ಇಂದು ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿ ತುರ್ತು ಸಭೆ

KannadaprabhaNewsNetwork |  
Published : Nov 18, 2026, 02:15 AM IST
ಫೋಟೋ ನೀರಾವರಿ ಇಲಾಖೆಯ ಮುಖ್ಯ ಅಭಿಯಂತರರಾದ ಮನೋಜ್ ಕುಮಾರ್ ಹಸಿರು ಶಾಲು ಹಾಕಿಕೊಂಡು ರೈತರೊಂದಿಗೆ ಚರ್ಚಿಸುತ್ತಿರುವ ದೃಶ್ಯ. | Kannada Prabha

ಸಾರಾಂಶ

ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಡಿಸೆಂಬರ್ 15ರ ವರೆಗೆ ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ನ.18 ರಂದು ಬೆಂಗಳೂರಿನ ವಿಕಾಸಸೌಧದಲ್ಲಿ ನೀರಾವರಿ ಸಲಹಾ ಸಮಿತಿಯ ತುರ್ತು ಸಭೆ ಕರೆಯಲಾಗಿದೆ.

ಡಿ.15ರ ವರೆಗೆ ನೀರು ಹರಿಸಲು ರೈತರ ಆಗ್ರಹ: ಜಲಾಶಯದಲ್ಲಿ 28 ಟಿಎಂಸಿ ನೀರು ಮಾತ್ರ ಸಂಗ್ರಹಕನ್ನಡಪ್ರಭ ವಾರ್ತೆ ಮುನಿರಾಬಾದ್

ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಡಿಸೆಂಬರ್ 15ರ ವರೆಗೆ ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ನ.18 ರಂದು ಬೆಂಗಳೂರಿನ ವಿಕಾಸಸೌಧದಲ್ಲಿ ನೀರಾವರಿ ಸಲಹಾ ಸಮಿತಿಯ ತುರ್ತು ಸಭೆ ಕರೆಯಲಾಗಿದೆ ಎಂದು ನೀರಾವರಿ ಇಲಾಖೆಯ ಅಧೀಕ್ಷಕ ಅಭಿಯಂತರ ಶ್ರೀನಿವಾಸ ಮಲ್ಲಿಗವಾಡ ತಿಳಿಸಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.ಅಚ್ಚುಕಟ್ಟು ಪ್ರದೇಶದ ಸಾವಿರಾರು ರೈತರು ಡಿಸೆಂಬರ್ 15ರವರೆಗೆ ನೀರು ಹರಿಸುವಂತೆ ಒತ್ತಾಯಿಸಿ ಸೋಮವಾರದಿಂದ ಮುನಿರಾಬಾದ್‌ನ ನೀರಾವರಿ ಇಲಾಖೆ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತುರ್ತು ಸಭೆ ಕರೆಯಲಾಗಿದೆ.

ಜಲಾಶಯದಲ್ಲಿ 28 ಟಿಎಂಸಿ ನೀರು:

ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 1604.80 ಅಡಿ ನೀರಿನ ಮಟ್ಟವಿದ್ದು, 28 ಟಿಎಂಸಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ದಿನ ಜಲಾಶಯದ ನೀರಿನ ಮಟ್ಟ 1624.50 ಅಡಿ ಇದ್ದು, 74 ಟಿಎಂಸಿ ನೀರು ಸಂಗ್ರಹವಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ 46 ಟಿಎಂಸಿ ನೀರಿನ ಕೊರತೆಯಿದೆ.

ಪ್ರಸ್ತುತ ಸಂಗ್ರಹವಿರುವ 28 ಟಿಎಂಸಿ ನೀರಿನಲ್ಲಿ ಆಂಧ್ರಪ್ರದೇಶದ ಪಾಲು 12 ಟಿಎಂಸಿ, ಕರ್ನಾಟಕದ ಪಾಲು 10.220 ಟಿಎಂಸಿ ಆಗಿದೆ. ಉಳಿದ ಸುಮಾರು 6 ಟಿಎಂಸಿ ನೀರನ್ನು ಡೆಡ್ ಸ್ಟೋರೇಜ್ ಹಾಗೂ ಆವಿಯಾಗುವಿಕೆಗಾಗಿ ಮೀಸಲಿಡಲಾಗಿದೆ.

ಕರ್ನಾಟಕದ ಪಾಲಿನ 10.220 ಟಿಎಂಸಿ ನೀರನ್ನು ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಮುಂದಿನ ವರ್ಷದ ಜುಲೈವರೆಗಿನ ಕುಡಿಯುವ ನೀರಿನ ಅಗತ್ಯಕ್ಕಾಗಿ ಮೀಸಲಿಡಲಾಗಿದೆ. ಆಂಧ್ರಪ್ರದೇಶದ ಪಾಲಿನ 12 ಟಿಎಂಸಿ ನೀರಿನಲ್ಲಿ 4 ಟಿಎಂಸಿ ನೀರನ್ನು ಬಳಕೆ ಮಾಡಲು ಅನುಮತಿ ನೀಡುವಂತೆ ಕರ್ನಾಟಕ ಸರ್ಕಾರ ಆಂಧ್ರಪ್ರದೇಶಕ್ಕೆ ಪತ್ರ ಬರೆದಿದೆ.

ಆಂಧ್ರಪ್ರದೇಶ ಸರ್ಕಾರ ತನ್ನ ಪಾಲಿನ 4 ಟಿಎಂಸಿ ನೀರನ್ನು ಕರ್ನಾಟಕ ಬಳಕೆ ಮಾಡಲು ಅನುಮತಿ ನೀಡಿದರೆ ಅಚ್ಚುಕಟ್ಟು ಪ್ರದೇಶದ ಲಕ್ಷಾಂತರ ರೈತರ ಬೆಳೆಗಳನ್ನು ಉಳಿಸಲು ಅನುಕೂಲವಾಗಲಿದೆ ಎಂಬ ನಿರೀಕ್ಷೆ ರೈತರಲ್ಲಿದೆ.

ಒಂದೆಡೆ ನೀರಿಗಾಗಿ ರೈತರ ಪ್ರತಿಭಟನೆ, ಮತ್ತೊಂದೆಡೆ ಜಲಾಶಯದಲ್ಲಿ ನೀರಿನ ತೀವ್ರ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಬುಧವಾರ ನಡೆಯಲಿರುವ ನೀರಾವರಿ ಸಲಹಾ ಸಮಿತಿ ಸಭೆ ಮಹತ್ವ ಪಡೆದುಕೊಂಡಿದೆ. ಸಭೆಯಲ್ಲಿ ಕೈಗೊಳ್ಳುವ ನಿರ್ಧಾರದತ್ತ ಅಚ್ಚುಕಟ್ಟು ಪ್ರದೇಶದ ಲಕ್ಷಾಂತರ ರೈತರು ಕುತೂಹಲದಿಂದ ಕಾಯುತ್ತಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡಿ
ವಿಶ್ವಮಟ್ಟದ ಶ್ರೇಷ್ಠ ವಾಸ್ತುಶಿಲ್ಪಗಳ ತಾಣ ವಿಜಯಪುರ