ಕನ್ನಡಪ್ರಭ ವಾರ್ತೆ ಬೆಳಗಾವಿಫಾರ್ಮ್-6 ಮತ್ತು 7ರ ಮೂಲಕ ಆಕ್ಷೇಪಣೆ ಸಲ್ಲಿಸಿ ಮತದಾರರ ಪಟ್ಟಿಯಲ್ಲಿನ ಹೆಸರುಗಳ ಪರಿಶೀಲನೆ ಕೋರುವುದು ಅಪರಾಧವಲ್ಲ. ಆದರೆ, ಈ ಸಂಬಂಧ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸುತ್ತಿರುವುದು ಕಾಂಗ್ರೆಸ್ ಸರ್ಕಾರದ ದಮನಕಾರಿ ಹಾಗೂ ಸಂವಿಧಾನ ವಿರೋಧಿ ನೀತಿಯಾಗಿದೆ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಆರೋಪಿಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಫಾರ್ಮ್-6 ಮತ್ತು 7ರ ಮೂಲಕ ಆಕ್ಷೇಪಣೆ ಸಲ್ಲಿಸಿ ಮತದಾರರ ಪಟ್ಟಿಯಲ್ಲಿನ ಹೆಸರುಗಳ ಪರಿಶೀಲನೆ ಕೋರುವುದು ಅಪರಾಧವಲ್ಲ. ಆದರೆ, ಈ ಸಂಬಂಧ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸುತ್ತಿರುವುದು ಕಾಂಗ್ರೆಸ್ ಸರ್ಕಾರದ ದಮನಕಾರಿ ಹಾಗೂ ಸಂವಿಧಾನ ವಿರೋಧಿ ನೀತಿಯಾಗಿದೆ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಆರೋಪಿಸಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಆಕ್ಷೇಪಣೆ ಸಲ್ಲಿಸಲು ಕಾನೂನು ಅವಕಾಶವಿದೆ. ಶಾಸಕ ಅಭಯ ಪಾಟೀಲ ಅಥವಾ ಡಾ.ರವಿ ಪಾಟೀಲ ಅವರು ಪತ್ರ ನೀಡಿರುವುದರಲ್ಲಿ ತಪ್ಪಿಲ್ಲ. ಆದರೆ, ಆಕ್ಷೇಪಣೆ ಸಲ್ಲಿಸಿದವರ ವಿರುದ್ಧವೇ ಪ್ರಕರಣ ದಾಖಲಿಸುತ್ತಿರುವುದು ಸರಿಯಲ್ಲ. ಈಗಾಗಲೇ ದಾಖಲಿಸಿರುವ ಎಫ್‌ಐಆರ್‌ಗಳನ್ನು ಕೂಡಲೇ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಕಾಂಗ್ರೆಸ್‌ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಟೀಕಿಸಲು ಯಾವುದೇ ವಿಷಯವಿಲ್ಲ. ಹೀಗಾಗಿ ಇವಿಎಂ ಹಾಗೂ ಚುನಾವಣಾ ಆಯೋಗದ ಕುರಿತು ಅಪಪ್ರಚಾರ ಮಾಡುತ್ತಿದೆ ಎಂದು ಶೆಟ್ಟರ್ ಆರೋಪಿಸಿದರು.
ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರದ ತಂಡದ ವರದಿ ಹಾಗೂ ನೆರವಿಗಾಗಿ ಕಾಯದೆ ರಾಜ್ಯ ಸರ್ಕಾರ ತನ್ನ ಸ್ವಂತ ಅನುದಾನದಿಂದಲೇ ಮಧ್ಯಂತರ ಬರ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಪ್ರದೇಶಗಳಿಗೆ ತಕ್ಷಣ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ರೈತರ ಸಾಲ ಮರುಪಾವತಿಯನ್ನು ಮುಂದೂಡುವುದು ಅಥವಾ ಸಾಲ ಮನ್ನಾ ಪ್ರಕ್ರಿಯೆ ಆರಂಭಿಸುವ ಕುರಿತು ಕ್ರಮ ಕೈಗೊಳ್ಳಬೇಕು. ಕೇಂದ್ರದಿಂದ ನೆರವು ಬರುವುದನ್ನು ಕಾಯದೆ ರಾಜ್ಯ ಸರ್ಕಾರವೇ ತಕ್ಷಣ ಪರಿಹಾರ ಕಾರ್ಯಗಳಿಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.