ಹುಬ್ಬಳ್ಳಿ: ಕೇಂದ್ರ ಸರ್ಕಾರದ ಅನುದಾನ ಹಾಗೂ ಸ್ಮಾರ್ಟ್ ಸಿಟಿ ಯೋಜನೆಯಡಿ ಒಟ್ಟು ₹180 ಕೋಟಿ ವೆಚ್ಚದಲ್ಲಿ ನಗರದಲ್ಲಿ ನಿರ್ಮಿಸುತ್ತಿರುವ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸಮುಚ್ಚಯ ಕಾಮಗಾರಿ ಮುಕ್ತಾಯ ಹಂತಕ್ಕೆ ತಲುಪಿದ್ದು, ಆಗಸ್ಟ್ ತಿಂಗಳಲ್ಲಿ ಉದ್ಘಾಟನೆಗೆ ಸಿದ್ಧವಾಗಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.
ಎಲ್ಲ ಸೌಲಭ್ಯ ಹೊಂದಿರುವ ದೇಶದ ಮೊಟ್ಟ ಮೊದಲ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸಮುಚ್ಚಯ ಇದಾಗಿದೆ. ಶೇ. 85ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸಲು ಗುತ್ತಿಗೆದಾರನಿಗೆ ಸೂಚಿಸಲಾಗಿದೆ ಎಂದರು.
ಉತ್ತರ ಕರ್ನಾಟಕ ಭಾಗದ ಕ್ರೀಡಾಪಟುಗಳಿಗೆ ಮತ್ತಷ್ಟು ಪ್ರೋತ್ಸಾಹ ಹಾಗೂ ಕ್ರೀಡಾ ಸಂಕೀರ್ಣ ಕಲ್ಪಿಸುವ ನಿಟ್ಟಿನಲ್ಲಿ 16 ಎಕರೆ ವಿಶಾಲವಾದ ಪ್ರದೇಶದಲ್ಲಿ ಅತ್ಯಾಧುನಿಕ ಗುಣಮಟ್ಟದ ಕ್ರೀಡಾ ಸಂರ್ಕೀರ್ಣ ನಿರ್ಮಿಸಲಾಗಿದೆ. ಅಂತಾರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ ಈಜುಗೊಳ, ಬಾಸ್ಕೆಟ್ ಬಾಲ್, ಟೇಬಲ್ ಟೆನ್ನಿಸ್ ಸೇರಿದಂತೆ ಅನೇಕ ಕ್ರೀಡೆಗಳನ್ನು ಆಡುವ ಕ್ರೀಡಾಪಟುಗಳಿಗೆ ಅಗತ್ಯವಾದ ಕ್ರೀಡಾ ಅಂಗಣಗಳು ಇರಲಿಲ್ಲ. ಅನಿವಾರ್ಯವಾಗಿ ಅವರು ದೂರದ ಬೆಂಗಳೂರಿಗೆ ಹೋಗಬೇಕಿತ್ತು. ಅಂತಹ ಕೊರತೆಯನ್ನು ಈ ಕ್ರೀಡಾ ಸಂಕೀರ್ಣ ನೀಗಿಸಲಿದೆ. ಇದಕ್ಕೆ ಸ್ಮಾರ್ಟ್‌ಸಿಟಿ ಯೋಜನೆಯಡಿ ₹172 ಕೋಟಿ ಹಾಗೂ ಕೇಂದ್ರ ಸರ್ಕಾರದ ಖೇಲೋ ಇಂಡಿಯಾದಡಿ ₹8 ಕೋಟಿ ಅನುದಾನ ನೀಡಲಾಗಿದೆ ಎಂದು ಮಾಹಿತಿ ನೀಡಿದರು.ಈಜುಗೊಳ, ಬಾಡ್ಮಿಂಟನ್, ರೈಫಲ್ ಶೂಟಿಂಗ್, ಬಾಸ್ಕೆಟ್‌ಬಾಲ್, ಟೆನ್ನಿಸ್, ಫುಟ್‌ಬಾಲ್, ರನ್ನಿಂಗ್ ಟ್ರ್ಯಾಕ್, ವಾಕಿಂಗ್ ಪಾಥ್ ಸೇರಿದಂತೆ ಒಟ್ಟು (ಒಳಾಂಗಣ ಮತ್ತು ಹೊರಾಂಗಣ ಸೇರಿ) ೧೯ ಕ್ರೀಡೆಗಳಿಗೆ ಸಂಕೀರ್ಣದಲ್ಲಿ ಅವಕಾಶ ಕಲ್ಪಿಸಲಾಗಿದೆ. ಕ್ರೀಡಾಪಟುಗಳಿಗೆ ವಾರ್ಮ್ ಅಪ್, ವಿಶ್ರಾಂತಿ ಗೃಹ, ಶೌಚಾಲಯ ಹಾಗೂ ೪೫೦ ಆಸನದ ಸಭಾಭವನ ಹಾಗೂ ಮ್ಯೂಸಿಕ್ ಆಡಿಟೋರಿಯಂ ನಿರ್ಮಿಸಲಾಗಿದೆ ಎಂದರು.
ಕೇಂದ ಸಚಿವೆ ಖಡ್ಸೆ ಪ್ರಶಂಸೆ:
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿವಿಧ ಯೋಜನೆಯ ಮೂಲಕ ದೇಶದ ನಿರುದ್ಯೋಗ ಸಮಸ್ಯೆ ಹೋಗಲಾಡಿಸಲು ಶ್ರಮಿಸುತ್ತಿದೆ. ಮೆಕ್ ಇನ್ ಇಂಡಿಯಾ, ಸ್ಟಾರ್ಟ್‌ಅಪ್, ಮುದ್ರಾ ಸೇರಿದಂತೆ ಅನೇಕ ಕಾರ್ಯಕ್ರಮದ ಮೂಲಕ ಪ್ರತಿವರ್ಷ ಕೋಟ್ಯಂತರ ಉದ್ಯೋಗ ಸೃಷ್ಟಿ ಮಾಡಲಾಗುತ್ತಿದೆ ಎಂದು ತಿಳಿಸಿದರು.