ಕನ್ನಡಪ್ರಭ ವಾರ್ತೆ ನಾಪೋಕ್ಲು
ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತಮ್ಮನ್ನು ತೊಡಗಿಸಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪ್ರತಿಭಾ ಕಾರಂಜಿ ಕಲೋತ್ಸವ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಮಡಿಕೇರಿ ತಾಲೂಕು ಸಮೂಹ ಸಂಪನ್ಮೂಲ ವ್ಯಕ್ತಿ ಚಿತ್ರಾಪುರ ಹೇಳಿದರು.ಶಾಲಾ ಶಿಕ್ಷಣ ಇಲಾಖೆ, ಎಮ್ಮೆಮಾಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ಎಮ್ಮೆಮಾಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ನಾಪೋಕ್ಲು ಕ್ಲಸ್ಟರಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ತಮ್ಮಲ್ಲಿ ಅಡಗಿರುವ ಸೂಕ್ತ ಪ್ರತಿಭೆಗಳ ಪ್ರದರ್ಶನ ಮಾಡಲಿದ್ದು ಶಿಕ್ಷಕರು ನಿಷ್ಪಕ್ಷಪಾತದಿಂದ ತೀರ್ಪು ನೀಡಬೇಕು. ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳು ತಾಲೂಕು, ಜಿಲ್ಲಾ ಹಂತಗಳಲ್ಲಿ ಪಾಲ್ಗೊಳ್ಳಲು ಅವಕಾಶವಿದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಅಬ್ದುಲ್ ರೆಹಮಾನ್ ಮಾತನಾಡಿ, ಪ್ರತಿಭಾ ಕಾರಂಜಿ ಸ್ಪರ್ಧೆಗಳು ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳನ್ನು ಹೊರತರಲು ಸೂಕ್ತ ವೇದಿಕೆಯಾಗಿದೆ. ಗ್ರಾಮೀಣ ಪ್ರದೇಶಗಳ ಶಾಲೆಗಳಲ್ಲಿ ವಿವಿಧ ಕಲಾ ಪ್ರಕಾರಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಇರುತ್ತಾರೆ ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವುದು ಶಿಕ್ಷಕರ ಕರ್ತವ್ಯವಾಗಿದೆ ಎಂದರು.ಎಮ್ಮೆಮಾಡು ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಪ್ರಸನ್ನ ಕುಮಾರ್, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಲೋಕೇಶ್, ಸಿಆರ್ ಪಿ ಕಲ್ಪನಾ, ಪಡಿಯಾಣಿ ಸರ್ಕಾರಿ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ದಮೇಂದ್ರ, ನಾಪೋಕ್ಲು ಕೆಪಿಎಸ್ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಚಂದ್ರಕಲಾ, ನೇತಾಜಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಉಪಸ್ಥಿತರಿದ್ದರು.ಬಳಿಕ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ಜರುಗಿದವು. ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.