ಬೀದಿಬದಿ ಆಹಾರ ಗುಣಮಟ್ಟ ಪರಿಶೀಲನೆ ತೀವ್ರಗೊಳಿಸಿ: ಎಡಿಸಿ ಬಿ.ಟಿ.ಕುಮಾರಸ್ವಾಮಿ ಸೂಚನೆ

KannadaprabhaNewsNetwork | Published : May 25, 2024 12:48 AM

ಸಾರಾಂಶ

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕುರಿತು ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ನಿಯಮ ಹಾಗೂ ನಿಬಂಧನೆಗಳ ಅನುಸಾರ ನೋಂದಣಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ, ಚಿತ್ರದುರ್ಗ

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ನಿಯಮ ಹಾಗೂ ನಿಬಂಧನೆಗಳ ಅನುಸಾರವಾಗಿ ಶಾಲೆ, ಅಂಗನವಾಡಿ ಕೇಂದ್ರಗಳು, ಮಹಿಳಾ ಸೇವಾ ಸಂಘಗಳು, ನ್ಯಾಯಬೆಲೆ ಅಂಗಡಿಗಳು, ಆಹಾರ ಪದಾರ್ಥಗಳ ವ್ಯವಹಾರ ನಡೆಸುವ ಔಷಧಿ ಅಂಗಡಿಗಳು, ವಸತಿ ನಿಲಯಗಳು ಆಹಾರ ಸುರಕ್ಷತೆ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಜೂನ್ ಮಾಹೆಯೊಳಗೆ ಶೇ.100ರಷ್ಟು ನೋಂದಣಿ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕುರಿತು ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಸಲಹಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಸಂಬಂಧಪಟ್ಟ ಎಲ್ಲಾ ಇಲಾಖೆಗಳೊಂದಿಗೆ ಕೈಜೋಡಿಸಿ ಆಹಾರ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಹೋಟೆಲ್, ಬೀದಿಬದಿಯ ಆಹಾರ ಪದಾರ್ಥಗಳ ಮಾರಾಟ ಮಾಡುವ ಸ್ಥಳಗಳಿಗೆ ನಿಯಮಿತವಾಗಿ ಭೇಟಿ ನೀಡಿ, ಗುಣಮಟ್ಟ ಹಾಗೂ ಸ್ವಚ್ಛತೆ ಕುರಿತು ತಪಾಸಣೆ ನಡೆಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಆಹಾರ ಸುರಕ್ಷತೆ ಅಂಕಿತ ಅಧಿಕಾರಿ ಡಾ.ಸಿ.ಎಲ್.ಫಾಲಾಕ್ಷ ಮಾತನಾಡಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮ, ನಿಬಂಧನೆ 2011 ಆಗಸ್ಟ್ 5ರಂದು ದೇಶದಾದ್ಯಂತ ಜಾರಿಗೆ ಬಂದಿದೆ. ಆಹಾರ ಸುರಕ್ಷತೆ ಹಿನ್ನೆಲೆಯಲ್ಲಿ ಇಲಾಖೆವತಿಯಿಂದ ಪರವಾನಗಿ ಮತ್ತು ನೋಂದಣಿ ಕಾರ್ಯ ಮಾಡುತ್ತೇವೆ. ಆಹಾರ ಸುರಕ್ಷತೆ ನಿಯಮ ಉಲ್ಲಂಘಿಸಿದರೆ ನಿಯಮಾನುಸಾರ ದಂಡ ವಿಧಿಸಲಾಗುತ್ತದೆ. ಜಿಲ್ಲಾ ವ್ಯಾಪ್ತಿಯಲ್ಲಿನ ವಿವಿಧ ಸ್ಥಳಗಳಲ್ಲಿ ಆಹಾರ ಪದಾರ್ಥಗಳ ವ್ಯಾಪಾರಸ್ಥರಿಗೆ ಹಾಗೂ ಗ್ರಾಹಕರಿಗೆ ಆಹಾರ ಸುರಕ್ಷತೆ ಕುರಿತು ಮಾಹಿತಿ ನೀಡಿದೆ ಹಾಗೂ ಉದ್ದಿಮೆ ತಪಾಸಣೆ ನಡೆಸಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಆಹಾರ ಸೇವಿಸುವ ಮಕ್ಕಳ ಸುರಕ್ಷತೆ ಪ್ರಮುಖವಾದದು. ಮಧ್ಯಾಹ್ನದ ಬಿಸಿಯೂಟ ನೀಡುವ ಶಾಲೆಗಳು, ಅಂಗನವಾಡಿ, ವಿವಿಧ ಇಲಾಖೆಗಳ ವಸತಿ ನಿಲಯಗಳು, ಎಲ್ಲಾ ನ್ಯಾಯಬೆಲೆ ಅಂಗಡಿಗಳು, ಎಪಿಎಂಸಿ ಆವರಣದಲ್ಲಿರುವ ಎಲ್ಲಾ ತರಹದ ವ್ಯಾಪಾರಸ್ಥರು ಹಾಗೂ ದಲ್ಲಾಳಿಗಳು, ಆಹಾರ ಪದಾರ್ಥಗಳ ವ್ಯವಹಾರ ನಡೆಸುವ ಔಷಧಿ ಅಂಗಡಿಗಳು, ಬೀದಿ ಬದಿ ವ್ಯಾಪಾರಿಗಳು, ಕಡ್ಡಾಯವಾಗಿ ಆಹಾರ ಸುರಕ್ಷತೆಯ ನೋಂದಣಿ ಮಾಡಿಸಬೇಕು. ಜಿಲ್ಲೆಯಲ್ಲಿ 2225 ಶಾಲೆಗಳಲ್ಲಿ ಈಗಾಗಲೇ 1371 ಶಾಲೆಗಳು ನೋಂದಣಿ ಮಾಡಿಕೊಂಡಿದ್ದು, 1146 ಶಾಲೆಗಳು ನೋಂದಣಿ ಬಾಕಿ ಇವೆ. 2331 ಅಂಗನವಾಡಿ ಕೇಂದ್ರಗಳ ಪೈಕಿ 1367 ಅಂಗನವಾಡಿಗಳು ನೋಂದಣಿಯಾಗಿದ್ದು, 964 ಅಂಗನವಾಡಿಗಳು ಬಾಕಿ ಇವೆ. 607 ನ್ಯಾಯಬೆಲೆ ಅಂಗಡಿಗಳ ಪೈಕಿ 328 ಅಂಗನವಾಡಿಗಳು ನೋಂದಣಿಗೆ ಬಾಕಿ ಇವೆ. ಶಾಲಾ ಮುಖ್ಯ ಶಿಕ್ಷಕರು ಹಾಗೂ ಸಂಬಂಧಪಟ್ಟ ಇಲಾಖೆಯವರು ತಮ್ಮ ಆಧಾರ್‌ಕಾರ್ಡ್ ಹಾಗೂ 100 ರು. ಶುಲ್ಕವನ್ನು ಪಾವತಿಸಿ ತಾಲೂಕು ಆಹಾರ ಸುರಕ್ಷತಾಧಿಕಾರಿಗಳಿಂದ ಕಡ್ಡಾಯವಾಗಿ ಆಹಾರ ಸುರಕ್ಷತೆಯ ನೋಂದಣಿ ಮಾಡಿಸಬೇಕು ಎಂದು ಹೇಳಿದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಸ್ವಾಮಿ, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂದನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Share this article