಂದ್ರಗಳನ್ನು ತೆರೆಯಲಾಗಿದೆ. 4651 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆ ಏ. 23ರಂದು ಬೆಳಗ್ಗೆ 10.30ರಿಂದ 11.50ರ ವರೆಗೆ ಭೌತಶಾಸ್ತ್ರ ಹಾಗೂ ಮಧ್ಯಾಹ್ನ 2.30ರಿಂದ 3.50ರ ವರೆಗೆ ರಸಾಯನಶಾಸ್ತ್ರ, ಏ. 24ರಂದು ಬೆಳಗ್ಗೆ 10.30ರಿಂದ 11.50ರ ವರೆಗೆ ಗಣಿತಶಾಸ್ತ್ರ ಹಾಗೂ ಮಧ್ಯಾಹ್ನ 2.30ರಿಂದ 3.50ರ ವರೆಗೆ ಜೀವಶಾಸ್ತ್ರ ವಿಷಯ ಪರೀಕ್ಷೆಗಳು ನಡೆಯಲಿವೆ.ಎಲೆಕ್ಟ್ರಾನಿಕ್ ಉಪಕರಣಗಳ ನಿಷೇಧ: ಪರೀಕ್ಷಾರ್ಥಿಗಳು ಹಾಗೂ ಕೊಠಡಿಯ ಮೇಲ್ವಿಚಾರಕರಾಗಲಿ ಪರೀಕ್ಷಾ ಕೇಂದ್ರದೊಳಗೆ ಅತ್ಯಾಧುನಿಕ ಇಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ಇಯರ್ ಫೋನ್‌ಗಳು, ಮೈಕ್ರೋಫೋನ್, ಪೇಜರ್, ವೈರಲೆಸ್ ಸೆಟ್, ಲಾಗ್ ಟೇಬಲ್, ಕ್ಯಾಲಕ್ಯುಲೇಟರ್ ಹಾಗೂ ಗಡಿಯಾರಗಳನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್‌ವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ನಿಷೇಧಿತ ವಲಯದಲ್ಲಿ ಝರಾಕ್ಸ್ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚಿಸಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.