ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ: ವಿರೂಪಾಕ್ಷಿ ಆರೋಪ

KannadaprabhaNewsNetwork |  
Published : Oct 17, 2026, 01:30 AM IST
16ಕೆಪಿಆರ್‌ಸಿಆರ್‌ 03 : ಜೆಡಿಎಸ್‌ ಜಿಲ್ಲಾಧ್ಯಕ್ಷ ಎಂ.ವಿರೂಪಾಕ್ಷಿ | Kannada Prabha

ಸಾರಾಂಶ

ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಲಾಗಿದ್ದು, ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತಕ್ಷಣ ಲೋಕಾಯುಕ್ತರ ಇಲ್ಲವೇ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಗೆ ಮುಂದಾಗಬೇಕು ಎಂದು ಆಗ್ರಹಿಸಿ ಸೂಕ್ತ ಕ್ರಮ ವಹಿಸಬೇಕು ಎಂದು ಶನಿವಾರ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಎಂ.ವಿರೂಪಾಕ್ಷಿ ಹೇಳಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಲಾಗಿದ್ದು, ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತಕ್ಷಣ ಲೋಕಾಯುಕ್ತರ ಇಲ್ಲವೇ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಗೆ ಮುಂದಾಗಬೇಕು ಎಂದು ಆಗ್ರಹಿಸಿ ಸೂಕ್ತ ಕ್ರಮ ವಹಿಸಬೇಕು ಎಂದು ಶನಿವಾರ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಎಂ.ವಿರೂಪಾಕ್ಷಿ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯವು 2023ರ ಅ.18ರಂದು ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿತ್ತು. ಆರ್ಥಿಕ ಇಲಾಖೆಯ ಅನುಮತಿ ಪಡೆಯದೆ, ನಿಯಮಗಳನ್ನು ಉಲ್ಲಂಘಿಸಿ ಅಂದಿನ ಕುಲಪತಿ ಹನುಮಂತಪ್ಪ ಅವರ ನೇತೃತ್ವದಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ನೇಮಕಾತಿ ಪ್ರಕ್ರಿಯೆಯ ಉದ್ದೇಶ ಮತ್ತು ಅದರಲ್ಲಿನ ಪಾರದರ್ಶಕತೆ ಕುರಿತು ಗಂಭೀರ ಅನುಮಾನಗಳು ಮೂಡಿವೆ ಎಂದು ದೂರಿದರು.

