ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗ ಮತ್ತು ಬೀದರ್‌ನಲ್ಲಿ ಜನಿವಾರ ಧರಿಸಿ ಬಂದ ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಅಧಿಕ ಪ್ರಸಂಗ ಮಾಡಿರುವುದು ಖಂಡನೀಯ.
ಬೆಂಗಳೂರು : ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗ ಮತ್ತು ಬೀದರ್‌ನಲ್ಲಿ ಜನಿವಾರ ಧರಿಸಿ ಬಂದ ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಅಧಿಕ ಪ್ರಸಂಗ ಮಾಡಿರುವುದು ಖಂಡನೀಯ. ಈ ಬಗ್ಗೆ ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.
ಈ ಸಂಬಂಧ ಶುಕ್ರವಾರ ಪ್ರಾಧಿಕಾರದ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ, ಜನಿವಾರಕ್ಕೆ ಸಂಬಂಧಿಸಿದ ಎರಡೂ ಪ್ರತ್ಯೇಕ ಪ್ರಕರಣಗಳನ್ನು ಪ್ರಾಧಿಕಾರ ಗಂಭೀರವಾಗಿ ಪರಿಗಣಿಸಿದೆ. ವಸ್ತ್ರ ಸಂಹಿತೆಯಲ್ಲಿ ಎಲ್ಲಿಯೂ ಜನಿವಾರ ತೆಗೆಸಬೇಕೆಂದು ಹೇಳಿರಲಿಲ್ಲ. ಆದರೂ ಈ ರೀತಿಯ ಅಧಿಕ ಪ್ರಸಂಗ ಮಾಡಿರುವುದು ತಪ್ಪು. ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ಜನಿವಾರದ ಕಾರಣಕ್ಕೆ ಬೀದರ್‌ನ ವಿದ್ಯಾರ್ಥಿ ಗಣಿತ ಪರೀಕ್ಷೆ ಬರೆದಿಲ್ಲ. ಹೀಗಾಗಿ ಆ ವಿದ್ಯಾರ್ಥಿ ನಿಯಮ ಪ್ರಕಾರ ಎಂಜಿನಿಯರಿಂಗ್ ರ್‍ಯಾಂಕ್ ಪಡೆಯಲು ಅರ್ಹನಾಗುವುದಿಲ್ಲ. ಹೀಗಾಗಿ ವಿದ್ಯಾರ್ಥಿಗೆ ಅನ್ಯಾಯವಾಗದ ರೀತಿ ಏನೆಲ್ಲ ಮಾಡಬಹುದು ಎಂಬುದನ್ನು ಉನ್ನತ ಶಿಕ್ಷಣ ಸಚಿವರ ಜತೆ ಚರ್ಚಿಸಿ, ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಶಿವಮೊಗ್ಗ ಮತ್ತು ಬೀದರ್‌ನಲ್ಲಿ ಜನಿವಾರ ಧರಿಸಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ ಹಾಗೂ ಜನಿವಾರ ತೆಗೆಸಿದ ಪ್ರಕರಣಗಳು ಒಪ್ಪುವಂತಹದ್ದಲ್ಲ. ಇದನ್ನು ಖಂಡಿಸುತ್ತೇನೆ. ಘಟನೆಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಜಿಲ್ಲಾದಿಕಾರಿಗಳಿಂದ ವರದಿ ಕೇಳಲಾಗಿದ್ದು, ವರದಿ ಬಂದ ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಘಟನೆಯಲ್ಲಿ ಒಬ್ಬ ವಿದ್ಯಾರ್ಥಿ ಗಣಿತ ಪರೀಕ್ಷೆಯಿಂದ ವಂಚಿತನಾಗಿದ್ದಾನೆ. ವರದಿ ಬಂದ ಬಳಿಕ ಆ ವಿದ್ಯಾರ್ಥಿಗೆ ಮತ್ತೆ ಅವಕಾಶ ನೀಡಲು ಅವಕಾಶಗಳಿವೆಯೇ ಎಂದು ಪರಿಶೀಲಿಸಲಾಗುವುದು.
-ಡಾ। ಎಂ.ಸಿ.ಸುಧಾಕರ್, ಉನ್ನತ ಶಿಕ್ಷಣ ಸಚಿವ.
ಶಿವಮೊಗ್ಗದಲ್ಲಿ ಜನಿವಾರ ಧರಿಸಿದ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆ ಬರೆಯುವುದಕ್ಕೆ ಅಡ್ಡಿ ಮಾಡಿದ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಇಂತಹ ನಿರ್ದೇಶನ ಯಾವ ಇಲಾಖೆಯಲ್ಲೂ ಕೊಡಲು ಅವಕಾಶವಿಲ್ಲ. ಎಲ್ಲ ಸಮುದಾಯಗಳನ್ನೂ ಗೌರವಿಸುವುದು ನಮ್ಮ ಸರ್ಕಾರದ ಧ್ಯೇಯ. ಬೀದರ್‌ನಲ್ಲಿ ಗಣಿತ ಪರೀಕ್ಷೆ ವಂಚಿತ ವಿದ್ಯಾರ್ಥಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವ ಬಗ್ಗೆ ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು.
-ಸಚಿವ ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ.