ಕನ್ನಡಪ್ರಭ ವಾರ್ತೆ ಮಂಗಳೂರುಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ ‘ಮಂಗಳೂರು ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್ 2025’ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 27 ರಂದು ನಗರದ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಚಾಲನೆ ನೀಡಲಿದ್ದಾರೆ.ಈ ಸಂಬಂಧ ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅಧ್ಯಕ್ಷತೆಯಲ್ಲಿ ಕ್ರೀಡಾಕೂಟದ ಪೂರ್ವ ಸಿದ್ಧತಾ ಸಭೆ ನಡೆಯಿತು.
ಈ ಕ್ರೀಡಾಕೂಟದಲ್ಲಿ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಬಿಂಬಿಸುವ ಪ್ರದರ್ಶನ ಹಾಗೂ ಮಾಹಿತಿ ಕೇಂದ್ರ ಸಿದ್ಧಗೊಳಿಸಬೇಕು. ಕ್ರೀಡಾಪಟುಗಳು ಪ್ರವಾಸಿ ತಾಣಗಳಿಗೆ ಹೋಗಲಿಚ್ಛಿಸಿದ್ದಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳು ಪ್ರವಾಸೋದ್ಯಮ ಇಲಾಖೆಗೆ ಸೂಚಿಸಿದರು.
ಕ್ರೀಡಾಪಟುಗಳಿಗೆ ಅಗತ್ಯ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಆರೋಗ್ಯ ಕೇಂದ್ರವನ್ನು ಕ್ರೀಡಾಂಗಣದಲ್ಲಿ ಸಜ್ಜುಗೊಳಿಸಬೇಕು. ಕ್ರೀಡಾ ವೈದ್ಯಕೀಯ ತಜ್ಞರನ್ನು ನಿಯೋಜಿಸುವಂತೆ ಅವರು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಹಾಗೂ ಬ್ಯಾಡ್ಮಿಂಟನ್ ಅಸೋಸಿಯೇಷನ್ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಅವರು ತಿಳಿಸಿದರು.ಉಪ ಪೋಲಿಸ್ ಆಯುಕ್ತ ಮಿಥುನ್ ಎಚ್.ಎನ್, ಸ್ಮಾರ್ಟ್‍ಸಿಟಿ ಎಂ.ಡಿ ಸಂತೋಷ್ ಕುಮಾರ್, ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಮತ್ತಿತರರು ಇದ್ದರು.