ನೇಮಕಾತಿ ಪ್ರಕ್ರಿಯೆಯಲ್ಲಿ ಅಂದಿನ ಕುಲಪತಿ ಹನುಮಂತಪ್ಪ, ಪ್ರಾಧ್ಯಾಪಕ ಡಾ. ರಾಜಣ್ಣ, ಆಡಳಿತ ಮಂಡಳಿಯ ಸದಸ್ಯರು ಹಾಗೂ ಬೆಂಗಳೂರಿನ ಜಿಕೆವಿಕೆ ಕೇಂದ್ರದ ಪ್ರಾಧ್ಯಾಪಕ ಡಾ.ಸಿದ್ದಯ್ಯ ಪ್ರಮುಖ ಪಾತ್ರ ವಹಿಸಿದ್ದಾರೆ ಎಂಬ ಆರೋಪಗಳಿವೆ. ಹೀಗಾಗಿ ಕುಲಪತಿ, ಪ್ರಾಧ್ಯಾಪಕರು, ಆಡಳಿತ ಮಂಡಳಿ ಮತ್ತು ಆಯ್ಕೆ ಸಮಿತಿಯ ಸದಸ್ಯರು ಸೇರಿದಂತೆ ಸಂಬಂಧಪಟ್ಟ ಎಲ್ಲರ ಪಾತ್ರದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಅಧಿಸೂಚನೆಯ ಪ್ರಕಾರ ಲಿಖಿತ ಪರೀಕ್ಷೆ, ಸಂದರ್ಶನ, ಅಂಕಪಟ್ಟಿ ಹಾಗೂ ಮೀಸಲಾತಿ ರೋಸ್ಟರ್ ಆಧರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿತ್ತು. ಅರ್ಜಿ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಸಲು ವಿಶ್ವವಿದ್ಯಾಲಯದಲ್ಲಿ ಅಗತ್ಯ ವ್ಯವಸ್ಥೆಗಳಿದ್ದರೂ, ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿದ್ದೇಕೆ ಎಂಬ ಪ್ರಶ್ನೆ ಕಳೆದ ಎರಡೂವರೆ ವರ್ಷಗಳಿಂದ ಚರ್ಚೆಯಲ್ಲಿದೆ. ಪರೀಕ್ಷಾ ಕೇಂದ್ರಗಳ ಬದಲಾವಣೆಯ ಹಿಂದಿನ ಕಾರಣಗಳು ಹಾಗೂ ಅದಕ್ಕೆ ಅನುಮತಿ ನೀಡಿದ ಅಧಿಕಾರಿಗಳ ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಯೊಬ್ಬ ಅಭ್ಯರ್ಥಿಗಳಿಂದ ತಲಾ 40 ರಿಂದ 50 ಲಕ್ಷ ರು.ವರೆಗೆ ಲಂಚ ಪಡೆದು ನೇಮಕಾತಿ ಮಾಡಲಾಗಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪರೀಕ್ಷೆ ಬರೆದಿದ್ದ ಇಬ್ರಾಹಿಂ ಎಂಬುವವರಿಂದ 40 ಲಕ್ಷ ನೀಡಿದರೆ ನೇಮಕಾತಿ ಆದೇಶ ಕೊಡಿಸುವುದಾಗಿ ಹಾಗೂ ನಂತರ 10 ಲಕ್ಷ ನೀಡಬೇಕೆಂದು ವಿಶ್ವವಿದ್ಯಾಲಯದಿಂದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇಬ್ರಾಹಿಂ ಅವರು ಕರ್ನಾಟಕ ಲೋಕಾಯುಕ್ತರಿಗೆ ದೂರು ನೀಡಿದ್ದಾರೆ ಎಂದು ತಿಳಿಸಿದರು.

ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್‌ನಲ್ಲಿ ಪ್ರಕರಣ ಉಲ್ಲೇಖವಾಗಿರುವ ಹಿನ್ನೆಲೆಯಲ್ಲಿ, ಅದರ ವಿವರಗಳನ್ನೂ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು. ಲಂಚ ಸ್ವೀಕಾರ ಅಥವಾ ನೇಮಕಾತಿ ಅಕ್ರಮಗಳು ಸಾಬೀತಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಇತರರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳಬೇಕು. ತನಿಖೆ ನಿಷ್ಪಕ್ಷಪಾತವಾಗಿ ನಡೆಯಲು ಪ್ರಕರಣವನ್ನು ಕರ್ನಾಟಕ ಲೋಕಾಯುಕ್ತ ಅಥವಾ ಸ್ವತಂತ್ರ ಉನ್ನತ ಮಟ್ಟದ ತನಿಖಾ ಸಂಸ್ಥೆಗೆ ವಹಿಸಬೇಕು. ಅಕ್ರಮಗಳು ದೃಢಪಟ್ಟರೆ ನೇಮಕಾತಿ ಆದೇಶಗಳನ್ನು ರದ್ದುಗೊಳಿಸಿ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ, ಆದಿರಾಜ, ಶರಣಗೌಡ, ರಾಮು ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಸನದಲ್ಲಿ ಧಾರಾಕಾರ ಮಳೆ ಹಿನ್ನೆಲೆ ರೈತರಿಗೆ ಸಂತಸ
ತಾರ್ಕಿಕ ಚಿಂತನೆ ಹಾಗೂ ಸಮಸ್ಯೆ ಪರಿಹರಿಸುವ ಕೌಶಲ ಬೆಳೆಸಿಕೊಳ್ಳಿ