ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ದೇಶವಿರೋಧಿ ಶಕ್ತಿಗಳ ಕೈವಾಡ

KannadaprabhaNewsNetwork |  
Published : Jul 26, 2026, 02:15 AM IST
ಪ್ರಮೋದ ಮುತಾಲಿಕ್. | Kannada Prabha

ಸಾರಾಂಶ

ದೇಶಾದ್ಯಂತ ನಡೆಯುತ್ತಿರುವ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹೋರಾಟಕ್ಕೆ ಶ್ರೀರಾಮಸೇನೆ ಸಂಪೂರ್ಣ ಬೆಂಬಲ ನೀಡುತ್ತದೆ. ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಪ್ರಮೋದ ಮುತಾಲಿಕ್‌ ಹೇಳಿದ್ದಾರೆ.

ಹುಬ್ಬಳ್ಳಿ:

ದೆಹಲಿಯಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಕೆಲವು ದೇಶ ವಿರೋಧಿ ಹಾಗೂ ಅರಾಜಕ ಶಕ್ತಿಗಳು ನುಸುಳಿವೆ. ಕೆಲ ತುಕ್ಡೆ ಗ್ಯಾಂಗ್‌ಗಳು ದೇಶ ವಿಭಜನೆಯ ಪರ ಘೋಷಣೆ ಕೂಗಿವೆ. ಇವುಗಳ ಬಗ್ಗೆ ಕೇಂದ್ರ ತನಿಖಾ ಸಂಸ್ಥೆಗಳು ಸಮಗ್ರ ತನಿಖೆ ನಡೆಸುವಂತೆ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಪ್ರತಿಭಟನೆಯನ್ನು ಕೆಲವು ಪಕ್ಷಗಳು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವ ಪ್ರಯತ್ನಗಳು ನಡೆದಿರುವುದಾಗಿ ಅವರು ದೂರಿದರು.

ದೇಶಾದ್ಯಂತ ನಡೆಯುತ್ತಿರುವ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹೋರಾಟಕ್ಕೆ ಶ್ರೀರಾಮಸೇನೆ ಸಂಪೂರ್ಣ ಬೆಂಬಲ ನೀಡುತ್ತದೆ. ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದರು.

ಕಾಂಗ್ರೆಸ್‌ಗೆ ನೈತಿಕತೆಯಿಲ್ಲ:

ಕಾಂಗ್ರೆಸ್ ಪಕ್ಷವು ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ನೀಡುವ ನೈತಿಕ ಹಕ್ಕಿಲ್ಲ. ದೀರ್ಘಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸಮರ್ಪಕ ಕೊಡುಗೆ ನೀಡಿಲ್ಲ ಎಂದು ಟೀಕಿಸಿದರು. ಹೊಸ ಶಿಕ್ಷಣ ನೀತಿ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕೇಂದ್ರ ಸರ್ಕಾರ ತಂದಿರುವ ಕಾನೂನು ಕ್ರಮಗಳನ್ನು ಸ್ವಾಗತಿಸುವುದಾಗಿ ಹೇಳಿದರು.

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಆರಂಭಿಕ ಹಂತದಲ್ಲೇ ತ್ವರಿತ ಕ್ರಮ ಕೈಗೊಂಡಿದ್ದರೆ ಪರಿಸ್ಥಿತಿ ಇಷ್ಟರ ಮಟ್ಟಿಗೆ ತಲುಪುತ್ತಿರಲಿಲ್ಲ. ಈ ವಿಷಯದಲ್ಲಿ ಕೇಂದ್ರ ಸರ್ಕಾರವೂ ವಿಳಂಬ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ನೋವಿಗೆ ಆರಂಭದಲ್ಲೇ ಸ್ಪಂದಿಸಬೇಕಿತ್ತು ಎಂದು ಹೇಳಿದರು.

ಗಲ್ಲುಶಿಕ್ಷೆ ವಿಧಿಸಿ:

ಅಯೋಧ್ಯೆಯ ರಾಮಮಂದಿರದ ಹುಂಡಿ ಕಳ್ಳತನ ಪ್ರಕರಣದ ಕುರಿತು ಪ್ರತಿಕ್ರಿಯಿಸಿ, ಇದು ಭಕ್ತರ ಭಾವನೆಗಳಿಗೆ ಧಕ್ಕೆ ತಂದಿರುವ ಗಂಭೀರ ಘಟನೆ. ಈ ಪ್ರಕರಣದ ಆರೋಪಿಗಳಿಗೆ ಜೈಲಿಗೆ ಹಾಕುವ ಬದಲು ಗಲ್ಲುಶಿಕ್ಷೆ ಇಲ್ಲವೆ ಗುಂಡಿಕ್ಕಿ ಕೊಲ್ಲಬೇಕೆಂದು ಎಂದರು.

ಸುದ್ದಿಗೋಷ್ಠಿಯಲ್ಲಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಅನ್ನಪ್ಪ ದಿವಟಗಿ, ಮುಖಂಡರಾದ ಶ್ರೀಧರ ಕಲಬುರ್ಗಿ, ರೋಹಿಣಿ ಬನ್ನೂರ, ನಿತಿನ್ ನೇತ್ರಾಣಿ, ಗಣೇಶ್ ಲದ್ವಾ, ವೀರಯ್ಯಸ್ವಾಮಿ ಸಾಲಿಮಠ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಶ್ನೆಪತ್ರಿಕೆ ಸೋರಿಕೆ ಮರುಕಳಿಸದಂತೆ ಕಠಿಣ ಕ್ರಮ: ಜೋಶಿ
ಬರಗಾಲದ ಬೇಗೆಯಲ್ಲಿ ತೋಟಗಾರಿಕೆ ಬೆಳೆಗಾರರು ಕಂಗಾಲು