ಅಧಿಕಾರಿಗಳಿಗೆ ನಿರ್ದೇಶನ । ಎಚ್5ಎನ್1, ಸಾಂಕ್ರಾಮಿಕ ರೋಗ ತಡೆ ಸಮನ್ವಯ ಸಭೆ
ಜಿಲ್ಲೆಯಲ್ಲಿ ಈ ವರೆಗೆ ಯಾವುದೇ ಹಕ್ಕಿಜ್ವರ ಪ್ರಕರಣ ವರದಿಯಾಗಿಲ್ಲ. ಆದರೂ ಸಾರ್ವಜನಿಕರು ಹಕ್ಕಿಜ್ವರ ಬಾರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಜ್ವರ, ಉಸಿರಾಟದ ತೊಂದರೆ ಇತರೆ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಎಚ್5ಎನ್1(ಹಕ್ಕಿಜ್ವರ) ಹಾಗೂ ಇತರೆ ಸಾಂಕ್ರಾಮಿಕ ರೋಗ ತಡೆಗಟ್ಟಲು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು.ಹಕ್ಕಿಜ್ವರ ಅಥವಾ ಕೋಳಿ ಶೀತ ಜ್ವರ ಎಚ್5ಎನ್1 ವೈರಸ್‌ನಿಂದ ಹರಡುವ ರೋಗ. ಇದು ಟರ್ಕಿ, ಗಿನಿ ಕೋಳಿ, ಬಾತು ಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಕಾಯಿಲೆ. ಇದೊಂದು ಸಾಂಕ್ರಾಮಿಕ ರೋಗವಾಗಿದ್ದು ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ. ಕೆಲವೊಮ್ಮೆ ರೋಗಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ ಎಂದರು.
ಕೋಳಿ ಮಾಂಸ ಸೇವನೆಯಿಂದ ಹಕ್ಕಿಜ್ವರ ಬರುವುದಿಲ್ಲ:
ಡಿಎಸ್‌ಒ ಡಾ.ನಾಗರಾಜ ನಾಯ್ಕ ಮಾತನಾಡಿ, ರೋಗ ಪೀಡಿತ ಕೋಳಿ ಅಥವಾ ಹಕ್ಕಿಗಳ ಮಾಂಸವನ್ನು ಹಾಗೂ ಮೊಟ್ಟೆಯನ್ನು ಸರಿಯಾಗಿ ಬೇಯಿಸದೇ ತಿನ್ನುವುದರಿಂದ, ಸೋಂಕಿರುವ ಹಸಿ ಮೊಟ್ಟೆಗಳನ್ನು ಸೇವಿಸುವುದರಿಂದ ಹಾಗೂ ಕೋಳಿಗಳ ಹಿಕ್ಕೆಗಳು ಮನುಷ್ಯರು ಕುಡಿಯುವ ನೀರಿನೊಂದಿಗೆ ಬೆರೆತು ಕಲುಷಿತಗೊಂಡಾಗ ಈ ಕಾಯಿಲೆ ಹರಡುತ್ತದೆ ಎಂದರು.
ಜಿಲ್ಲಾ ಪಂಚಾಯತ್ ಸಿಇಒ ಹೇಮಂತ್ ಎನ್, ಡಿಎಚ್‌ಒ ಡಾ.ನಟರಾಜ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗುಡದಪ್ಪ ಕಸಬಿ ಆರ್‌ಸಿಎಚ್ ಅಧಿಕಾರಿ ಡಾ.ಮಲ್ಲಪ್ಪ, ಸಿಮ್ಸ್ ನಿರ್ದೇಶಕ ಡಾ.ವಿರೂಪಾಕ್ಷಪ್ಪ, ಮೆಗ್ಗಾನ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ತಿಮ್ಮಪ್ಪ, ವಿವಿಧ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ಟಿಎಚ್‌ಒಗಳು ಹಾಜರಿದ್ದರು.