ಕನ್ನಡಪ್ರಭ ವಾರ್ತೆ, ತುಮಕೂರುಶಾಲೆಗಳಲ್ಲಿ ಮಕ್ಕಳ ಕಲಿಕೆಗೆ ಹೆಚ್ಚಿನ ಸಮಯವನ್ನು ಮೀಸಲಿಡಬೇಕು. ಪಠ್ಯೇತರ ಚಟುವಟಿಕೆಗಳನ್ನು ರಜೆ ದಿನಗಳಂದು ಆಯೋಜಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.ಶುಕ್ರವಾರ ಜಿಲ್ಲಾ ಪಂಚಾಯತ್ ವಿ.ಸಿ ಹಾಲ್‌ನಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಶಾಲೆಗಳಲ್ಲಿ ನಡೆಸುತ್ತಿರುವ ನಲಿ-ಕಲಿ ಪಠ್ಯಕ್ರಮವನ್ನು ಬದಲಾಯಿಸಿ ಪ್ರತ್ಯೇಕವಾಗಿ ತರಗತಿಗಳನ್ನು ನಡೆಸಬೇಕು. ಇದರಿಂದ ಮಕ್ಕಳ ಶೈಕ್ಷಣಿಕ ಮಟ್ಟ ಅಭಿವೃದ್ಧಿಯಾಗುತ್ತದೆ ಎಂದು ಸಲಹೆ ನೀಡಿದರು. ಜಿಲ್ಲೆಯಲ್ಲಿ ಕೈಗೊಂಡಿರುವ ಶೈಕ್ಷಣಿಕ ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಮಕ್ಕಳ ಕಲಿಕೆಗಾಗಿ ವಿನೂತನ ಕಾರ್ಯಚಟುವಟಿಕೆ, ಕ್ಷಮತೆ, ಬಲಸಂವರ್ಧನೆ ಮತ್ತು ಅನುಭವಾತ್ಮಕ ಕಲಿಕೆ ಅಳವಡಿಕೆಯು ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಯ ಸಂಕೇತವಾಗಿದೆ. ಜಿಲ್ಲೆಯಲ್ಲಿ ಅಳವಡಿಸಿಕೊಂಡಿರುವ ಕ್ಷಮತೆ, ಬಲಸಂವರ್ಧನೆ ಮತ್ತು ಅನುಭವಾತ್ಮಕ ಕಲಿಕೆ ಮಾದರಿಯನ್ನು ರಾಜ್ಯ ಮಟ್ಟದಲ್ಲಿ ಅಳವಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಮಕ್ಕಳಿಗೆ ಪಠ್ಯ ವಿಷಯಗಳು ಸುಲಭವಾಗಿ ಅರ್ಥವಾಗಲು ಪ್ರಾಯೋಗಿಕ ತರಗತಿಗಳನ್ನು ನಡೆಸಬೇಕು. ಶೈಕ್ಷಣಿಕ ಮಟ್ಟವನ್ನು ಹೆಚ್ಚಿಸಲು ಮಕ್ಕಳಿಗಾಗಿ ವಿಶೇಷ ತರಬೇತಿ, ರಸ ಪ್ರಶ್ನೆ ಕಾರ್ಯಕ್ರಮ, ಗುಂಪು ಸಂವಾದ, ಚರ್ಚಾ ಸ್ಪರ್ಧೆಗಳನ್ನು ಆಯೋಜಿಸಬೇಕು ಎಂದು ತಿಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು ಜಿ. ಮಾತನಾಡಿ, ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಕಲಿಕಾ ಪ್ರಗತಿ ವೀಕ್ಷಿಸಲು ಎಲ್ಲಾ ಅನುಷ್ಠಾನಾಧಿಕಾರಿಗಳನ್ನೂಳಗೊಂಡ ಕಾರ್ಯಪಡೆಯನ್ನು ರಚಿಸಲಾಗಿದೆ. ಜಿಲ್ಲೆಯಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಒದಗಿಸುವ ಮೂಲಭೂತ ಸೌಕರ್ಯಾಭಿವೃದ್ಧಿ ಕಾಮಗಾರಿ ಹಾಗೂ ನರೇಗಾ ಯೋಜನೆಯಡಿ ಕೈಗೊಂಡ ಶಾಲಾ ಅಭಿವೃದ್ಧಿ ಕಾಮಗಾರಿಗಳ ಮಾಹಿತಿಯನ್ನು ಕಾರ್ಯದರ್ಶಿಗಳ ಗಮನಕ್ಕೆ ತಂದರು.ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ(ಅಭಿವೃದ್ಧಿ), ಉಪ ಕಾರ್ಯದರ್ಶಿ(ಆಡಳಿತ), ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರು, ಡಯಟ್ ಪ್ರಾಂಶುಪಾಲರು ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.