10 ದಿನಗಳಲ್ಲಿ ಬೆಳೆಹಾನಿ ವರದಿ ಸಮೀಕ್ಷೆ ಸಲ್ಲಿಸಲು ಸೂಚನೆ

KannadaprabhaNewsNetwork |  
Published : Sep 09, 2025, 01:01 AM IST
ಪೋಟೋ ಇದೆ. | Kannada Prabha

ಸಾರಾಂಶ

ರಾಜ್ಯಾದ್ಯಂತ ಅತಿವೃಷ್ಟಿಯಿಂದಾದ ಹಾನಿ ಹಾಗೂ ತೆಗೆದುಕೊಂಡ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು.

ಗದಗ: ರಾಜ್ಯಾದ್ಯಂತ ಅತಿವೃಷ್ಟಿಯಿಂದಾದ ಹಾನಿ ಹಾಗೂ ತೆಗೆದುಕೊಂಡ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು.

ಪೂರ್ವ ಮುಂಗಾರು ಮಳೆಯಿಂದಾದ ಕೃಷಿ, ತೋಟಗಾರಿಕೆ ಬೆಳೆ ಹಾನಿ, ಮನೆ ಹಾನಿ, ಪ್ರವಾಹ, ಸಿಡಿಲಿನಿಂದಾದ ಜೀವಹಾನಿ, ಜಾನುವಾರು ಪ್ರಾಣಹಾನಿ, ಪರಿಹಾರ ವಿತರಣೆ, ವಿವಿಧ ಜಲಾಶಯಗಳ ಕ್ರಸ್ಟ್‌ಗೇಟ್‌ಗಳ ಮಾಹಿತಿ, ರೈತರಿಗೆ ಅವಶ್ಯಕ ಬೀಜ, ರಸಗೊಬ್ಬರ, ಕೀಟನಾಶಕಗಳ ಬೇಡಿಕೆ, ರಸ್ತೆ ಹಾಗೂ ಮೂಲ ಸೌಕರ್ಯಗಳ ಹಾನಿ ಕುರಿತು ಸಭೆಯಲ್ಲಿ ಸಿದ್ದರಾಮಯ್ಯ ಮಾಹಿತಿ ಪಡೆದರು.

ಇದೇ ಸಂದರ್ಭದಲ್ಲಿ ಬೆಳೆಹಾನಿಗೆ ಸಂಬಂಧಿಸಿದಂತೆ ಜಂಟಿ ಸಮೀಕ್ಷೆ ಬಗ್ಗೆ ದೃಢೀಕರಿಸಿ, 10 ದಿನಗಳ ಒಳಗೆ ಸಮೀಕ್ಷೆ ವರದಿ ಸಲ್ಲಿಸಬೇಕು. ಮನೆಹಾನಿ, ಪ್ರಾಣ ಹಾನಿ, ಜಾನುವಾರು ಹಾನಿ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಕಲ್ಪಿಸಲು ಸೂಚಿಸಿ, ರೈತರಿಗೆ ಬೀಜ, ರಸಗೊಬ್ಬರ, ಕೀಟನಾಶಕಗಳ ಪೂರೈಕೆ ಬಗ್ಗೆಯೂ ಅವಶ್ಯಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಜಿಲ್ಲಾಧಿಕಾರಿಗೆ ಸೂಚಿಸಿದರು.

ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆದ ಹಾನಿ ಕುರಿತು ಮಾಹಿತಿ ನೀಡಿದರು. ಬೆಳೆಹಾನಿಗೆ ಸಂಬಂಧಿಸಿದಂತೆ ಸಮೀಕ್ಷೆ ಕಾರ್ಯ ವ್ಯವಸ್ಥಿತವಾಗಿ ನಡೆಯುತ್ತಿದೆ. ಗದಗ ಜಿಲ್ಲೆಯಲ್ಲಿ 93,709 ಸಾವಿರ ಹೆಕ್ಟೇರ್ ಪ್ರದೇಶ ಕೃಷಿ ಹಾಗೂ 7,454 ಸಾವಿರ ಹೆಕ್ಟೇರ್ ಪ್ರದೇಶದ ತೋಟಗಾರಿಕೆ ಸೇರಿ ಒಟ್ಟು 1.01 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆಹಾನಿಯಾಗಿದೆ. 183 ಭಾಗಶಃ ಮನೆ ಹಾನಿಯಾಗಿದ್ದು, ಈ ವರೆಗೆ ಮಾರ್ಗಸೂಚಿಯನ್ವಯ ₹28.04 ಲಕ್ಷ ಪರಿಹಾರ‌ ನೀಡಲಾಗಿದೆ. ಜಿಲ್ಲೆಯಲ್ಲಿ ವಾಡಿಕೆ ಮಳೆಗಿಂತ ಶೇ. 33ರಷ್ಟು ಅಧಿಕ‌ ಮಳೆಯಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ 3.12 ಲಕ್ಷ ಹೆಕ್ಟೇರ್ ಪ್ರದೇಶ ಬಿತ್ತನೆ ಗುರಿ ಇತ್ತು. ಶೇ. 108ರಷ್ಟು ಗುರಿ ಸಾಧನೆಯಾಗಿದೆ. 1.49 ಲಕ್ಷ ಹೆಕ್ಟೇರ್ ಹೆಸರು ಬೆಳೆ ಹಾಗೂ 93 ಸಾವಿರ ಹೆಕ್ಟೇರ್ ಪ್ರದೇಶದಲ್ಲಿನ ಇತರ ಬೆಳೆ ಹಾನಿಯಾಗಿದೆ. ಇದರಿಂದಾಗಿ ಜಿಲ್ಲೆಯ ಒಟ್ಟಾರೆ 94 ಸಾವಿರ ರೈತರು ಹಾನಿ ಅನುಭವಿಸಿದ್ದಾರೆ ಎಂದು ಡಿಸಿ ಸಿ.ಎನ್. ಶ್ರೀಧರ ಮಾಹಿತಿ ಒದಗಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಎಸಿ ಗಂಗಪ್ಪ ಎಂ., ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ., ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ. ಹುಲಗಣ್ಣವರ, ತೋಟಗಾರಿಕೆ ಉಪನಿರ್ದೇಶಕ ಶಶಿಕಾಂತ ಕೋಟೆಮನಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಗದಗ ಜಿಲ್ಲೆಯಲ್ಲಿ ಹೆಸರು ಬೆಳೆ ಇನ್ನೇನು ಫಸಲು ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ರೈತರಿಗೆ ಅತಿವೃಷ್ಟಿಯಿಂದಾಗಿ ನಿರಾಸೆಯಾಗಿದೆ. ಹೆಸರು ಬೆಳೆ ಸಂಪೂರ್ಣವಾಗಿ ಹಾನಿಗೀಡಾಗಿದೆ. ಇದರಿಂದ ರೈತರಿಗೆ ಅಪಾರ ಹಾನಿಯಾಗಿದೆ. ಶೀಘ್ರವಾಗಿ ಜಂಟಿ ಸಮೀಕ್ಷೆ ಕೈಗೊಂಡು ಪರಿಹಾರ ತಂತ್ರಾಂಶದಲ್ಲಿ ನೋಂದಣಿ ಮಾಡಲು ಈಗಾಗಲೇ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಬೆಳೆ ಹಾನಿಗೀಡಾದ ರೈತರಿಗೆ ಸರ್ಕಾರದಿಂದ ಪರಿಹಾರ ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಣಸೆ, ಹಲಸು, ನೇರಳೆಗೆ ಮಂಡಳಿ ರಚಿಸಿ: ದೇವೇಗೌಡ
ಗುಮ್ಮ ಬಂದ ಗುಮ್ಮ, ಮಕ್ಕಳಿಗೆ ಹೊಡೆಯೋ ಗುಮ್ಮ!