ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ನೀರಾವರಿ ಕಚೇರಿಗೆ ಮುತ್ತಿಗೆ

KannadaprabhaNewsNetwork | Published : Jun 30, 2024 12:45 AM

ಸಾರಾಂಶ

ಕಳೆದ ವರ್ಷ ಬರಗಾಲದಿಂದ ನೀರಿಲ್ಲದೇ ಎರಡು ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಬೆಳೆಯಲು ಸಾಧ್ಯವಾಗಲಿಲ್ಲ. ಇದ್ದ ನೀರು ತಮಿಳುನಾಡಿಗೆ ಬಿಡಲಾಯಿತು. ಕೃಷ್ಣರಾಜಸಾಗರ ಅಚ್ಚುಕಟ್ಟು ಪ್ರದೇಶದ ವಿಸಿ ನಾಲೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಆದರೆ ಕಾಮಗಾರಿ ಮಂದಗತಿಯಲ್ಲಿ ಸಾಗಿದ್ದು, ನಾಲೆಗಳಿಗೆ ನೀರುಹರಿಸಲು ಸರ್ಕಾರ ಕಾಮಗಾರಿಯ ನೆಪ ಹೇಳುತ್ತಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಕೆಆರ್ ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸದೇ ವಿಳಂಬ ಮಾಡುತ್ತಿರುವ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಕಾವೇರಿ ನೀರಾವರಿ ನಿಗಮ ಕಚೇರಿಗೆ ನುಗ್ಗಲು ಯತ್ನಿಸಿದರು.

ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ನಿಗಮದ ಕಚೇರಿ ತೆರಳಿದ ಪಕ್ಷದ ಕಾರ್ಯಕರ್ತರು ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು. ನಂತರ ಕಚೇರಿಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಗೇಟ್ ಮುಚ್ಚಿ ಕಾರ್ಯಕರ್ತರನ್ನು ತಡೆದಿದ್ದರಿಂದ ಕೆಲಕಾಲ ಕಚೇರಿ ಎದುರು ಧರಣಿ ನಡೆಸಿದರು.

ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್ ಮಾತನಾಡಿ, ಕಳೆದ ವರ್ಷ ಬರಗಾಲದಿಂದ ನೀರಿಲ್ಲದೇ ಎರಡು ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಬೆಳೆಯಲು ಸಾಧ್ಯವಾಗಲಿಲ್ಲ. ಇದ್ದ ನೀರು ತಮಿಳುನಾಡಿಗೆ ಬಿಡಲಾಯಿತು. ಕೃಷ್ಣರಾಜಸಾಗರ ಅಚ್ಚುಕಟ್ಟು ಪ್ರದೇಶದ ವಿಸಿ ನಾಲೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಆದರೆ ಕಾಮಗಾರಿ ಮಂದಗತಿಯಲ್ಲಿ ಸಾಗಿದ್ದು, ನಾಲೆಗಳಿಗೆ ನೀರುಹರಿಸಲು ಸರ್ಕಾರ ಕಾಮಗಾರಿಯ ನೆಪ ಹೇಳುತ್ತಿದೆ ಎಂದು ದೂರಿದರು.

ರಾಜ್ಯದಲ್ಲಿ 824 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಸಂಖ್ಯೆ ಹೆಚ್ಚು ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ರೈತರ ಬಗ್ಗೆ ಕಾಳಜಿ ತೋರದೆ ಸಹೋದರ ಅಥವಾ ಮಗಳನ್ನು ಶಾಸಕರನ್ನಾಗಿ ಮಾಡಲು ರಾಜಕಾರಣದಲ್ಲಿ ನಿರತರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಮಾನ ಮರ್ಯಾದೆ ಇಲ್ಲದಾಗಿದೆ. ನಾಲೆಗಳಿಗೆ ನೀರು ಬಿಡುವ ಬಗ್ಗೆ ಚಿಂತಿಸುತ್ತಿಲ್ಲ. ಕೂಡಲೇ ಕಾಮಗಾರಿ ಸ್ಥಗಿತಗೊಳಿಸಿ, ಯಾವ ದಿನ ನಾಲೆಗಳಿಗೆ ನೀರು ಹರಿಸುತ್ತೇವೆ ಎಂದು ತಿಳಿಸಬೇಕು. ಸಂಕಷ್ಟದಲ್ಲಿರುವ ರೈತರ ಹಿತ ಕಾಪಾಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ನಿಗಮದ ಸಹಾಯಕ ಕಾರ್ಯಪಾಲಕ ಅಭಿಯಂತರ ವಿಶ್ವನಾಥ್ ಪ್ರತಿಭಟನಾಕಾರರ ಮನವಿ ಸ್ವೀಕರಿಸಿ, ಕೃಷ್ಣರಾಜಸಾಗರಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. 12 ಕಿಮೀ ನಾಲಾ ಅಭಿವೃದ್ಧಿ ಕಾಮಗಾರಿ ಬಾಕಿ ಇದೆ, ಜುಲೈ ಮೊದಲ ವಾರದಲ್ಲಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ ನಾಲೆಗಳಿಗೆ ನೀರು ಬಿಡುವ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಕೈ ಬಿಟ್ಟರು.

Share this article