ಡೈರಿ ಚುನಾವಣೆಯಲ್ಲಿ ಅಕ್ರಮ: ಹಾಲು ಉತ್ಪಾದಕರ ಪ್ರತಿಭಟನೆ

KannadaprabhaNewsNetwork | Published : Jan 24, 2024 2:02 AM

ಸಾರಾಂಶ

ಡೈರಿ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಶ್ರವಣಬೆಳಗೊಳ ಹೋಬಳಿಯ ಕಬ್ಬಾಳು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಮಂಗಳವಾರ ನಡೆದಿದೆ.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಡೈರಿ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಶ್ರವಣಬೆಳಗೊಳ ಹೋಬಳಿಯ ಕಬ್ಬಾಳು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಮಂಗಳವಾರ ನಡೆದಿದೆ. ಚುನಾವಣೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಸಹಕಾರಿ ಸಂಘದ ಹಾಲು ಉತ್ಪಾದಕ ಮಲ್ಲೇಶ್ ಮಾತನಾಡಿ, ಪ್ರತಿ ದಿನ ೫೦ ರಿಂದ ೬೦ ಲೀಟರ್ ಹಾಲನ್ನು ನಮ್ಮ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಹಾಲು ನೀಡುತ್ತಿದ್ದೇನೆ. ಆದರೆ ಕಾರ್ಯದರ್ಶಿ ಮತ್ತು ಅಧ್ಯಕ್ಷರು ಸೇರಿಕೊಂಡು ಬಾರಿ ಅವ್ಯವಹಾರ ನಡೆಸುತ್ತಿದ್ದಾರೆ.

ಚುನಾವಣೆಯನ್ನು ಸೋಮವಾರ ನಡೆಸಲು ಅಧಿಕಾರಿಗಳು ತಿಳಿಸಿದ್ದರು. ಆದರೆ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಣೆ ಮಾಡದೆ ರಾತ್ರೋರಾತ್ರಿ ಅವರಿಗೆ ಇಷ್ಟಬಂದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡು ಯಾವುದೇ ಮತದಾನ ನಡೆಯದೆ ಅವಿರೋಧ ಆಯ್ಕೆಯಾಗಿದೆ ಎಂದು ಸುಳ್ಳು ಹೇಳಿ ಡೈರಿ ಕಾರ್ಯದರ್ಶಿ ಹಾಗೂ ಅಧ್ಯಕ್ಷರು ಏಕನಿರ್ಣಯ ತೆಗೆದುಕೊಂಡಿರುವುದು ಸರಿಯಲ್ಲ. ಡೈರಿಯಲ್ಲಿ ಸಾಕಷ್ಟು ಅಕ್ರಮಗಳು ನಡೆದಿದ್ದು ತನಿಖೆ ಮೂಲಕ ಬೆಳಕಿಗೆ ಬರಬೇಕು ಎಂದು ಆಗ್ರಹಿಸಿದರು. ಇದೇ ಸಂದರ್ಭದಲ್ಲಿ ಗ್ರಾಮದ ನವೀನ್ ಮಾತನಾಡಿ, ಚುನಾವಣೆ ಹೆಸರಿನಲ್ಲಿ ನಾವುಗಳು ಒಮ್ಮತದಿಂದ ಚುನಾವಣೆ ನಡೆಸಲು ನಿರ್ದರಿಸಿದ್ದೆವು ಆದರೆ ಸ್ಥಳೀಯ ಚುನಾವಣಾ ಅಧಿಕಾರಿಗಳು ಗೋಲ್ಮಾಲ್ ಮಾಡಿ ಚುನಾವಣೆಯನ್ನು ಮುಂದೂಡಬೇಕು ಎಂಬ ಉದ್ದೇಶದಿಂದ ಚುನಾವಣೆಯನ್ನು ಅಕ್ರಮವಾಗಿ ನಡೆಸುತ್ತಿದ್ದಾರೆ ಇದರಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಯಾವುದೇ ರೀತಿಯ ಲಾಭಾಂಶವನ್ನು ನೀಡದೆ ಬಾರಿ ನಷ್ಟವನ್ನೇ ಉಂಟು ಮಾಡಿದ್ದಾರೆ. ಚುನಾವಣೆಯಲ್ಲಿ ಎಲ್ಲರ ಸಮ್ಮುಖದಲ್ಲಿ ನಡೆಸಿ ಪಾದರ್ಶಕವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಇಲ್ಲದಿದ್ದರೆ ಮುಂದಿದ ದಿನಗಳಲ್ಲಿ ಡೈರಿ ಮುಂದೆ ಉಗ್ರ ಹೋರಾಟ ನಡೆಸಲಾಗುವುದು ಎಂದರು. ಡೈರಿ ಕಾರ್ಯದರ್ಶಿ ಹಾಗೂ ರೈತರ ನಡುವೆ ಕೆಲ ಕಾಲ ಮಾತಿನ ಚಕಮಕಿ ನಡೆದು ಪೊಲೀಸರ ಸಮ್ಮುಖದಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿ ಪರಿಸ್ಥಿತಿ ತಿಳಿಗೊಳಿಸಲಾಯಿತು.

Share this article