ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಮೂಲಕ ಮನವಿ ಸಲ್ಲಿಕೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ಮುಖಂಡರು ಬುಧವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಎಲ್.ಎಸ್.ಶ್ರೀಕಾಂತ್ , ನ್ಯಾಯಮೂರ್ತಿ ಬಿ. ಆರ್. ಗವಾಯಿಯವರ ಮೇಲೆ ಶೂ ಎಸೆಯಲು ಯತ್ನಿಸಿದ ಪ್ರಕರಣ ಖಂಡನೀಯ. ಈ ಕೃತ್ಯವನ್ನು ಧರ್ಮ ಬೇಧ ಮತ್ತು ಪಕ್ಷಬೇಧ ಮರೆತು ಪ್ರತಿಯೊಬ್ಬರು ಖಂಡನೆ ವ್ಯಕ್ತಪಡಿಸಬೇಕು ಎಂದು ಹೇಳಿದರು.ದಲಿತ ಸಮುದಾಯಕ್ಕೆ ಸೇರಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಗವಾಯಿ ಅವರನ್ನು ಮನುವಾದಿ ವ್ಯಕ್ತಿತ್ವವುಳ್ಳ ವಕೀಲರು ಅವಮಾನಿಸಿ, ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಆದ್ದರಿಂದ ಆತನಿಗೆ ವಕೀಲತ್ವ ವಜಾಗೊಳಿಸಿ, ದೇಶ ದ್ರೋಹ ಪ್ರಕರಣ ದಾಖಲಿಸಬೇಕು ಎಂದರು.ಸನಾತನಿ ವಕೀಲರು ಎಸಗಿದ ಕೃತ್ಯ ಇಡೀ ಪ್ರಜಾಪ್ರಭುತ್ವ ವ್ಯವಸ್ಥೆ ತಲೆತಗ್ಗಿಸುವಂತಾಗಿದೆ. ಸಂವಿಧಾನದ ಆಶಯಗಳಿಗೆ ಎಸೆದ ಕೃತ್ಯವಾಗಿದೆ. ನ್ಯಾಯಮೂರ್ತಿಗಳ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ಸನಾತನ ಧರ್ಮದ ಬಗ್ಗೆ ಜೈಕಾರ ಹಾಕಿವುದನ್ನು ಗಮನಿಸಿದರೆ ನ್ಯಾಯಾಂಗ ವ್ಯವಸ್ಥೆ ಯಾವುದೋ ಒಂದು ಧರ್ಮಕ್ಕೆ ಬಳಸಿಕೊಳ್ಳುವ ಹುನ್ನಾರ ಅಡಗಿದೆ ಎಂದು ಹೇಳಿದರು.ಈ ಕೃತ್ಯವೆಸಗಿದವರನ್ನು ಕಠಿಣ ಶಿಕ್ಷೆಗೆ ಒಳಪಡಿಸುವ ಮೂಲಕ ಭಾರತದ ಸಂವಿಧಾನದಡಿ ನ್ಯಾಯಾಂಗ ವ್ಯವಸ್ಥೆ ನಿರ್ಭೀತಿ ಯಿಂದ ಕಾರ್ಯನಿರ್ವಹಿಸುವಂತೆ ಮಾಡಬೇಕಾದ ಜವಾಬ್ದಾರಿ ಭಾರತದ ಪ್ರಜೆಗಳಾದ ನಮ್ಮೆಲ್ಲರ ಹೊಣೆಯಾಗಿದೆ. ಈ ಘಟನೆಯನ್ನು ಉನ್ನತ ಮಟ್ಟದಲ್ಲಿ ತನಿಖೆ ನಡೆಸಿ, ಶಿಸ್ತು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕರು ಡಿ.ರಾಮು, ವೈ.ಆರ್.ರವಿಶಂಕರ್, ದಲಿತ ಮಹಿಳಾ ಒಕ್ಕೂಟದ ಜಿಲ್ಲಾ ಸಂಚಾಲಕಿ ಆರ್. ಪವಿತ್ರ, ಮುಖಂಡರಾದ ಮಹೇಂದ್ರಸ್ವಾಮಿ, ನಂಜುಂಡಪ್ಪ ಹಾಜರಿದ್ದರು. 15 ಕೆಸಿಕೆಎಂ 3ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಮುಖಂಡರು ಬುಧವಾರ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.